ದಾವಣಗೆರೆ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ (ಸಾಮಾನ್ಯ) ಪ್ರತಿ ಕ್ವಿಂಟಾಲ್ಗೆ 2300 ರೂ. ಹಾಗೂ ಎ ಗ್ರೇಡ್‌ಗೆ 2320 ರೂ. ನಂತೆ ಹಾಗೂ ರಾಗಿ ಪ್ರತಿ ಕ್ವಿಂಟಾಲ್ಗೆ 4290 ರೂ. ನಂತೆ ಖರೀದಿಸಲು ತಾಲೂಕು ಕೇಂದ್ರಗಳಲ್ಲಿ ನೋಂದಣಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ. ನೋಂದಣಿ ಕೇಂದ್ರಗಳು : ದಾವಣಗೆರೆ, ಹೊನ್ನಾಳ್ಳಿ, ಜಗಳೂರು, ಹರಿಹರ ಮತ್ತು ಚನ್ನಗಿರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಆವರಣದಲ್ಲಿ ಕೃಷಿ ಇಲಾಖೆಯವರು ಸಿದ್ಧಪಡಿಸಿದ ಫ್ರೂಟ್ ತಂತ್ರಾಂಶದಲ್ಲಿ ನಮೂದಿಸಿರುವ ಬೆಳೆಯ ಆಧಾರದ ಮೇಲೆ ರೈತರ ಹೆಸರನ್ನು ನೋಂದಾಯಿಸಿಕೊಳ್ಳಲಾಗುವುದು. ಫ್ರೂಟ್ ತಂತ್ರಾಂಶದಲ್ಲಿ ತೊಂದರೆ ಇದ್ದಲ್ಲಿ ಹತ್ತಿರವಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಸರಿಪಡಿಸಿಕೊಂಡು ನೋಂದಣಿ ಮಾಡಿಕೊಳ್ಳಲು ತಿಳಿಸಿದೆ. ನೊಂದಣಿ ಆರಂಭವಾಗಿದ್ದು 2025 ರ ಜನವರಿಯಿಂದ ಮಾರ್ಚ್ ಅಂತ್ಯದ ವರೆಗೆ ಖರೀದಿಸಲಾಗುವುದು ಎಂದಿದ್ದಾರೆ. ರೈತರು ಕೃಷಿ ಇಲಾಖೆ ನೀಡಿರುವ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ ಫ್ರೂಟ್ ನೋಂದಣಿ ಕೇಂದ್ರಕ್ಕೆ ಬಂದು ಬಯೋಮೆಟ್ರಿಕ್ ಸಾಧನದ ಮುಖಾಂತರ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಫ್ರೂಟ್ಸ್ ದತ್ತಾಂಶದಲ್ಲಿ ರೈತರು ನೀಡಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ನೇರವಾಗಿ ಹಣ ಸಂದಾಯ ಮಾಡಲಾಗುವುದು. ಆದ್ದರಿಂದ ರೈತರು ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಆಗಿರುವುದನ್ನು ಮತ್ತು ಎನ್‌ಪಿಸಿಎಲ್ ಮ್ಯಾಪಿಂಗ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಖರೀದಿ ಕೇಂದ್ರಕ್ಕೆ ಆಧಾರ್ ಕಾರ್ಡ್, ಪಹಣಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನು ನೀಡಬೇಕು. ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್ನಂತೆ ಗರಿಷ್ಠ 20 ಕ್ವಿಂಟಾಲ್ ರಾಗಿಯನ್ನು ಮತ್ತು ಪ್ರತಿ ಎಕರೆಗೆ 25 ಕ್ವಿಂಟಾಲ್ನಂತೆ ಗರಿಷ್ಠ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು. ಖರೀದಿಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ತಹಸೀಲ್ದಾರರು, ಉಪ ವಿಭಾಗಾಧಿಕಾರಿ, ಜಂಟಿ ನಿರ್ದೇಶಕರು (ಆಹಾರ), ಹಾಗೂ ಕೃಷಿ ಮಾರುಕಟ್ಟೆ ಅಧಿಕಾರಿಗಳ ಗಮನಕ್ಕೆ ತರಬಹುದು. ಅಥವಾ ದೂರವಾಣಿ ಸಂಖ್ಯೆ -08192-296770 ಗೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.