- ಡಿ. ಬಸವರಾಜ, ಚಮನ್‌ಸಾಬ್ ಮನವಿ
- ಪಕ್ಷದ ವರಿಷ್ಠ ನಾಯಕರಿಗೆ ಪತ್ರ
ದಾವಣಗೆರೆ: ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮತ್ತು ಆಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ ಮತ್ತು ಮಾಜಿ ಮೇಯರ್ ಕೆ. ಚಮನ್ ಸಾಬ್ ಪಕ್ಷದ ವರಿಷ್ಠರನ್ನು ಆಗ್ರಹಿಸಿದ್ದಾರೆ.
ಈ ಕುರಿತು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ನಿರ್ಗಮಿತ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋ ಕ್ಲಿಪ್‌ನಲ್ಲಿ, ಜಮೀರ್ ಅಹಮದ್ ಖಾನ್ ಅವರು ತಮ್ಮ ಬೆಂಬಲಿಗರೊಂದಿಗೆ ಮಾತನಾಡುತ್ತ, ಕಾಂಗ್ರೆಸ್ ಅಭ್ಯರ್ಥಿಗೆ ಮುಸ್ಲಿಂ ಮತಗಳು ಬೀಳಬಾರದು ಎಂದು ನೇರವಾಗಿ ಸೂಚನೆ ನೀಡಿರುವುದು ಕೇಳಿಬಂದಿದೆ. ಕಾಂಗ್ರೆಸ್ ಬದಲಿಗೆ ಪಕ್ಷೇತರ ಅಥವಾ ಕುಕ್ಕರ್ ಗುರುತಿನ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಅಲ್ಪಸಂಖ್ಯಾತ ಸಮುದಾಯವನ್ನು ಪ್ರಚೋದಿಸಿದ್ದಾರೆ ಎಂದು ಪತ್ರದಲ್ಲಿ ದೂರಿದ್ದಾರೆ.
ಪಕ್ಷದ ಹಿರಿಯ ನಾಯಕರಾಗಿ ಮತ್ತು ಜವಾಬ್ದಾರಿಯುತ ಸಚಿವರಾಗಿ ಉಪ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ಸೋಲಿಗೆ ಸಂಚು ರೂಪಿಸಿರುವುದು ತಳಮಟ್ಟದ ಕಾರ್ಯಕರ್ತರಲ್ಲಿ ತೀವ್ರ ನಿರಾಶೆ ಮತ್ತು ಆಕ್ರೋಶವನ್ನು ಉಂಟುಮಾಡಿದೆ. ಇದು ಪಕ್ಷದ ಶಿಸ್ತು ಮತ್ತು ಸಿದ್ಧಾಂತಕ್ಕೆ ಬಗೆದ ದ್ರೋಹವಾಗಿದೆ ಎಂದು ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ವೈರಲ್ ಆಗಿರುವ ಆಡಿಯೋ ಸಂಭಾಷಣೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ, ಪಕ್ಷದ ಘನತೆಗೆ ಧಕ್ಕೆ ತಂದಿರುವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಶಿಸ್ತು ಸಮಿತಿಯ ಮೂಲಕ ಸೂಕ್ತ ಕಾನೂನು ಮತ್ತು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ದೂರು ಸಲ್ಲಿಸಿದ ಸಿರಾಜ್
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಂಬಂಧ ವೈರಲ್ ಆಗಿರುವ ಆಡಿಯೋ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಸಿರಾಜ್ ಅಹಮದ್ ಇಲ್ಲಿನ ಸಿಇಎನ್ ಪೊಲೀಸ್ ಠಾಣೆಗೆ ಸೋಮವಾರ ದೂರು ಸಲ್ಲಿಸಿದ್ದಾರೆ.
ಆಡಿಯೋದಲ್ಲಿ ಸತ್ಯಾಂಶವಿಲ್ಲ, ಉದ್ದೇಶಪೂರ್ವಕವಾಗಿ ಸೃಷ್ಟಿ ಮಾಡಲಾಗಿದೆ. ಇದರ ಹಿಂದೆ ಷಡ್ಯಂತ್ರ ನಡೆದಿದ್ದು ತನಿಖೆ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ಪ್ರಾಥಮಿಕ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ. ಈ ಸಂಬಂಧ ಎಫ್‌ಐಆರ್ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.