ದಾವಣಗೆರೆ : ಭದ್ರಾ ಬಲದಂಡೆ ನಾಲೆಯನ್ನು ಸೀಳಿ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ವಿರೋಧಿಸಿ ಜಿಲ್ಲಾ ರೈತರ ಒಕ್ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಳೂರು ನಿವಾಸಗಳಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಹೋರಾಟ ನಿರಂತರವಾಗಿದೆ. ಮುಂಬರುವ ದಿನಗಳಲ್ಲಿ ಹೋರಾಟವನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು. ನಮ್ಮ ಜಿಲ್ಲೆಯಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶ 65 ಸಾವಿರ ಹೆಕ್ಟೇರ್‌ನಷ್ಟಿದೆ. ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲ. ಇಂಥ ಸಂದರ್ಭದಲ್ಲಿ ನಾಲೆಯನ್ನು ಸೀಳಿದರೆ ಈ ಭಾಗದ ರೈತರಿಗೆ ಅನ್ಯಾಯವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಕುಡಿಯುವ ನೀರು ಪೂರೈಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಅವೈಜ್ಞಾನಿಕ ಕಾಮಗಾರಿ ನಡೆಸಿ ನಾಲೆಯನ್ನು ಸೀಳಿರುವುದಕ್ಕೆ ಆಕ್ಷೇಪವಿದೆ. ಕಾಮಗಾರಿಯನ್ನು ನಿಲ್ಲಿಸಿ ನಾಲೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು. ಈ ವಿಚಾರವಾಗಿ ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವುದಾಗಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದರು. ಕುರ್ಚಿಯ ಕದನದಲ್ಲಿ ನಿರತರಾಗಿರುವ ನಾಯಕರು ರೈತರ ಹಿತ ಮತ್ತು ಅಭಿವೃದ್ಧಿಯನ್ನು ಮರೆತಿದ್ದಾರೆ ಎಂದು ಆರೋಪಿಸಿದರು. ಮಾಜಿ ಶಾಸಕ ಎಂ. ಬಸವರಾಜ ನಾಯ್ಕ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ರಾಜಶೇಖರ್, ಪಕ್ಷದ ಮುಖಂಡರಾದ ಮಾಡಾಳು ಮಲ್ಲಿಕಾರ್ಜುನ, ಬಿ.ಜಿ. ಅಜಯ ಕುಮಾರ್, ಲೋಕಿಕೆರೆ ನಾಗರಾಜ, ಚಂದ್ರಶೇಖರ ಪೂಜಾರ್, ಧನಂಜಯ ಕಡ್ಲೇಬಾಳ್ ಸುದ್ದಿಗೋಷ್ಠಿಯಲ್ಲಿದ್ದರು.