ತುಮಕೂರು : ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಳೆದ ಎರಡು ವರ್ಷಗಳಲ್ಲಿ ವಿವಿಧ ಇಲಾಖೆ ಮೂಲಕ ಮಂಜೂರಾದ ಅನುದಾನವನ್ನು ಆಗಸ್ಟ್ ಅಂತ್ಯದೊಳಗೆ ಪೂರ್ಣವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಖರ್ಚು ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, 2018-19, 2019-20ನೇ ಸಾಲಿನಲ್ಲಿ ಕೈಗೊಂಡ ಕಾಮಗಾರಿಗಳನ್ನು ತ್ವರಿತವಾಗಿ ಇದೇ ತಿಂಗಳೊಳಗೆ ಪೂರ್ಣಗೊಳಿಸಿ ವರದಿ ನೀಡಬೇಕು. ಈವರೆಗೂ ಪ್ರಾರಂಭವಾಗದೇ ಇರುವ ಕಾಮಗಾರಿಗಳ ಅನುದಾನವನ್ನು ಸರ್ಕಾರಕ್ಕೆ ವಾಪಸ್ ನೀಡಬೇಕು ಎಂದು ಆದೇಶಿಸಿದರು.
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸರ್ಕಾರದಿಂದ ಮಂಜೂರಾಗಿ ಪ್ರಾರಂಭಿಸದೇ ಇರುವ ಕಾಮಗಾರಿಯನ್ನು ಬದಲಾವಣೆಗೆ ಕೋರಿದರೆ ಪರಿಗಣಿಸಲಾಗುವುದಿಲ್ಲ. 2018-19 ಹಾಗೂ 2019-20ನೇ ಸಾಲಿನಲ್ಲಿ ಕೈಗೊಂಡ ಕಾಮಗಾರಿಗಳನ್ನು 15 ದಿನಗಳೊಳಗಾಗಿ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.
ಕಾಮಗಾರಿ ಪ್ರಾರಂಭಕ್ಕೂ ಮುನ್ನ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡದೆ ಸಂಬಂಧಿಸಿದ ಇಲಾಖೆಗಳೊಡನೆ ಸಮನ್ವಯ ಸಾಧಿಸಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಕಾಮಗಾರಿ ಟೆಂಡರ್ ಪ್ರಕ್ರಿಯೆ ನಡೆಸಬೇಕು. ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಏಜೆನ್ಸಿಗಳಿಗೆ ಸೂಚಿಸಬೇಕು. ಯಾವುದೇ ಕಾಮಗಾರಿಗಳನ್ನು ಕೈಗೊಳ್ಳಲು ನಿವೇಶನ ಸಮಸ್ಯೆ, ತಕರಾರುಗಳಿದ್ದಲ್ಲಿ ಗಮನಕ್ಕೆ ತರಬೇಕು ಎಂದರು.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳಿಗೆ ವಿಶೇಷ ಅನುದಾನ ಮಂಜೂರಾಗಿದ್ದು, ಇದುವರೆಗೂ 21 ಕಾಮಗಾರಿಗಳು ಪೂರ್ಣಗೊಂಡಿಲ್ಲ. ಈ ಅಪೂರ್ಣ ಕಾಮಗಾರಿಗಳನ್ನು ಶ್ರೀ ಪೂರ್ಣಗೊಳಿಸಿ ಮಾಹಿತಿ ನೀಡಬೇಕು ಎಂದರು.
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಹಾಗೂ ಮಂಜೂರಾದ ಅನುದಾನದ ಸಂಪೂರ್ಣ ಮಾಹಿತಿಯನ್ನು ಗಾಂಧಿ ಸಾಕ್ಷಿ ಕಾಯಕ ತಂತ್ರಾಂಶದಲ್ಲಿ ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು ಎಂದು ನಿರ್ದೇಶಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಮಾತನಾಡಿ, ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳ ಅಂಕಿ ಅಂಶದ ಮಾಹಿತಿಯನ್ನು ಸಮರ್ಪಕವಾಗಿ ನೀಡಬೇಕು. ಆಗಸ್ಟ್ ಅಂತ್ಯದೊಳಗೆ ಅನುದಾನದ ಸದ್ಬಳಕೆ ಮಾಡಬೇಕು ಎಂದು ಸೂಚಿಸಿದರು.
ಮಧುಗಿರಿ ಉಪ ವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಸೇರಿ ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.