ದಾವಣಗೆರೆ : ಸಾವಿರ ಕೋಟಿ ರೂ. ಅಕ್ರಮ ಹಣದಿಂದ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಸಂಚು ರೂಪಿಸಲಾಗಿದೆ ಎಂದು ದಾವಣಗೆರೆಯಲ್ಲಿ ಇತ್ತೀಚೆಗೆ ಹೇಳಿಕೆ ನೀಡಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಇಲ್ಲಿನ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಈ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ಜಾರಿಯಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ನೀಡಿದ್ದ ದೂರಿನ ಕಡತವು ಈಗ ದಾವಣಗೆರೆಯ ಆಜಾದ್ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದೆ. ಬಸನಗೌಡ ಪಾಟೀಲ ಯತ್ನಾಳ್, ಮಾಜಿ ಸಂಸದರಾದ ಜಿ.ಎಂ. ಸಿದ್ದೇಶ್ವರ, ಸಿ.ಕೆ. ಪ್ರತಾಪ್ ಸಿಂಹ, ಹರಿಹರ ಶಾಸಕ ಬಿ.ಪಿ. ಹರೀಶ್ ಇನ್ನಿತರ ಹಿರಿಯ ಮುಖಂಡರು ಸೆ. 29 ರಂದು ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ಸಭೆ ಸೇರಿ ರಾಜ್ಯದ ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದರು. ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಸಭೆಯ ವಿವರಗಳನ್ನು ಮಾಧ್ಯಮದವರಿಗೆ ನೀಡಲಾಯಿತು. ಆ ಸಂದರ್ಭದಲ್ಲಿ ಬಸನಗೌಡ ಪಾಟೀಲ ಯತ್ನಾಳ್ ಮಾತನಾಡಿ, ಕೆಲವು ನಾಯಕರು 1 ಸಾವಿರ ಕೋಟಿ ರೂ. ಸಂಗ್ರಹಿಸಿ ಇಟ್ಟುಕೊಂಡಿದ್ದು ಆ ಹಣವನ್ನು ಬಳಸಿ ಕಾಂಗ್ರೆಸ್‌ನ ಶಾಸಕರನ್ನು ಖರೀದಿಸಿ ರಾಜ್ಯ ಸರ್ಕಾರವನ್ನು ಪತನಗೊಳಿಸಿ ತಾವು ಮುಖ್ಯಮಂತ್ರಿಯಾಗಲು ಸಂಚು ರೂಪಿಸಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬರುವ ಡಿಸೆಂಬರ್ ತಿಂಗಳಲ್ಲಿ ರಾಜಕೀಯ ಕ್ರಾಂತಿಯಾಗಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ತಿಳಿಸಿದ್ದರು. ಅಲ್ಲದೇ ಸಾವಿರ ಕೋಟಿ ರೂ. ಸಂಗ್ರಹಿಸಿ ಇಟ್ಟುಕೊಂಡವರು ಯಾರೆಂದು ನೀವೇ ಊಹಿಸಿ. ಆ ನಾಯಕರ ಮನೆಯಲ್ಲಿ ನೋಟು ಎಣಿಸುವ ಯಂತ್ರ ಪತ್ತೆಯಾಗಿತ್ತು ಎಂದೂ ಹೇಳಿದ್ದರು. ಈ ಹೇಳಿಕೆಯನ್ನು ಗಮನಿಸಿದರೆ ಅಂದಿನ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ನಾಯಕರಿಗೂ ಈ ವಿಷಯ ಗೊತ್ತಿದ್ದು, ಮಾಧ್ಯಮಗಳಿಗೆ ತಿಳಿಸಲು ಸಹಮತ ವ್ಯಕ್ತಪಡಿಸಿರುವುದು ಕಾಣುತ್ತದೆ ಎಂದು ದೂರಿನಲ್ಲಿ ಹೇಳಲಾಗಿದೆ. ಕಾಂಗ್ರೆಸ್ ಪಕ್ಷವು ಜನಪರ ಸರ್ಕಾರವನ್ನು ನಡೆಸುತ್ತಿದ್ದರೂ, ಅಧಿಕಾರವಿಲ್ಲದೇ ಹತಾಶರಾಗಿರುವ ಕೆಲವು ಬಿಜೆಪಿ ನಾಯಕರು ಭ್ರಷ್ಟ ಹಣವನ್ನು ಅಕ್ರಮವಾಗಿ ಸಂಗ್ರಹಿಸಿ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಸಂಚು ರೂಪಿಸಿರುವುದು ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಯಿಂದ ಸ್ಪಷ್ಟವಾಗಿದೆ. ಸಮಾಜದಲ್ಲಿ ಗಲಭೆ ಉಂಟಾಗುವಂತೆ ಮಾಡುವ ಇಂಥ ಹೇಳಿಕೆ ನೀಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.