ದಾವಣಗೆರೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳು ಪ್ರಥಮ ಸ್ಥಾನ ಪಡೆಯಬೇಕು. ಇದಕ್ಕಾಗಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಪೂರಕ ಕಾರ್ಯಕ್ರಮ ಆಯೋಜಿಸಬೇಕು ಎಂದು ಎಂದು ಶಾಸಕ ಡಿ.ಜಿ.ಶಾಂತನಗೌಡ ಶಿಕ್ಷಕರಿಗೆ ಕಿವಿಮಾತು ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಹೊನ್ನಾಳಿ ಪಟ್ಟಣದ ಭಾರತೀಯ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಅತಿ ಹೆಚ್ಚು ಅಂಕ ಗಳಿಸಿ ಉನ್ನತ ಉದ್ಯೋಗ ಪಡೆದರೆ ಸಾಕೆಂಬ ಮನೋಭಾವದಿಂದ ಪಾಲಕರು ಹೊರಗೆ ಬರಬೇಕು. ಅವರಿಗೆ ಇಷ್ಟವಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.
ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯನ್ನು ಹುಡುಕಿ ತೆಗೆಯುವ ಕೆಲಸ ಶಿಕ್ಷಕರದು. ಪಠ್ಯಗಳಿಗೆ ಮಾತ್ರ ಸೀಮಿತವಾಗದೆ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಕ್ಕಳ ಕೌಶಲ ಗುರುತಿಸಬೇಕು ಎಂದು ಹೇಳಿದರು.
ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿಸಲು ಉತ್ತೇಜಿಸಬೇಕು. ಆಗ ವಿದ್ಯಾರ್ಥಿಗಳು ಬೇರೆ ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಭಾರತೀಯ ವಿದ್ಯಾಸಂಸ್ಥೆ ಅಧ್ಯಕ್ಷ ಆನಂದಕುಮಾರ್ ಮಾತನಾಡಿ, ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಬೇಕೆಂದು ತಿಳಿಸಿದರು.
ಬಿಆರ್‌ಸಿ ತಿಪ್ಪೇಶಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎ.ಕೆ.ನಾಗೇಂದ್ರಪ್ಪ, ಇಸಿಒ ಮುದ್ದನಗೌಡ, ಪತ್ರಕರ್ತ ಯೋಗಿಶ್ ಹಾಗೂ ಸರ್ಕಾರಿ ನೌಕರ ಸಂಘದ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು.