ಜಿಲ್ಲೆ

ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ

ರಮೇಶ ಜಹಗೀರದಾರ್

ದಾವಣಗೆರೆ : ದಾವಣಗೆರೆಯಲ್ಲಿ ದೊಡ್ಡ ಪತ್ರಿಕಾ ಭವನ ನಿರ್ಮಾಣಕ್ಕೆ ಬೇಕಾದ ಸಹಕಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭರವಸೆ ನೀಡಿದರು.  ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ನಗರದ ಕುವೆಂಪು ಕನ್ನಡ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.  ಪತ್ರಿಕಾ ಭವನಕ್ಕೆ ಈಗಾಗಲೇ ನಿವೇಶನ ದೊರಕಿದೆ. ಅದನ್ನು ರಿಯಾಯಿತಿ ದರದಲ್ಲಿ ಒದಗಿಸುವ ವಿಷಯ ಸಚಿವ ಸಂಪುಟ ಸಭೆಯ ಮುಂದಿದೆ. ಆ ಕೆಲಸ ಮಾಡಿಸಲು ಸರ್ಕಾರದ ಮಟ್ಟದಲ್ಲಿ ಮತ್ತು ಸ್ಥಳೀಯವಾಗಿ ಅಗತ್ಯ ಸಹಕಾರ ನೀಡುವುದಾಗಿ ಹೇಳಿದರು.  ಎಸ್.ಎಸ್. ಜನಕಲ್ಯಾಣ ಟ್ರಸ್ಟ್‌ನಿಂದ ಪತ್ರಕರ್ತರ ಮಕ್ಕಳ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡಲಾಗುತ್ತಿದ್ದು ಅದರ ಪ್ರಯೋಜನ ಪಡೆಯುವಂತೆ ತಿಳಿಸಿದರು.  ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಪತ್ರಕರ್ತರ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಪತ್ರಕರ್ತರೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಹಿಂದೆ ನಗರದಲ್ಲಿ ನಡೆದಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪು ಮಾಡಿಕೊಂಡರು. ಜಿಲ್ಲೆಯಲ್ಲಿ ಎಚ್.ಎನ್. ಷಡಾಕ್ಷರಪ್ಪ, ಸಿ. ಕೇಶವ ಮೂರ್ತಿ, ಪಂಪಾಪತಿ ಇನ್ನಿತರ ಹಿರಿಯರು ಪತ್ರಿಕೋದ್ಯಮಕ್ಕೆ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು.  ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮಾತನಾಡಿ, ಇತ್ತೀಚೆಗೆ ಸೆಲೆಬ್ರಿಟಿಯೊಬ್ಬ ಕೊಲೆ ಆರೋಪ ಎದುರಿಸುತ್ತಿರುವ ಸುದ್ದಿಯೇ ಮಾಧ್ಯಮಗಳಲ್ಲಿ ಹೆಚ್ಚಾಗಿ ಬಿಂಬಿತವಾಗುತ್ತಿದೆ. ಕೊಲೆಯಾದ ವ್ಯಕ್ತಿಯ ಕುಟುಂಬದವರ ಸ್ಥಿತಿ ಈಗ ಏನಾಗಿದೆ ಎಂಬುದರ ಬಗ್ಗೆ ಮಾನವಾಸಕ್ತಿಯ ವರದಿಗಳು ಬರಬೇಕು ಎಂದು ಸಲಹೆ ನೀಡಿದರು.  ಊಹಾ ಪತ್ರಿಕೋದ್ಯಮದಿಂದ ನಕಾರಾತ್ಮಕ ಪರಿಣಾಮವಾಗುತ್ತದೆ. ವಿಶ್ವಾಸಾರ್ಹತೆ ಕಾಪಾಡಿಕೊಂಡು ಹೋಗಬೇಕಿದೆ. ಮಾಧ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನದ ಸವಾಲು ಎದುರಾಗಿದೆ. ಮುಂಬರುವ ದಿನಗಳಲ್ಲಿ ಸುದ್ದಿ ವಾಹಿನಿಗಳಲ್ಲಿ ಎಐ ಆ್ಯಂಕರ್‌ಗಳು ಬರುವ ಸಾಧ್ಯತೆಯಿದೆ ಎಂದು ಹೇಳಿದರು.  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಹಲವು ವರ್ಷಗಳ ಕನಸು ನನಸಾಗಿದೆ. ಇದನ್ನು ದೊಡ್ಡದಾಗಿ ಸಂಭ್ರಮಿಸೋಣ ಎಂದರು.  ಕನ್ನಡ ಪತ್ರಿಕೋದ್ಯಮದ ಇತಿಹಾಸವನ್ನು ಜಿಲ್ಲಾವಾರು ದಾಖಲಿಸಬೇಕು ಎನ್ನುವ ಪ್ರೊ.ಬಿ.ಕೆ. ರವಿ ಅವರ ಸಲಹೆಯನ್ನು ಪರಿಶೀಲಿಸಲಾಗುವುದು. ಮಾಧ್ಯಮ ಅಕಾಡೆಮಿಯ ಜತೆಗೂಡಿ ಆ ಕೆಲಸ ಮಾಡಲು ಚಿಂತನೆ ನಡೆಸಲಾಗುವುದು ಎಂದು ಹೇಳಿದರು.  ಸಮಾಜದಲ್ಲಿ ಸುಳ್ಳು ಪತ್ರಕರ್ತರು ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ವೃತ್ತಿಯ ಬದ್ಧತೆ ಬೆಳೆಸಿಕೊಳ್ಳಬೇಕು, ವಿಶ್ವಾಸಾರ್ಹತೆ ಉಳಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.  ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ಪ್ರಾಸ್ತಾವಿಕ ಮಾತನಾಡಿದರು. ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಜಿಲ್ಲಾ ವಾರ್ತಾಧಿಕಾರಿ ಬಿ. ಧನಂಜಯಪ್ಪ, ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಕಾರ್ಯದರ್ಶಿ ನಿಂಗಪ್ಪ ಚಾವಡಿ, ರಾಜ್ಯ ಸಮಿತಿ ಸದಸ್ಯ ಕೆ. ಚಂದ್ರಣ್ಣ, ಎಸ್.ಕೆ. ಒಡೆಯರ್, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ ಬಡದಾಳ್, ಹಿರಿಯ ಪತ್ರಕರ್ತರಾದ ಬಿ.ಎನ್. ಮಲ್ಲೇಶ್, ಎಚ್.ಬಿ. ಮಂಜುನಾಥ್, ಸಂಘದ ಜಿಲ್ಲಾ ಖಜಾಂಚಿ ಎನ್.ವಿ. ಬದರಿನಾಥ್, ವಿ. ಲಿಂಗರಾಜು ಇದ್ದರು.  ಎ. ಫಕೃದ್ದೀನ್ ಸ್ವಾಗತಿಸಿದರು. ಮಲ್ಲಿಕಾರ್ಜುನ ನಿರೂಪಿಸಿದರು. ಇದೇ ವೇಳೆ ವಿಜಯವಾಣಿ ಚನ್ನಗಿರಿ ವರದಿಗಾರ ಟಿ.ಎನ್. ಜಗದೀಶ್ ಸೇರಿದಂತೆ ವಿವಿಧ ಪತ್ರಕರ್ತರಿಗೆ ‘ಮಾಧ್ಯಮ ಮಾಣಿಕ್ಯ’ ಪ್ರಶಸ್ತಿ ಪ್ರದಾನ ಮಾಡಲಾಯಿತು.  ...  (ಬಾಕ್ಸ್)  ಪತ್ರಿಕೋದ್ಯಮದ ಇತಿಹಾಸ ದಾಖಲಾಗಲಿ  ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ. ರವಿ ವಿಶೇಷ ಉಪನ್ಯಾಸ ನೀಡಿ, ಕನ್ನಡ ಪತ್ರಿಕೋದ್ಯಮದ ಇತಿಹಾಸವನ್ನು ಜಿಲ್ಲಾವಾರು ದಾಖಲಿಸಬೇಕು. ಪತ್ರಕರ್ತರಿಗೆ ಆರೋಗ್ಯ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಸಲಹೆ ನೀಡಿದರು.  ಮುದ್ರಣ ಮಾಧ್ಯಮಕ್ಕೆ ಇನ್ನೂ 3 ದಶಕಗಳ ಭವಿಷ್ಯವಿದೆ. ಡಿಜಿಟಲ್ ತಂತ್ರಜ್ಞಾನ ಅಥವಾ ಕೃತಕ ಬುದ್ಧಿಮತ್ತೆಯಿಂದ ಪತ್ರಿಕೋದ್ಯಮಕ್ಕೆ ಧಕ್ಕೆಯಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪತ್ರಕರ್ತರಿಗೆ ಸಾಮಾಜಿಕ ಹೊಣೆಗಾರಿಕೆ ಇರಬೇಕು ಎಂದು ತಿಳಿಸಿದರು.  ಹಳೇ ಮೈಸೂರು ಭಾಗದಲ್ಲಿ ದಾವಣಗೆರೆ ಜಿಲ್ಲೆಯ ಪತ್ರಿಕೆಗಳ ಕೊಡುಗೆ ಮಹತ್ವದ್ದಾಗಿದೆ. ಇಲ್ಲಿನ ಅನೇಕ ಹಿರಿಯರು ಪತ್ರಿಕೋದ್ಯಮದ ಬೆಳವಣಿಗೆಗೆ ಶ್ರಮಿಸಿದ್ದಾರೆ ಎಂದು ಸ್ಮರಿಸಿದರು.