ಜಿಲ್ಲೆ

ಬಿಜೆಪಿ, ಜೆಡಿಎಸ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ರಮೇಶ ಜಹಗೀರದಾರ್

ದಾವಣಗೆರೆ :  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದವು.  ನಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್, ಜಿಲ್ಲಾ ಶೋಷಿತ ಸಮುದಾಯದ ಒಕ್ಕೂಟದ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.  ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿ, ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡದಿದ್ದರೂ ಅವರ ವಿರುದ್ಧ ಷಡ್ಯಂತ್ರ ರೂಪಿಸಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡಲಾಗಿದೆ. ರಾಜ್ಯದ ಸಿದ್ದರಾಮಯ್ಯ ಅವರಿಗೆ ಅಧಿಕಾರ ನೀಡಿದ್ದು, ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿದರು.  ಸಿದ್ದರಾಮಯ್ಯ ಅವರ ಪರ ಇಡೀ ರಾಜ್ಯದ ಜನರು,  136 ಶಾಸಕರಿದ್ದಾರೆ. ರಾಜ್ಯಪಾಲರು ಕಾಂಗ್ರೆಸ್  ಸರ್ಕಾರಕ್ಕೆ ದಿನಕ್ಕೊಂದು ನೋಟಿಸ್ ನೀಡುತ್ತಿದ್ದು, ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಆಗಿದೆ ಎಂದು ಟೀಕಿಸಿದರು.  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ಮಾತನಾಡಿ, ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ರಾಜ್ಯದ ಜನರು ದಂಗೆ ಏಳುತ್ತಾರೆ. ಪ್ರಧಾನಿ ಮೋದಿ, ಅಮಿತ್ ಶಾ ಷಡ್ಯಂತ್ರ ಮಾಡಿ ರಾಜಭವನ ದುರ್ಬಕಳೆ ಮಾಡಿಕೊಂಡಿದ್ದು, ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಇದು ಖಂಡನೀಯ ಎಂದರು.  ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಮೇಯರ್ ಬಿ.ಎಚ್. ವಿನಾಯಕ ಪೈಲ್ವಾನ್, ಸದಸ್ಯರಾದ ಎ. ನಾಗರಾಜ್, ಎಲ್.ಡಿ. ಗೋಣೆಪ್ಪ, ಸೈಯದ್ ಚಾರ್ಲಿ, ಮುಖಂಡರಾದ ಮುದೇಗೌಡ್ರು ಗಿರೀಶ್, ಕೆ.ಜಿ. ಶಿವಕುಮಾರ್, ಬಿ. ವೀರಣ್ಣ, ಎಸ್. ವೆಂಕಟೇಶ್, ಕವಿತಾ ಚಂದ್ರಶೇಖರ್ ಇತರರು ಪ್ರತಿಭಟನೆಯಲ್ಲಿದ್ದರು.