ದಾವಣಗೆರೆ: ಚನ್ನಗಿರಿ ಠಾಣೆ ಬಳಿ ಮೇ 24ರಂದು ನಡೆದ ಪ್ರತಿಭಟನೆ, ಕಲ್ಲು ತೂರಾಟ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಎಂಬುದಾಗಿ ಯಾರೂ ಕೂಡ ಹೇಳಿಲ್ಲ ಎಂದು ಎಸ್ಪಿ ಉಮಾ ಪ್ರಶಾಂತ್ ಸ್ಪಷ್ಟಪಡಿಸಿದ್ದಾರೆ.
ಚನ್ನಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಮಾಹಿತಿ ಹರಿದಾಡುತ್ತಿದೆ. ಆದರೆ ಸಿಸಿ ಕ್ಯಾಮರಾ ಪರಿಶೀಲಿಸಲಾಗಿ ಪೊಲೀಸರಿಗೆ ಧಿಕ್ಕಾರ ಕೂಗಿದ್ದು ಬಿಟ್ಟರೆ ಯಾರೂ ಸಹ ಹಾಗೆ ಹೇಳಿಲ್ಲ.
ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವ ವಿಡಿಯೋ ಲಭ್ಯವಿದ್ದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ಅಥವಾ ಸ್ಥಳೀಯ ಠಾಣೆಗೆ ಸಾರ್ವಜನಿಕರು ಮಾಹಿತಿ ನೀಡಿದರೆ, ಕಾನೂನು ಕ್ರಮ ಕೈಗೊಳ್ಳಲಾಗುವುದು. ಆದರೆ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಬಾರದು. ಹಾಗೆ ಮಾಡಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.