ದಾವಣಗೆರೆ : ಮಾಸಿಕ ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ, ಸುರಿಯುವ ಮಳೆಯಲ್ಲೂ ಜಯದೇವ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ನಂತರ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದರು. ನಂತರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮನೆಯ ವರೆಗೆ ಮೆರವಣಿಗೆಯಲ್ಲಿ ತೆರಳಿದ ಆಶಾ ಕಾರ್ಯಕರ್ತೆಯರು ಮನವಿ ಸಲ್ಲಿಸಿದರು. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮತ್ತು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರಿಗೂ ಮನವಿ ಸಲ್ಲಿಸಿದರು. ಏ. 1 ರಿಂದ ಅನ್ವಯವಾಗುವಂತೆ ಪ್ರತಿ ತಿಂಗಳು ಎಲ್ಲ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಠ 10 ಸಾವಿರ ರೂ. ಗೌರವಧನ ನೀಡಬೇಕು. ಈ ವರ್ಷದ ಬಜೆಟ್‌ನಲ್ಲಿ ಎಲ್ಲ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೂ 1 ಸಾವಿರ ರೂ. ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು. ಆಶಾ ಕಾರ್ಯಕರ್ತೆಯರ ಮೌಲ್ಯಮಾಪನ ಪದ್ಧತಿಯನ್ನು ಕೈಬಿಡಬೇಕು. ಪ್ರತಿ 1 ಸಾವಿರ ಜನಸಂಖ್ಯೆಗೆ ಒಬ್ಬ ಆಶಾ ಕಾರ್ಯಕರ್ತೆ ಇರಬೇಕು ಎಂಬ ನಿಯಮವನ್ನು ಬದಲಾವಣೆ ಮಾಡಲಾಗುತ್ತಿದೆ. 1999 ಜನಸಂಖ್ಯೆಗೆ ಒಬ್ಬರಂತೆ ಆಶಾ ಕಾರ್ಯಕರ್ತೆಯರು ಇರಬೇಕು ಎಂಬ ನಿಯಮವನ್ನು ಜಾರಿಗೆ ತರಲು ಇಲಾಖೆ ಹಂತದಲ್ಲಿ ಸಿದ್ಧತೆಗಳು ನಡೆದಿವೆ ಇದು ಬೇಡ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮುಖಂಡರಾದ ಮಂಜುನಾಥ್ ಕುಕ್ಕುವಾಡ, ತಿಪ್ಪೇಸ್ವಾಮಿ ಅಣಬೇರು, ಮಧು ತೊಗಲೇರಿ, ಲಲಿತಮ್ಮ ನರಗನಹಳ್ಳಿ, ನಾಗವೇಣಿ ಹಿರೇಮಳಲಿ, ಹಾಲಮ್ಮ, ತಿಪ್ಪಮ್ಮ ನೀರ್ಥಡಿ, ಎಸ್.ಆರ್. ಇಂದಿರಾ, ರೀತಾ, ಹಳದಮ್ಮ, ರೂಪಾ, ಮುಂಜುಳಾ ಕೊಂಡದಹಳ್ಳಿ, ಲಕ್ಷ್ಮೀದೇವಿ, ಮಂಜಮ್ಮ ಚೀಲೂರು, ಲೀಲಾವತಿ, ಪರ್ವೀನ್ ಬಾನು ಪಾಲ್ಗೊಂಡಿದ್ದರು.