ಜಿಲ್ಲೆ

ವಸತಿ ರಹಿತರಿಗೆ ಶೀಘ್ರವೇ ನಿವೇಶನ ಹಂಚಿಕೆಗೆ ಕ್ರಮ

ರಮೇಶ ಜಹಗೀರದಾರ್

ದಾವಣಗೆರೆ : ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳ ಆಯ್ಕೆ ಮಾಡಿ ಮಂಜೂರಾತಿ ಪತ್ರ ಮತ್ತು ನಿವೇಶನ ರಹಿತರಿಗೆ ಹಕ್ಕುಪತ್ರ ನೀಡಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅಧಿಕಾರಿಗಳಿಗೆ ಸೂಚಿಸಿದರು.
 ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ  ಮಂಗಳವಾರ, ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
 ಈ ಯೋಜನೆಯಡಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 966 ವಸತಿ ರಹಿತರಿಗೆ ಶೀಘ್ರವೇ ನಿವೇಶನ ಹಂಚಿಕೆ ಮಾಡಿ ಹಕ್ಕುಪತ್ರ ನೀಡಬೇಕು. ನಿವೇಶನ ಹಂಚಿಕೆ ಕುರಿತಂತೆ ಕೆಲವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಬಗ್ಗೆ ಪಾಲಿಕೆ ಆಯುಕ್ತರು ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದಾರೆ. ವಾರದಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲು ತಿಳಿಸಿದರು.
 ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ 2021-22ನೇ ಸಾಲಿನಲ್ಲಿ ನೀಡಲಾದ 2884 ಗುರಿಯಲ್ಲಿ ಎಲ್ಲ ಗ್ರಾ.ಪಂ.ಗಳಿಂದ ಫಲಾನುಭವಿಗಳನ್ನು ಆಯ್ಕೆ ಮಾಡಿ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿ.ಪಂ. ಸಿಇಒ ಸುರೇಶ ಇಟ್ನಾಳ್ ಸಭೆಗೆ ತಿಳಿಸಿದರು.
 ಜಲಜೀವನ್ ಮಿಷನ್ ಯೋಜನೆಯಡಿ 870 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಇದುವರೆಗೆ 500 ಮುಕ್ತಾಯವಾಗಿವೆ. ಈ ವರ್ಷ ಮಳೆಯ ಕೊರತೆಯಿಂದಾಗಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಬಹುದು. ಆದಷ್ಟು ಬೇಗನೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸಿದ್ದೇಶ್ವರ ಹೇಳಿದರು.
 ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಫಸಲ್ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ 47247 ರೈತರ ನೋಂದಣಿ ಮಾಡಿದ್ದಾರೆ. ಈ ವರ್ಷ ಶೇ. 100 ರಷ್ಟು ಬೆಳೆ ಪರಿಹಾರ ರೈತರಿಗೆ ಸಿಗಬೇಕು, ಈ ನಿಟ್ಟಿನಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
 ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 49 ವೆಂಟಿಲೇಟರ್‌ಗಳಿದ್ದು, ಅದರಲ್ಲಿ 21 ಯಾವುದೇ ತೊಂದರೆ ಇಲ್ಲದಂತೆ ಕಾರ್ಯ ನಿರ್ವಹಿಸುತ್ತಿವೆ. ಉಳಿದ ವೆಂಟಿಲೇಟರ್‌ಗಳನ್ನು ಸಣ್ಣ ಪುಟ್ಟ ರಿಪೇರಿ ಮಾಡಿಸಿ ಉಪಯೋಗಿಸಬೇಕು. ದುರಸ್ತಿಯಾಗದ ವೆಂಟಿಲೇಟರ್‌ಗಳನ್ನು ಕಂಪನಿಗಳಿಗೆ ಹಿಂದಿರುಗಿಸಬೇಕು. ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ವೆಂಟಿಲೇಟರ್ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾ ಸರ್ಜನ್‌ಗೆ ತಿಳಿಸಿದರು.
 ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್, ದಿಶಾ ಸಮಿತಿ ಸದಸ್ಯರು ಇದ್ದರು.