ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನೆಲ-ಜಲ, ಪರಿಸರ ಕುರಿತ ಸಭೆಯಲ್ಲಿ ಜಿ.ಎಂ. ಗಂಗಾಧರ ಸ್ವಾಮಿ, ಗಿತ್ತೆ ಮಾಧವ ವಿಠ್ಠಲ ರಾವ್, ಎಚ್.ಟಿ. ಶೇಖರ್, ಬಲ್ಲೂರು ರವಿಕುಮಾರ್, ರೇಣುಕಾ, ಉದಯ್ ಇದ್ದರು.
- ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಆತಂಕ
- ನೆಲ-ಜಲ, ಪರಿಸರ ಕುರಿತ ಸಭೆ
ದಾವಣಗೆರೆ : ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ 11.89 ಮೀಟರ್ ಇದ್ದ ಅಂತರ್ಜಲ ಮಟ್ಟವು ಈಗ 2.29 ಮೀಟರ್‌ಗಳಷ್ಟು ಕುಸಿದಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಆತಂಕ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ, ನೆಲ-ಜಲ, ಪರಿಸರ ವೃದ್ಧಿಸಲು, ಮಳೆ ನೀರು ಕೊಯ್ಲು, ಸಸಿ ನೆಡುವುದು ಮತ್ತು ಜಿಲ್ಲಾ ಕೆರೆಗಳ ನಿರ್ವಹಣೆ ಕುರಿತ ಸಭೆಯಲ್ಲಿ ಮಾತನಾಡಿದರು.
ಜಗಳೂರು ತಾಲೂಕಿನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು 4.89 ಮೀಟರ್‌ಗಳಷ್ಟು ಅಂತರ್ಜಲ ಮಟ್ಟ ಕುಸಿದಿರುವುದು ಕಳವಳಕಾರಿಯಾಗಿದೆ. ಕುಂದುವಾಡ ಕೆರೆಗೆ ಮುಂದಿನ 2-3 ತಿಂಗಳು ನೀರು ಬರುವ ಸಾಧ್ಯತೆ ಇಲ್ಲದಿರುವುದರಿಂದ ಲಭ್ಯವಿರುವ ನೀರನ್ನೇ ಅತ್ಯಂತ ಜಾಗರೂಕತೆಯಿಂದ ನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೆರೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಸುಮಾರು 36 ಕೆರೆ-ಕುಂಟೆಗಳ ನಿರ್ಮಾಣ ಹಾಗೂ ಪುನಶ್ಚೇತನ ಕಾರ್ಯವನ್ನು ಕೈಗೊಳ್ಳಲಾಗಿದೆ. ಈ ವರ್ಷವೂ ಹತ್ತು ಕೋಟಿ ರೂ. ವೆಚ್ಚದಲ್ಲಿ ಮತ್ತಷ್ಟು ಕೆರೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದರು.
ಮುದ್ದಪ್ಪನ ಕೆರೆ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುತ್ತದೆ, ಈ ಕೆರೆಯನ್ನು ಅಭಿವೃದ್ಧಿಪಡಿಸುವಲ್ಲಿ ಯಾವುದೇ ಕ್ರಮ ವಹಿಸಿಲ್ಲ ಎಂದು ಪರಿಸರವಾದಿ ಬಲ್ಲೂರು ರವಿಕುಮಾರ್ ಸಭೆಯ ಗಮನಕ್ಕೆ ತಂದರು.
ಮುದ್ದಪ್ಪನ ಕೆರೆಯ ಅಭಿವೃದ್ಧಿಗೆ ಜಿಲ್ಲಾಡಳಿತ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಅರಣ್ಯ ಇಲಾಖೆಯ ಉಸ್ತುವಾರಿಯಲ್ಲಿ ಕಾಮಗಾರಿ ನಡೆಯಲಿದೆ. ಇದರಿಂದ ಪ್ರಾಣಿ, ಪಕ್ಷಿಗಳಿಗೆ ನೀರು, ಆಹಾರ ಸಿಗಲಿದೆ ಎಂದು ತಿಳಿಸಿದರು.
ಪರಿಸರವಾದಿ ಈಶ್ವರಯ್ಯ ಮಾತನಾಡಿದರು. ಎಸ್ಪಿ ಎಚ್.ಟಿ. ಶೇಖರ್, ದೂಡಾ ಆಯುಕ್ತೆ ರೇಣುಕ, ಮಹಾನಗರ ಪಾಲಿಕೆ ಕಂದಾಯ ಆಯುಕ್ತ ಉದಯ್, ಡಿಡಿಪಿಯು ಪಳಿನಿವೇಲು ಇದ್ದರು.
ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳಿ
ನಗರದ ಮೇಲಿನ ನೀರಿನ ಒತ್ತಡವನ್ನು ಕಡಿಮೆ ಮಾಡಲು ಮತ್ತು ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಪ್ರತಿಯೊಬ್ಬರೂ ಕಚೇರಿ ಹಾಗೂ ಮನೆಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಆಳವಡಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲೆಯಾದ್ಯಂತ ಪರಿಸರ ಸಂರಕ್ಷಣೆ ಹಾಗೂ ಹಸಿರೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿ ವಿವಿಧ ಪ್ರಮುಖ ಇಲಾಖೆಗಳ ಸಹಯೋಗದೊಂದಿಗೆ ಸಸಿ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜೂ. 6ರಂದು ಕುಂದುವಾಡ ಕೆರೆ ಆವರಣದಲ್ಲಿ ವಾಕರ್ಸ್ ಅಸೋಸಿಯೇಷನ್ ವತಿಯಿಂದ ಸುಮಾರು 250 ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನೆಟ್ಟ ಸಸಿಗಳ ರಕ್ಷಣೆಯ ಜವಾಬ್ದಾರಿಯನ್ನು ಅವರೇ ವಹಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಮಾದರಿ ವಾರ್ಡ್ ಯೋಜನೆ
ನಗರದಲ್ಲಿ ಕನಿಷ್ಠ ಒಂದು ವಾರ್ಡ್‌ನ್ನು ಸರ್ವತೋಮುಖವಾಗಿ ಮಾದರಿ ವಾರ್ಡ್ ಆಗಿ ಅಭಿವೃದ್ಧಿಪಡಿಸುವ ಉದ್ದೇಶವಿದೆ ಎಂದು ಡಿಸಿ ತಿಳಿಸಿದರು.
ಮಾದರಿ ವಾರ್ಡ್‌ನ ಕಲ್ಪನೆ, ಸ್ವಚ್ಛ ಗ್ರಾಮ, ಸ್ವಚ್ಛ ವಾರ್ಡ್ ನಿರ್ವಹಣೆ ಮತ್ತು ಸಸಿ ನೆಡುವ ಕಾರ್ಯಕ್ರಮಗಳ ಕುರಿತು ಸಮಗ್ರ ರೂಪುರೇಶೆ ಸಿದ್ಧಪಡಿಸಲಾಗುತ್ತಿದೆ. ವಾರ್ಡ್‌ಗಳಲ್ಲಿರುವ ಖಾಲಿ ನಿವೇಶನಗಳಲ್ಲಿ ಕಸ ಸಂಗ್ರಹವಾಗದಂತೆ ತಡೆದು, ಸಾರ್ವಜನಿಕರ ಸಾಮೂಹಿಕ ಬಳಕೆಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ತರಕಾರಿ ಗಿಡ ಹಾಗೂ ಔಷಧೀಯ ಸಸ್ಯಗಳನ್ನು ಬೆಳೆಸುವ ವಿನೂತನ ಪರಿಕಲ್ಪನೆಯನ್ನು ಜಾರಿಗೆ ತರಲು ಯೋಜಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ತಾರಸಿ ತೋಟ ನಿರ್ಮಾಣಕ್ಕೆ ಸಾರ್ವಜನಿಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ಸ್ವಂತ ಮನೆ ಹೊಂದಿರುವ ಅಧಿಕಾರಿಗಳು ಸಹ ಇದನ್ನು ತಮ್ಮ ಮನೆಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಸಿಕೊಳ್ಳಬಹುದು. ಎಲ್ಲ ಸರ್ಕಾರಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಕಚೇರಿಗಳಿಗೆ ಬರುವ ಆಡಳಿತಾತ್ಮಕ ಅನುದಾನವನ್ನು ಬಳಸಿಕೊಂಡು ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ನಗರಕ್ಕೆ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿ, ಪಾಲಿಕೆಯ ಮೇಲೆ ಹೆಚ್ಚಿನ ಒತ್ತಡ ಬೀಳುವ ಸಾಧ್ಯತೆಯಿದೆ ಎಂದು ವಿವರಿಸಿದರು.
ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು, ವಸತಿನಿಲಯಗಳು, ಸರ್ಕಾರಿ ಕಚೇರಿಗಳು, ಕಲ್ಯಾಣ ಮಂಟಪ ಮತ್ತು ಅತಿಥಿಗೃಹಗಳಲ್ಲಿ ಕಡ್ಡಾಯವಾಗಿ ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸುವಂತೆ ಸೂಚಿಸಿದರು.
"
ಸಾರ್ವಜನಿಕರಲ್ಲಿ ಪರಿಸರ ಪ್ರೇಮವನ್ನು ಹೆಚ್ಚಿಸಲು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೆಮೊರಿ ಟ್ರೀ(ಸ್ಮರಣಾರ್ಥ ಗಿಡ) ಎಂಬ ವಿನೂತನ ಪರಿಕಲ್ಪನೆಯನ್ನು ಜಾರಿಗೆ ತರಲಾಗುತ್ತಿದೆ. ತಮ್ಮ ಕುಟುಂಬದ ಹಿರಿಯರು ಅಥವಾ ಮರಣ ಹೊಂದಿದವರ ನೆನಪಿನಲ್ಲಿ ಸಾರ್ವಜನಿಕರು ಗಿಡಗಳನ್ನು ನೆಡಬಹುದು. ಈ ಗಿಡಗಳಿಗೆ ಅವರ ಹೆಸರಿನ ಫಲಕವನ್ನು ಅಳವಡಿಸಲು ಅವಕಾಶ ಕಲ್ಪಿಸಲಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ಗಿಡಗಳ ಮೇಲಿನ ಭಾವನಾತ್ಮಕ ಸಂಬಂಧ ಹೆಚ್ಚಲಿದ್ದು, ಅವುಗಳ ರಕ್ಷಣೆಯೂ ಸುಲಭವಾಗುತ್ತದೆ. ಜನ್ಮದಿನದ ನೆನಪಿಗಾಗಿಯೂ ಇಂತಹ ಗಿಡಗಳನ್ನು ನೆಡಲು ಪ್ರೋತ್ಸಾಹ ನೀಡಲಾಗುತ್ತಿದೆ.
— ಗಿತ್ತೆ ಮಾಧವ ವಿಠ್ಠಲ ರಾವ್, ಜಿ.ಪಂ. ಸಿಇಒ