ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲೂಕು ಬಿಜೆಪಿ ನೇತೃತ್ವದಲ್ಲಿ ಕಾರ್ಯಕರ್ತರು ರಸ್ತೆ ತಡೆ ಚಳವಳಿ ಮಾಡಿದರು. protest
ದಾವಣಗೆರೆ

ಚನ್ನಗಿರಿ ಪುರಸಭೆ ಕಚೇರಿಗೆ ಬಿಜೆಪಿ ಮುತ್ತಿಗೆ

ಗಾಂಧಿ ವೃತ್ತದಲ್ಲಿ ಮಾನವ ಸರಪಳಿ, 2 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ

ಚನ್ನಗಿರಿ: ಕುಡಿಯುವ ನೀರು ಪೂರೈಕೆ ಯೋಜನೆಗಳ ನಿರ್ವಹಣೆ ವೈಫಲ್ಯ, ಕಾನೂನು ಸುವ್ಯವಸ್ಥೆ ಭಂಗ, ಹಳಿ ತಪ್ಪಿದ ಆಡಳಿತ ವ್ಯವಸ್ಥೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಿ ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿದರು. ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.

ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ್ದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳಕ್ಕೆ ಅಧಿಕಾರಿಗಳು ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಹೊನ್ನಾಳಿ ಉಪವಿಭಾಗಾಧಿಕಾರಿ ಚನ್ನಪ್ಪ ಅವರು ತಾಲೂಕು ಅಧಿಕಾರಿಗಳ ತಂಡದೊಂದಿಗೆ ಆಗಮಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಅಂತ್ಯಗೊಳಿಸಲಾಯಿತು. ಚನ್ನಗಿರಿ ಪಟ್ಟಣ ಸೇರಿದಂತೆ ತಾಲೂಕಿನ ಹಲವು ಹಳ್ಳಿಗಳಿಗೆ ತಕ್ಷಣ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು, ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ಅಧಿಕಾರಿಗಳ ನಿರ್ಲಕ್ಷೃ ಹಾಗೂ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಸರಿಪಡಿಸ ಬೇಕು ಎಂದು ಪ್ರತಿಭಟನಾಕಾರರು ಆಗ್ರಹಪಡಿಸಿದರು.

ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು, ಶಾಸಕ ಬಸವರಾಜ ಶಿವಗಂಗಾ ಹಾಗೂ ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿದರು. ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ನಂತರ ಪುರಸಭೆಗೆ ಮುತ್ತಿಗೆ ಹಾಕಿ, ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು.

ಪ್ರತಿಭಟನಾನಿರತರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ, ಚನ್ನಗಿರಿ ಪಟ್ಟಣ ಸೇರಿ 82 ಗ್ರಾಮಗಳಿಗೆ ಸೂಳೆಕೆರೆಯಿಂದ ಕುಡಿಯುವ ನೀರು ಪೂರೈಸಲು ಮಾಡಾಳು ವಿರೂಪಾಕ್ಷಪ್ಪ ಶಾಸಕರಾಗಿದ್ದಾಗ 80 ಕೋಟಿ ರೂ. ಅನುದಾನ ಮಂಜೂರು ಮಾಡಿಸಿ ಯೋಜನೆಯನ್ನು ಜಾರಿಗೆ ತಂದಿದ್ದರು. 120 ಎಚ್‌ಪಿ ಸಾಮರ್ಥ್ಯದ 5 ಮೋಟಾರ್‌ಗಳನ್ನು ಅಳವಡಿಸಿ, ನಿರ್ವಹಣೆಯನ್ನು ಪುರಸಭೆ ಹಾಗೂ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಗೆ ವಹಿಸಲಾಗಿತ್ತು. ಆದರೆ, ಸಮರ್ಪಕ ನಿರ್ವಹಣೆ ಇಲ್ಲದೆ ಮೋಟಾರ್‌ಗಳು ಕೆಟ್ಟುಹೋಗಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರಾದವರು ಜವಾಬ್ದಾರಿಯಿಂದ ಕೆಲಸಗಳನ್ನು ನಿರ್ವಹಣೆ ಮಾಡಬೇಕು. ಮತದಾರರ ಋಣ ತೀರಿಸಲಾದರೂ ಕೆಲಸ ಮಾಡಬೇಕು. ಕ್ಷೇತ್ರದ ಶಾಸಕರು ಮುಖ್ಯಮಂತ್ರಿಗಳು ಆಪ್ತರು ಎಂದು ಹೇಳಲಾಗುತ್ತಿದೆ. ಹೀಗಾಗಿ ಶಾಸಕರು ತಮ್ಮ ಪ್ರಭಾವ ಬಳಸಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸಬೇಕು ಎಂದು ವ್ಯಂಗ್ಯವಾಡಿದರು.

ಚುನಾವಣೆ ಸಮಯದಲ್ಲಿ ನಮ್ಮ ಮೇಲೆ ಸಲ್ಲದ ಆರೋಪಗಳನ್ನು ಮಾಡಲಾಗುತ್ತದೆ. ನಮ್ಮ ತಂದೆ ಅಧಿಕಾರದಲ್ಲಿದ್ದ ಸಮಯದಲ್ಲಿ ಯಾವ ಗ್ರಾಮಕ್ಕೂ ಅನ್ಯಾಯ ಮಾಡಿಲ್ಲ. ಸಾರ್ವಜನಿಕ ಕ್ಷೇತ್ರದಲ್ಲಿ ಎಲ್ಲರನ್ನೂ ಸಮನಾಗಿ ಕಂಡಿದ್ದೇವೆ. ನಮ್ಮ ಬಗ್ಗೆ ಅಪಪ್ರಚಾರ ಮಾಡಿ ಎರಡು ಬಾರಿ ಚುನಾವಣೆಯಲ್ಲಿ ಸೋಲು ಕಾಣುವಂತೆ ಮಾಡಲಾಗಿದೆ ಎಂದು ದೂರಿದರು.

ಬಿಜೆಪಿ ತಾಲೂಕ ಅಧ್ಯಕ್ಷ ಡಿ.ಸಿ. ಕುಮಾರಸ್ವಾಮಿ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಜಗದೀಶ್, ಪುರಸಭೆ ಮಾಜಿ ಸದಸ್ಯೆ ಕಮಲಾ ಹರೀಶ್, ಕೆಪಿಎಂ ಲತಾ. ನಿರ್ಮಲಬಾಯಿ, ಮಂಜುನಾಥ್ ಜಾಧವ್, ಪಾರಿ ಪರಮೇಶ್, ಮಲ್ಲಿಕಾರ್ಜುನ ತಿಪ್ಪಗೊಂಡನಹಳ್ಳಿ, ಗೌ.ಹಾಲೇಶ್, ಬುಳ್ಳಿ ನಾಗರಾಜ್, ಶಿವಣ್ಣ ನಲ್ಲೂರು ಮತ್ತಿರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಪುರಸಭೆ ವಿಫಲ

ಜನಸಾಮಾನ್ಯರಿಗೆ ನೀರು ಪೂರೈಸುವಲ್ಲಿ ಪುರಸಭೆ ವಿಫಲವಾಗಿದೆ. ನೀರು ಕೇಳಿದರೆ ಇಲ್ಲ ಎನ್ನುವ ಉತ್ತರ ನೀಡುತ್ತಿದ್ದಾರೆ. ಸರ್ಕಾರದಿಂದ ಸಾಕಷ್ಟು ಹಣ ಬರುತ್ತಿದ್ದರೂ ಸಮರ್ಪಕ ಬಳಕೆ ಪುರಸಭೆಯಿಂದಾಗುತ್ತಿಲ್ಲ ಎಂದು ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಕಮಲಾ ಹರೀಶ್ ಹೇಳಿದರು. ನಗರ ಘಟಕದ ಅಧ್ಯಕ್ಷ ಕುಬೇಂದ್ರೋಜಿರಾವ್ ಮಾತನಾಡಿ, ಶಾಸಕರು ಕ್ಷೇತ್ರದಲ್ಲಿದ್ದು ಅಧಿಕಾರಿಗಳ ಸಭೆ ಕರೆದು ಸಮಸ್ಯೆಗಳನ್ನು ಅಲಿಸಬೇಕು. ಕಚೇರಿಗೆ ಸಾರ್ವಜನಿಕರು ಹೋದರೂ ಕೆಲಸ ಆಗುತ್ತಿಲ್ಲ. ಜನರ ಸಮಸ್ಯೆ ಕೇಳುವವರು ಯಾರು ಎಂದು ಪ್ರಶ್ನಿಸಿದರು.

ಕಾನೂನು ಸುವ್ಯವಸ್ಥೆ ಸರಿಪಡಿಸಲು ಒತ್ತಾಯ

ತಾಲೂಕಿನ 30ಕ್ಕೂ ಹೆಚ್ಚು ಕಡೆ ಇಸ್ಪೀಟ್ ಅಡ್ಡೆಗಳನ್ನು ನಡೆಸಲಾಗುತ್ತಿದೆ. ಈ ಮಾಹಿತಿ ಇದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇಸ್ಪೀಟ್ ಪರಿಣಾಮ ಇದರಿಂದಾಗಿ ನೂರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಪಟ್ಟಣದ ಕಸವನ್ನು ಕೆರೆ ಮತ್ತು ರಸ್ತೆ ಬದಿಗಳಲ್ಲಿ ಸುರಿಯುತ್ತಿರುವುದರಿಂದ ದುರ್ನಾತ ಬೀರುತ್ತಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಮಾಡಾಳು ಮಲ್ಲಿಕಾರ್ಜುನ ಹೇಳಿದರು.

ಡಿಸಿ ಜತೆ ಚರ್ಚೆ ಭರವಸೆ

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ 1.50 ಕೋಟಿ ರೂ. ಅನುದಾನದ ಅಗತ್ಯವಿದ್ದು, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಹೊನ್ನಾಳಿ ಉಪವಿಭಾಗಾಧಿಕಾರಿ ಚನ್ನಪ್ಪ ಭರವಸೆ ನೀಡಿದರು. ತಾಲೂಕಿನ ಅಧಿಕಾರಿಗಳ ತಂಡದೊಂದಿಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಅವರು, ಬೇಡಿಕೆಗಳಿಗೆ ಸ್ಪಂದಿಸಿ ಕ್ರಮಕೈಗೊಳ್ಳುವ ಭರವಸೆ ನೀಡಿದರು. ರಸ್ತೆ ಬದಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಾಗೂ ಅಕ್ರಮ ಇಸ್ಪೀಟ್ ಆಟ ತಡೆಯಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಬೇಡಿಕೆಗಳು
  • ಚನ್ನಗಿರಿ ಪಟ್ಟಣ ಸೇರಿದಂತೆ ತಾಲೂಕಿನ ಹಲವು ಹಳ್ಳಿಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ

  • ಮಟ್ಕಾ ಜೂಜಾಟ ಅಡ್ಡೆಗಳ ಮೇಲೆ ಕ್ರಮ

  • ಕಾನೂನು ಸುವ್ಯವಸ್ಥೆ ಪಾಲನೆ

  • ಹಳಿ ತಪ್ಪಿದ ತಾಲೂಕು ಆಡಳಿತ ಸರಿ ದಾರಿಗೆ ತನ್ನಿ