ತುಮಕೂರು : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣಾ ಸಂಬಂಧ ಮಾದರಿ ನೀತಿ ಸಂಹಿತೆ ನ.11ರಂದು ಜಾರಿಗೆ ಬಂದಿದ್ದು, ಈ ಮಾದರಿ ನೀತಿ ಸಂಹಿತೆಯ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ತಾಲೂಕಿಗೆ ಒಂದರಂತೆ ಫ್ಲೈಯಿಂಗ್ ಸ್ಕ್ವಾಡ್ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ವಿಧಾನ ಪರಿಷತ್ ಚುನಾವಣೆ ಸಂಬಂಧ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ವಿಧಾನಪರಿಷತ್ ಸದಸ್ಯರ ಪದಾವಧಿಯು 2022ರ ಜನವರಿ 5ಕ್ಕೆ ಮುಕ್ತಾಯಗೊಳ್ಳಲಿದ್ದು, ತುಮಕೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ತೆರವಾಗುವ ಸದಸ್ಯ ಸ್ಥಾನಕ್ಕೆ ಡಿ.10ರಂದು ಚುನಾವಣೆ ನಡೆಸಲು ಮಾದರಿ ನೀತಿ ಸಂಹಿತೆಯಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಬ್ಯಾಲೆಟ್ ಪೇಪರ್: ಪರಿಷತ್ ಚುನಾವಣೆಯು ಬ್ಯಾಲೆಟ್ ಪೇಪರ್ ಮೂಲಕ ನಡೆಯಲಿದೆ. ಪ್ರತಿಯೊಬ್ಬ ಮತದಾರನಿಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಸಂಖ್ಯೆಗೆ ಅನುಸಾರ ಪ್ರಾಶಸ್ತ್ಯ ಮತಗಳನ್ನು ದಾಖಲಿಸಲು ಅವಕಾಶವಿರುತ್ತದೆ. ಚುನಾವಣೆಗೆ ಬ್ಯಾಲೆಟ್ ಬಾಕ್ಸ್‌ಗಳನ್ನು ಬಳಸಲಾಗುವುದು (ಇವಿಎಂಗಳನ್ನು ಬಳಸುವುದಿಲ್ಲ) ಎಂದು ವೈ.ಎಸ್.ಪಾಟೀಲ ತಿಳಿಸಿದರು.
ವಿಧಾನ ಪರಿಷತ್ ಚುನಾವಣೆಗೆ ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್, ಜಿಪಂ, ತಾಪಂ, ಗ್ರಾಪಂ, ತುಮಕೂರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರು ಮತದಾರರಾಗಿರುತ್ತಾರೆ. ಈ ಬಾರಿ ಜಿಪಂ, ತಾಪಂ ಚುನಾವಣೆ ಮುಂದೂಡಿರುವುದು ಎಲ್ಲರಿಗೂ ತಿಳಿದಿರುವ ವಿಷಯ ಎಂದು ಹೇಳಿದರು.
ಹೆಲ್ಪ್‌ಲೈನ್ ಆ್ಯಪ್: ಕೇಂದ್ರ ಚುನಾವಣಾ ಆಯೋಗವು ಮತದಾರರ ಅನಕೂಲಕ್ಕಾಗಿ ಹೆಲ್ಪ್‌ಲೈನ್ ಆ್ಯಪ್ ತಂತ್ರಾಂಶವನ್ನು ಬಿಡುಗಡೆಗೊಳಿಸಿದ್ದು, ನೋಂದಣಿಯಾಗಿರುವ ಮತದಾರರು ಹೆಸರು, ವಿಳಾಸ ಇತ್ಯಾದಿಗಳನ್ನು ಪರಿಶೀಲಿಸಿಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಹೇಳಿದರು.
ಹೊಸದಾಗಿ ನೋಂದಣಿ ಮಾಡಲು ಇಚ್ಛಿಸುವ ಯುವ ಹಾಗೂ ಇತರ ಅರ್ಹ ಮತದಾರರು ವೋಟರ್ ಹೆಲ್ಪ್‌ಲೈನ್ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ರಾಜಕೀಯ ಪಕ್ಷಗಳ ಮುಖಂಡರ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು. ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.
ಪರಿಷತ್ ಚುನಾವಣೆ ವೇಳಾಪಟ್ಟಿ: ಚುನಾವಣಾ ವೇಳಾ ಪಟ್ಟಿ ಅನ್ವಯ ನ.16 ರಿಂದ 23ರವರೆಗೆ ಸಾರ್ವತ್ರಿಕ ರಜಾದಿನಗಳನ್ನು ಹೊರತುಪಡಿಸಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ನಾಮಪತ್ರಗಳ ಪರಿಶೀಲನೆ ಕಾರ್ಯ 24ರಂದು ನಡೆಯಲಿದ್ದು, 26 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.10 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಡಿ.14ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯು ಡಿ.16ರೊಳಗೆ ಮುಕ್ತಾಯಗೊಳ್ಳಲಿದೆ. ಪರಿಷತ್ ಚುನಾವಣೆಗೆ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿ ನೋಂದಣಿಯಾಗಿರುವ ಹಾಗೂ 30 ವರ್ಷ ಮೇಲ್ಪಟ್ಟ ಮತದಾರರು ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.