ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯವಾಗುವುದನ್ನು ತಡೆಯುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮದಡಿಯಲ್ಲಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಕುರಿತು ತೆಗೆದುಕೊಂಡಿರುವ ಕ್ರಮದ ಬಗೆಗಿನ ಸಭೆಯಲ್ಲಿ ಮಾತನಾಡಿದರು.
ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಸಂಗ್ರಹ ಮಾಡುವ ಅಂಗಡಿ, ದಾಸ್ತಾನು ಮಳಿಗೆಗಳು ಹಾಗೂ ಗೋದಾಮುಗಳ ಮೇಲೆ ಅಧಿಕಾರಿಗಳ ತಂಡ ಆಗಾಗ್ಗೆ ದಾಳಿ ನಡೆಸಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯರು, ಸ್ಥಳೀಯ ಸಂಸ್ಥೆಗಳ ಸದಸ್ಯರು, ಪೊಲೀಸ್ ಇಲಾಖೆ, ತಹಸೀಲ್ದಾರ್‌ಗಳ ಜಂಟಿ ಸಮಿತಿ ರಚಿಸಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳ ಸಂಗ್ರಹ ಗೋದಾಮುಗಳು, ದಾಸ್ತಾನು ಮಳಿಗೆಗಳ ಮೇಲೆ ಕಾಲ ಕಾಲಕ್ಕೆ ದಾಳಿ ನಡೆಸಿ ದಂಡ ವಿಧಿಸುವ ಜತೆಗೆ ಪುನರಾವರ್ತನೆಯಾಗದಂತೆ ಎಚ್ಚರಿಕೆ ನೀಡಬೇಕು ಎಂದು ಡಿಸಿ ಸೂಚಿಸಿದರು. ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಸಾಕಷ್ಟು ಹಾನಿಯುಂಟಾಗುತ್ತಿದೆ. ಪ್ರತಿನಿತ್ಯ ಜನರು ಪ್ಲಾಸ್ಟಿಕ್ ಉತ್ಪನ್ನ ಬಳಕೆಯನ್ನು ಹೆಚ್ಚಾಗಿ ಉಪಯೋಗಿಸುತ್ತಿದ್ದಾರೆ. ಇದರಿಂದ ಜನರ ಆರೋಗ್ಯದ ಮೇಲೂ ಪ್ರಭಾವ ಬೀರುತ್ತಿದೆ. ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದರು. ಸಾಮಾನ್ಯವಾಗಿ ಅಂಗಡಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ಲಾಸ್ಟಿಕ್ ಕೈಚೀಲಗಳನ್ನು ಬಳಸುತ್ತಿದ್ದಾರೆ. ಇದನ್ನು ಸಾರ್ವಜನಿಕರು ಉಪಯೋಗಿಸುತ್ತಿದ್ದಾರೆ. ಇದರ ತಡೆಗೆ ಅಂಗಡಿ ಮಾಲೀಕರಿಗೆ ದಂಡ ವಿಧಿಸುವ ಜತೆಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ನಿಗಾ:
ಗ್ರಾಮೀಣ ಪ್ರದೇಶಗಳಲ್ಲೂ ಇತ್ತೀಚಿನ ದಿನಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿರುವ ಬಗ್ಗೆ ಮಾಹಿತಿ ಇದೆ. ಗ್ರಾಮೀಣ ಪ್ರದೇಶಗಳ ಕಡೆ ಅಧಿಕಾರಿಗಳು ಬರುವುದಿಲ್ಲ ಎಂಬ ಕಲ್ಪನೆಯಿಂದ ಅಂಗಡಿ ಮುಂಗಟ್ಟುಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ಇದನ್ನು ಸಾರ್ವಜನಿಕರು ಉಪಯೋಗಿಸುತ್ತಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ ಆದ್ದರಿಂದ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳತ್ತ ನಿಗಾವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಕಾರ್ಯಾನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧಾ ಸೂಚಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಅತಿಯಾದ ನಿಷೇಧಿತ ಪ್ಲಾಸ್ಟಿಕ್ ಬಳಕೆ ನಡೆಯುತ್ತಿದ್ದು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ಬ್ಲಾಕ್‌ಸ್ಪಾಟ್‌ಗಳು ನಿರ್ಮಾಣವಾಗುತ್ತಿವೆ. ಇವು ಕಡೆಗೆ ಕೃಷಿಭೂಮಿಯಲ್ಲಿ ವೀಲಿನವಾಗಿ ಲವತ್ತತೆ ಕಳೆದುಕೊಳ್ಳುವಂತಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ದಂಡ ವಿಧಿಸಲಾಗುತ್ತಿದೆ:
ನಗರ ಪ್ರದೇಶಗಳಲ್ಲಿ ಮುಖ್ಯವಾಗಿ ಅಂಗಡಿ ಮುಂಗಟ್ಟುಗಳ ಮೇಲೆ ದೀಢಿರ್ ದಾಳಿ ನಡೆಸುತ್ತಿದ್ದು ಈಗಾಗಲೇ ಸಾಕಷ್ಟು ಅಂಗಡಿ ಮಾಲೀಕರಿಂದ ದಂಡ ವಸೂಲಿ ಮಾಡಲಾಗಿದೆ. ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂಬ ಭಯದಿಂದ ಸಾಕಷ್ಟು ಪ್ರಮಾಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಪ್ರಮಾಣ ತಗ್ಗಿದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ ಸಭೆಗೆ ತಿಳಿಸಿದರು.
ಪರಿಸರ ಮಾಲಿನ್ಯ:
ನಿಷೇಧಿತ ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯವಾಗುತ್ತದೆ, ಇಂಥ ಪ್ಲಾಸ್ಟಿಕ್ ಸ್ವಾಭಾವಿಕವಾಗಿ ಕರಗುವುದಿಲ್ಲ ಭೂಮಿಯ ಪದರ ಸೇರಿ ಭೂಮಿಯ ಲವತ್ತನೆಯನ್ನೇ ನಾಶ ಮಾಡುತ್ತದೆ ಭವಿಷ್ಯದಲ್ಲಿ ಪರಿಸರಕ್ಕೆ ಭೀಕರವಾದ ಮಾಲಿನ್ಯ ತಂದೊಡ್ಡಲಿದೆ ಈ ಬಗ್ಗೆ ಸಾರ್ವಜನಿಕರೂ ಎಚ್ಚೆತ್ತುಕೊಳ್ಳಬೇಕು ಇಲ್ಲವಾದರೆ ಭವಿಷ್ಯದಲ್ಲಿ ಭೀಕರತೆ ಎದುರಿಸಬೇಕಾಗುತ್ತದೆ ಎಂದು ಪರಿಸರ ಅಧಿಕಾರಿ ಪದ್ಮನಾಭನ್ ತಿಳಿಸಿದರು.