ಹೊನ್ನಾಳಿಯಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿರುವ ಕಾರ್ಯಕರ್ತರು.Protest
- ಅವಳಿ ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸಬೇಕು
- ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲರ ವೇತನ ಬಿಡುಗಡೆ ಮಾಡಬೇಕು
- ವಿದ್ಯಾರ್ಥಿಗಳಿಗೆ ಜಾತಿ ಹಾಗೂ ಆದಾಯ ಪ್ರಮಾಣಪತ್ರ ವಿತರಿಸಬೇಕು
ಹೊನ್ನಾಳಿ: ಹೊನ್ನಾಳಿ, ನ್ಯಾಮತಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು, ಕೃಷಿ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ತಾಲೂಕು ಬಿಜೆಪಿ ಘಟಕದಿಂದ ರೈತರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ಮಾಡಿದರು.
ಇನ್ನೊಂದು ತಿಂಗಳಲ್ಲಿ ಅವಳಿ ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನಕ್ಕೆ ತರಬೇಕು. ಇಲ್ಲದಿದ್ದರೆ ತಾಲೂಕು ಕಚೇರಿ ಎದುರು ಆಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು. ಪಟ್ಟಣದ ಟಿ.ಬಿ.ವೃತ್ತದಿಂದ ತಾಲೂಕು ಕಚೇರಿವರೆಗೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವಳಿ ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸಬೇಕು, ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲರ ವೇತನವನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ರಾಜ್ಯದಲ್ಲಿ ಮಳೆ ಇಲ್ಲದೆ ಬಿತ್ತನೆ ಮಾಡಿದ ಬೆಳೆಗಳೆಲ್ಲ ಹಾಳಾಗಿವೆ. ರೈತರು ಸಂಕಷ್ಟಕ್ಕೀಡಾಗಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಹೋಗಲು ಮುಖ್ಯಮಂತ್ರಿಗೆ ಸಮಯ ಇದೆ. ಆದರೆ, ರೈತರ ಸಂಕಷ್ಟ ಏನೆಂದು ಕೇಳುವ ವ್ಯವಧಾನ ಇಲ್ಲ. ರಾಜ್ಯದಲ್ಲಿ ಬರ ತಾಂಡವವಾಡುತ್ತಿದ್ದರೂ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಸಚಿವರೇ ಇಲ್ಲ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ರಾಜ್ಯದಲ್ಲಿ 82.71ಲಕ್ಷ ಜನರಿಗೆ ಸಾಮಾಜಿಕ ಭದ್ರತೆ ಯೋಜನೆಯಡಿ ನೀಡುವ ವೇತನವನ್ನು ಕಳೆದ 5 ತಿಂಗಳಿಂದ ನಿಲ್ಲಿಸಲಾಗಿದ್ದು, ಕೂಡಲೇ ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲರ ವೇತನ ಬಿಡುಗಡೆ ಮಾಡಬೇಕು. ಜಾತಿ ಪ್ರಮಾಣಕ್ಕೆ ಸಂಬಂಧಿಸಿದಂತೆ ಕಾನೂನು ಸರಳೀಕರಣ ಮಾಡಿ ವಿದ್ಯಾಥಿಗಳಿಗೆ ಜಾತಿ ಹಾಗೂ ಆದಾಯ ಪ್ರಮಾಣಪತ್ರ ವಿತರಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಚಂದ್ರಶೇಖರ್ ಪೂಜಾರ್ ಮಾತನಾಡಿ, ಮುಂದಿನ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು. ತಾಲೂಕು ಬಿಜೆಪಿ ಅಧ್ಯಕ್ಷ ಅರಕೆರೆ ನಾಗರಾಜ್, ಕುಬೇರಪ್ಪ, ಜೆ.ಕೆ.ಸುರೇಶ್, ಎಂ.ಆರ್.ಮಹೇಶ್, ಎಸ್.ಎಸ್.ಬೀರಪ್ಪ, ಸುರೇಂದ್ರ ನಾಯ್ಕ ಇತರರು ಭಾಗವಹಿಸಿದ್ದರು.