ದಾವಣಗೆರೆ: ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ 50 ವರ್ಷ ಪೂರೈಸಿದ್ದರ ಹಿನ್ನಲೆಯಲ್ಲಿ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ನ.5ರಂದು ಸುವರ್ಣ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು ಅಗತ್ಯ ಸಿದ್ಧತೆ ನಡೆಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಹಾವೇರಿ ಮತ್ತು ದಾವಣಗೆರೆ ಜಿಲ್ಲೆ ಒಳಗೊಂಡಂತೆ ಕಾರ್ಯಕ್ರಮ ನಡೆಯಲಿದೆ ಎಂದರು.
ಮಂಡಳಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಜನಜಾಗೃತಿ ಮೂಡಿಸುವುದು ಹಾಗೂ ಪರಿಸರ ಸಂರಕ್ಷಣಾ ಕಾನೂನುಗಳ ಪರಿಣಾಮಕಾರಿ ಅನುಷ್ಠಾನ ಸಂಬಂಧ ತಿಳಿವಳಿಕೆ ಮೂಡಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ತಾಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸಿ, ಅಚ್ಚುಕಟ್ಟಾಗಿ ಕಾರ್ಯಕ್ರಮ ಸಿದ್ಧಪಡಿಸಿಕೊಳ್ಳಬೇಕೆಂದು ಸೂಚಿಸಿದರು.
ಸ್ಥಳೀಯ ಸಮಸ್ಯೆಗಳಾದ ಘನ ತ್ಯಾಜ್ಯ ನಿರ್ವಹಣೆ, ಜಲಮಾಲಿನ್ಯ ತಡೆ, ಇ-ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತು ಸಾಗರ್ ಮಿತ್ರ ಅಭಿಯಾನದ ವಿನೋದ ಭೋದನಕರ್ ವಿಶೇಷ ಉಪನ್ಯಾಸ ನೀಡುವರು. ಮಕ್ಕಳ ನಾಟಕ ಪ್ರದರ್ಶನ ಆಯೋಜನೆಗೆ ಕ್ರಮ ವಹಿಸಬೇಕು ಎಂದು ಹೇಳಿದರು.
ಕೈಗಾರಿಕೋದ್ಯಮಿಗಳು, ಪರಿಸರವಾದಿಗಳು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂದಿ, ಸಂಘ ಸಂಸ್ಥೆಗಳು ಹಾಗೂ ಇತರೆ ಭಾಗಿದಾರರ ಸಹಭಾಗಿತ್ವದಲ್ಲಿ ಜಿಲ್ಲೆಯಾದ್ಯಂತ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಈ ಕುರಿತು ಅಧಿಕಾರಿಗಳು ಸಿದ್ಧತೆ ಪೂರ್ಣಗೊಳಿಸಿ, ವರದಿ ಸಲ್ಲಿಸಬೇಕೆಂದು ಹೇಳಿದರು.
ಪರಿಸರ ಉಳಿವಿಗಾಗಿ ಶ್ರಮಿಸುತ್ತಿರುವ ವ್ಯಕ್ತಿ ಮತ್ತು ಸಂಘ ಸಂಸ್ಥೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ನೀಡಲಾಗುವುದು ಎಂದರು.
ತುಂಗಾಭದ್ರಾ ನದಿಗೆ ಹೊನ್ನಾಳಿ, ಹರಿಹರ ನಗರ ಪ್ರದೇಶಗಳಿಂದ ಹರಿದುಬರುವ ಯುಜಿಡಿ ನೀರನ್ನು ತಡೆಯುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ, ಡಿಡಿಪಿಐ ಜಿ.ಕೊಟ್ರೇಶ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ರಾಜಶೇಖರ್ ಬಸವಲಿಂಗಪ್ಪ, ರವಿಕುಮಾರ್, ಗಿರೀಶ್ ದೇವರಮನೆ, ಡಾ.ಮಂಜಪ್ಪ, ಶ್ರೀಕಾಂತ್ ಇದ್ದರು.
---