ದಾವಣಗೆರೆ : ಯುವಜನರು ಇತ್ತೀಚಿನ ದಿನಗಳಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಕುಂದು ಉಂಟಾಗುತ್ತಿದೆ. ಆದ್ದರಿಂದ ಅಂಥ ವ್ಯಸನದಿಂದ ದೂರವಿರಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಹೇಳಿದರು. ಜಿ.ಪಂ. ಸಭಾಂಗಣದಲ್ಲಿ ಸೋಮವಾರ ಕೌಶಲಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಹಾಗೂ ರಾಷ್ಟ್ರೀಯ ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವ್ಯಸನ ಮುಕ್ತ ಕರ್ನಾಟಕ ಕಾರ್ಯಗಾರದಲ್ಲಿ ಮಾತನಾಡಿದರು. ಪ್ರಾರಂಭದಲ್ಲಿ ಕುತೂಹಲಕ್ಕಾಗಿ ಸೇವಿಸುವ ಮದ್ಯ ಮತ್ತು ಮಾದಕ ವಸ್ತುಗಳು, ತಂಬಾಕು ಮುಂತಾದವುಗಳಿಗೆ ಬಲಿಯಾಗಿ ಕ್ರಮೇಣ ಅವುಗಳಿಗೆ ದಾಸರಾಗಿ ಭವಿಷ್ಯದ ಜೀವನವನ್ನೇ ನಾಶಪಡಿಸಿಕೊಳ್ಳುತ್ತಾರೆ. ಅಷ್ಟೇ ಅಲ್ಲದೇ ಇದರಿಂದ ದೈಹಿಕ ಮತ್ತು ಮಾನಸಿಕವಾಗಿ ದುಷ್ಪರಿಣಾಮ ಬೀರುವುದರ ಜತೆಗೆ ಮಾರಣಾಂತಿಕ ಕಾಯಿಲೆಗೆ ತುತ್ತಾಗುವ ಸಂಭವ ಹೆಚ್ಚಾಗಿದೆ. ಕುಟುಂಬಗಳು ಆರ್ಥಿಕವಾಗಿ ಸಂಕಷ್ಟ ಎದುರಿಸಿ ಬೀದಿಗೆ ಬರುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು. ಸರ್ಕಾರ ಮಾದಕ ವಸ್ತುಗಳ ಮಾರಾಟ, ಸಾಗಣೆ ನಿಯಂತ್ರಿಸಲು ನಾರ್ಕೊ, ಕೋಟ್ಪಾ, ಎನ್‌ಡಿಪಿಎಸ್ ಮುಂತಾದ ಕಾಯ್ದೆಗಳನ್ನು ರೂಪಿಸಿದೆ. ಜವಾಬ್ದಾರಿಯುತ ನಾಗರಿಕರಾಗಿ ನಾವೆಲ್ಲರೂ ನೆರೆ ಹೊರೆಯವರಿಗೆ, ಮಕ್ಕಳಿಗೆ ಈ ಬಗ್ಗೆ ಅರಿವು ಮೂಡಿಸಬೇಕಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ, ಮಾದಕ ವಸ್ತುಗಳ ಬಳಕೆ, ಮಾರಾಟ ಮಾಡುವುದು ಕಂಡುಬಂದಲ್ಲಿ ಸಂಬಂಧಿಸಿದ ಇಲಾಖೆ ಅಥವಾ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಇದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಶಾಲಾ ಕಾಲೇಜು, ವಿದ್ಯಾರ್ಥಿನಿಲಯ, ವೈದ್ಯಕೀಯ ಕಾಲೇಜುಗಳಲ್ಲಿ ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ ಮಾದಕ ವ್ಯಸನಮುಕ್ತ ಜಿಲ್ಲೆಯಾಗಿಸಲು ಶ್ರಮಿಸಬೇಕು ಎಂದರು.