ದಾವಣಗೆರೆ : ಜಿಲ್ಲೆಯಲ್ಲಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದರು. ಕರ್ನಾಟಕ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಹಾನಗರ ಪಾಲಿಕೆ, ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಆಯೋಜಿಸಿದ್ದ, ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಮಾಹಿತಿ ಸಂಗ್ರಹಣೆ ಮತ್ತು ಅರಿವು ಮೂಡಿಸುವ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದರು. ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಸಮಸ್ಯೆ ಪರಿಹರಿಸಲು ಜಿಲ್ಲಾಡಳಿತ ಒಂದು ತಂಡವಾಗಿ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲೆಯ ಜನ ಪ್ರತಿನಿಧಿಗಳು ಕೂಡ ಈ ಸಮಾಜದ ಬಗ್ಗೆ ಅತಿ ಹೆಚ್ಚು ಕಾಳಜಿ ವಹಿಸಿದ್ದಾರೆ ಎಂದು ತಿಳಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಆಯೋಗದ ಮೂಲಕ ನೇರ ಸಾಲ, ಸ್ವಾವಲಂಬಿ ಸಾರಥಿ ಯೋಜನೆ, ಉದ್ಯೋಗ ಸಾಲ ಇನ್ನಿತರ ರೀತಿಯಲ್ಲಿ ಧನ ಸಹಾಯ ನೀಡುತ್ತಿವೆ. ಇವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕು ಎಂದರು. ಜಿ.ಪಂ. ಸಿಇಒ ಸುರೇಶ್ ಬಿ. ಇಟ್ನಾಳ್ ಮಾತನಾಡಿ, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ 14 ಸ್ಕ್ಯಾವೆಂಜರ್‌ಗಳಿದ್ದಾರೆ ಎಂದು ಗುರುತಿಸಲಾಗಿದೆ. ಅದರಲ್ಲಿ 6 ಜನರಿಗೆ ವಸತಿ ಸೌಕರ್ಯ ಒದಗಿಸಲಾಗಿದೆ. ಇನ್ನುಳಿದ ಎಂಟು ಜನರಿಗೆ ಶೀಘ್ರದಲ್ಲೇ ವಸತಿ ಸೌಲಭ್ಯ ಕಲ್ಪಿಸಿಕೊಡಲಾಗುವುದು ಎಂದು ಭರವಸೆ ನೀಡಿದರು. ಕಳೆದ ವರ್ಷ ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ಇತರೆ ವಸತಿ ಶಾಲೆಗಳಲ್ಲಿ 6 ರಿಂದ 9 ಹಾಗೂ ಪಿಯುಸಿಯ 50 ಮಕ್ಕಳಿಗೆ ವಸತಿ ಶಾಲೆಗಳಿಗೆ ನೇರ ಪ್ರವೇಶ ಕಲ್ಪಿಸಿಕೊಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಸಂಸದರ ಮಾರ್ಗದರ್ಶನದಲ್ಲಿ ಸ್ಪರ್ಧಾತ್ಮಕ ತರಬೇತಿ, ಪದವೀಧರರಿಗೆ ಅನುಕೂಲವಾಗುವಂತೆ ವೃತ್ತಿಪರ ಕೌಶಲಾಧಾರಿತ ತರಬೇತಿ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಬೆಂಗಳೂರಿನ ಚಂದ್ರಶೇಖರ್ ಉಪನ್ಯಾಸ ನೀಡಿದರು. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷೆ ಚಂದ್ರಕಲಾ, ವ್ಯವಸ್ಥಾಪಕ ಕುಮಾರ್, ಮೇಲ್ವಿಚಾರಣಾ ಸಮಿತಿಯ ಸದಸ್ಯ ಓಬಳೇಶ್, ನಾಮ ನಿರ್ದೇಶಿತ ಸದಸ್ಯರಾದ ಶಂಕರ್, ಮಂಜುಳಾ, ರಘುಪತಿ, ಜಿ.ಪಂ. ಯೋಜನಾ ನಿರ್ದೇಶಕ ಮಹಾಂತೇಶ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಇದ್ದರು. ... (ಬಾಕ್ಸ್) ಸೌಲಭ್ಯ ವಿತರಣೆ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ನೇರ ಸಾಲ ಯೋಜನೆ, ಉದ್ಯಮಶೀಲತಾ ಯೋಜನೆಯಡಿ ಸಾಲ ಮಂಜೂರಾತಿ ಪತ್ರವನ್ನು ನೀಡಲಾಯಿತು. ಡಿಪ್ಲೊಮಾ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪಾಲಿಕೆ ವತಿಯಿಂದ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು. 366 ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಗುರುತಿನ ಚೀಟಿ ನೀಡಲಾಗಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ 25 ಮಕ್ಕಳಿಗೆ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪ್ರವೇಶಾತಿ ಪತ್ರವನ್ನು ಸ್ಥಳದಲ್ಲಿಯೇ ನೀಡಲಾಯಿತು. ವಸತಿ ನಿರ್ಮಾಣಕ್ಕಾಗಿ ಸಹಾಯಧನ ಮಂಜೂರು ಮಾಡಲಾಯಿತು. ಆರೋಗ್ಯ ಇಲಾಖೆಯಿಂದ ಆಯುಷ್ಮಾನ್ ಕಾರ್ಡ್ ನೀಡಲಾಯಿತು.