ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಸೆ. 1 ರಂದು ದಾವಣಗೆರೆಯ 4 ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಇದನ್ನು ಸುಗಮವಾಗಿ ನಡೆಸಲು ಕೆಇಎ ನಿರ್ದೇಶನದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪರೀಕ್ಷಾ ಪೂರ್ವಸಿದ್ಧ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸೆ.1ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಮೊದಲ ಪತ್ರಿಕೆ, ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಎರಡನೇ ಪತ್ರಿಕೆಯ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದರು.
ಎ.ವಿ.ಕಮಲಮ್ಮ ಪಿಯು ಕಾಲೇಜು ಕೇಂದ್ರದಲ್ಲಿ 552, ಮೋತಿ ವೀರಪ್ಪ ಕಾಲೇಜು-553, ರಾಜನಹಳ್ಳಿ ಸೀತಮ್ಮ ಕಾಲೇಜು-552 ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 552 ಮಂದಿ ಸೇರಿ ಒಟ್ಟು 2209 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು.
ಕೇಂದ್ರದೊಳಗೆ ಮೊಬೈಲ್ ಸೇರಿ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರಬಾರದು. ಪರೀಕ್ಷಾ ನಿಯಮಾವಳಿ ಪಾಲಿಸಬೇಕು. ಕೆಇಎ ಯಿಂದ ಜಿಲ್ಲಾ ಮಟ್ಟದಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರಂತೆ ನೇಮಕಗೊಳ್ಳಲಿರುವ ಪರೀಕ್ಷಾ ಮೇಲ್ವಿಚಾರಕರು ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಬೇಕು. ಪರೀಕ್ಷಾ ಅವ್ಯವಹಾರಗಳಿಗೆ ಅವಕಾಶ ಇಲ್ಲದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಯಾವುದೇ ಜೆರಾಕ್ಸ್ ಅಂಗಡಿ, ಇಂಟರ್‌ನೆಟ್ ಸೆಂಟರ್‌ಗಳನ್ನು ತೆರೆಯುವಂತಿಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಹಾಗೂ ವಿವಿಧ ಕಾಲೇಜುಗಳ ಪ್ರಾಚಾರ್ಯರಿದ್ದರು.