ದಾವಣಗೆರೆ: ಹೆಣ್ಣುಮಕ್ಕಳ ಶಿಕ್ಷಣ, ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ.ಕರೆಣ್ಣವರ ಹೇಳಿದರು.
ಭೇಟಿ ಬಚಾವೋ, ಭೇಟಿ ಪಢಾವೋ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಐ.ಸಿ.ಡಿ.ಎಸ್. ಸೇವೆ ಹಾಗೂ ಇಲಾಖಾ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಒಂದು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಉದ್ಘಾಟಿಸಿ, ಮಾತನಾಡಿದರು.
ಮಗು ತಾಯಿಯ ಗರ್ಭದಲ್ಲಿರುವಾಗ ಮತ್ತು ನಂತರ ಬೆಳವಣಿಗೆಯಾಗಲು ತಾಯಿಯ ಆರೈಕೆ ಅತ್ಯಗತ್ಯ. ಈ ಹಂತದಲ್ಲಿ ತಾಯಿಗೆ ಪೌಷ್ಠಿಕ ಆಹಾರ ಬಹಳ ಮುಖ್ಯ. ಮಗು ಹುಟ್ಟುವ ಮುನ್ನ, ನಂತರದ ಬೆಳವಣಿಗೆ ಹಾಗೂ ವಿದ್ಯಾಭ್ಯಾಸಕ್ಕೆ ತಾಯಿಯ ಶ್ರಮ ಸಾಕಷ್ಟಿರುತ್ತದೆ. ಹೆಣ್ಣು ಮಕ್ಕಳ ಸಂರಕ್ಷಣೆ, ಶಿಕ್ಷಣ ನೀಡುವುದರಿಂದ ಕುಟುಂಬದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.
ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಮಕ್ಕಳ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಪಿಡುಗು ತೊಡೆದು ಹಾಕುವಲ್ಲಿ ಬಹು ಮುಖ್ಯ ಕಾರ್ಯ ನಿಭಾಯಿಸುತ್ತಿದೆ. ಅದೇ ರೀತಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ ವಿರುದ್ಧ ಹೋರಾಡುವ ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಸ್. ರಾಜಾನಾಯ್ಕ, ಜಿಲ್ಲೆಯ ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕರು ಇದ್ದರು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.