ಜಿಲ್ಲೆ

ಚಿತ್ರದುರ್ಗದಲ್ಲಿ ಪ್ರತಿಭಾ ಪುರಸ್ಕಾರ 20ಕ್ಕೆ

ರಮೇಶ ಜಹಗೀರದಾರ್

ದಾವಣಗೆರೆ: ಎಚ್. ಆಂಜನೇಯ ಚಾರಿಟಬಲ್ ಟ್ರಸ್ಟ್‌ನಿಂದ ಚಿತ್ರದುರ್ಗದ ಚಳ್ಳಕೆರೆ ರಸ್ತೆಯ ಎಸ್.ಜಿ. ಕಲ್ಯಾಣ ಮಂಟಪದಲ್ಲಿ ಜು.20 ರಂದು ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ, ಟ್ರಸ್ಟಿ ಕೆ.ಎಸ್. ಬಸವಂತಪ್ಪ ಹೇಳಿದರು.  ಶನಿವಾರ ಸಂಜೆ 4.30ಕ್ಕೆ ಟ್ರಸ್ಟ್ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್, ಶಾಸಕರಾದ ವೀರೇಂದ್ರ ಪಪ್ಪಿ, ಎನ್.ವೈ. ಗೋಪಾಲಕೃಷ್ಣ, ಬಿ.ಜಿ. ಗೋವಿಂದಪ್ಪ, ಟಿ. ರಘುಮೂರ್ತಿ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್ ಭಾಗವಹಿಸಲಿದ್ದಾರೆ ಎಂದರು.  ಶೈಕ್ಷಣಿಕ ಪ್ರಗತಿಗೆ ಶ್ರಮಿಸುವ ಆಶಯ ಹೊಂದಿರುವ ಎಚ್. ಆಂಜನೇಯ ಹೆಸರಿನಲ್ಲಿ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಲಾಗಿದ್ದು, ಮೊದಲ ಹಂತದಲ್ಲಿ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಗಳಿಸಿದ ಸಮುದಾಯದ 68 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳೊಂದಿಗೆ ಪ್ರತಿಭಾ ಪುರಸ್ಕಾರ ಹಾಗೂ ಕಡುಬಡತನದ 6 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲಾಗುವುದು ಎಂದು ತಿಳಿಸಿದರು.  ಮಧ್ಯಾಹ್ನ 1.30ರಿಂದ ಕಾರ್ಯಕ್ರಮ ಆರಂಭವಾಗಲಿದ್ದು, ಭೂಮಿತಾಯಿ ಬಳಗದಿಂದ ವಾದ್ಯಗೋಷ್ಠಿ, ಮೈಸೂರು ನಗಾರಿ ಮಂಜು ನೇತೃತ್ವದ ತಂಡದಿಂದ ನಗಾರಿ ಕುಣಿತ ನಡೆಯಲಿವೆ ಎಂದರು.  ರಾಜ್ಯದಲ್ಲಿ ಪ. ಜಾತಿ ಹಾಗೂ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟ ಎಸ್‌ಸಿಪಿ-ಟಿಎಸ್‌ಪಿ ಹಣ ಬೇರೆ ಯೋಜನೆಗೆ ಬಳಸದಂತೆ ಸಮಾಜ ಕಲ್ಯಾಣ ಸಚಿವರು ಹಾಗೂ ಮುಖ್ಯಮಂತ್ರಿಗೆ ಒತ್ತಡ ಹಾಕಲಾಗುವುದು. ಸಮುದಾಯದ ಹಿತ ಕಾಪಾಡಲು ಈ ಬಗ್ಗೆ ಧ್ವನಿ ಎತ್ತಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.  ಬೆಳಲಗೆರೆ ಶಿವಣ್ಣ, ವಕೀಲ ದುರ್ಗೇಶ್ ಗುಡಿಗೇರಿ, ಶೇಖರಪ್ಪ, ಶಿವಕುಮಾರ್ ಮೂಡೇನಹಳ್ಳಿ ಇದ್ದರು.