ದಲಿತ ಯುವಕರು ದೇವಸ್ಥಾನ ಪ್ರವೇಶಿಸಿದ್ದರಿಂದ ಉದ್ವಿಗ್ನಗೊಂಡಿದ್ದ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಸಮೀಪದ ಬೆಳಲಗೆರೆ ಗ್ರಾಮದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಶಾಂತಿಸಭೆ ನಡೆಸಲಾಯಿತು. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಎಸ್ಪಿ ಶೇಖರ್ ಎಚ್.ಟಿ, ಡಿವೈಎಸ್ಪಿ ರುದ್ರಪ್ಪ ಉಜ್ಜಿನಕೊಪ್ಪ ಸೇರಿ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. 
ದಾವಣಗೆರೆ

ದಲಿತ ಯುವಕರ ಮೇಲೆ ಹಲ್ಲೆ

ರಮೇಶ ಜಹಗೀರದಾರ್

ಪ್ರಮುಖ ಮುಖ್ಯಾಂಶಗಳು

  • ಬೆಳಲಗೆರೆ ಗ್ರಾಮ ಉದ್ವಿಗ್ನ
  • ದೇವಸ್ಥಾನ ಪ್ರವೇಶ ವಿವಾದ

ಬಸವಾಪಟ್ಟಣ : ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಸಮೀಪದ ಬೆಳಲಗೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಅಜ್ಜಿ ಹಬ್ಬದ ಆಚರಣೆ ಸಂದರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಯುವಕರ ಮೇಲೆ ಇನ್ನೊಂದು ಸಮುದಾಯದವರು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ದಲಿತ ಸಮುದಾಯದ ಇಬ್ಬರು ಯುವಕರು ಗ್ರಾಮದ ಶೀ ಬೀರಲಿಂಗೇಶ್ವರ ದೇವಸ್ಥಾನವನ್ನು ಪ್ರವೇಶಿಸಿ ಗಂಟೆ ಬಾರಿಸಿದ್ದಾರೆ ಎನ್ನಲಾಗಿದ್ದು, ಇದನ್ನು ಮತ್ತೊಂದು ಸಮುದಾಯದ ಕೆಲವರು ವಿರೋಧಿಸಿದ್ದಾರೆ.
ಈ ವೇಳೆ ಮಾತಿನ ಚಕಮಕಿ ನಡೆದು, ಶರತ್ ಎಂಬ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಕೈ ಕಾಲುಗಳಿಂದ ಹಲ್ಲೆ ನಡೆಸಲಾಗಿದೆ. ಬಿಡಿಸಲು ಬಂದ ಆತನ ಸ್ನೇಹಿತರಾದ ಮಹಾಂತೇಶ, ದರ್ಶನ, ಅರುಣ, ನಾಗರಾಜ, ಮಂಜುನಾಥ ಅವರ ಮೇಲೂ ಹಲ್ಲೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗಾಯಾಳು ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಈ ಕುರಿತು ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ 41 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಗ್ರಾಮಕ್ಕೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಎಸ್ಪಿ ಶೇಖರ್ ಎಚ್.ಟಿ, ಹೆಚ್ಚುವರಿ ಎಸ್ಪಿ ಪರಮೇಶ್ವರ ಹೆಗಡೆ, ಡಿವೈಎಸ್ಪಿ ರುದ್ರಪ್ಪ ಉಜ್ಜಿನಕೊಪ್ಪ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಶಾಂತಿ ಸಭೆ ನಡೆಸಿದರು.