ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಸಲ್ ಬಿಮಾ ಯೋಜನೆಯಡಿ ಜಿಲ್ಲೆಯ ನಾಲ್ಕೂ ತಾಲೂಕುಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಮನವಿ ಮಾಡಿದರು.
ದೇವನಹಳ್ಳಿ ತಾಲೂಕು ಬೀರಸಂದ್ರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ಬಿಮಾ ಯೋಜನೆಯ ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. 2023ನೇ ಸಾಲಿನ ರಾಜ್ಯ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿದೆ. ಅಧಿಸೂಚಿತ ಬೆಳೆಗಳನ್ನು ಬೆಳೆಯುವ ರೈತರು ಈ ಯೋಜನೆಯಡಿ ಹೆಸರುನೋಂದಣಿ ಮಾಡಿಕೊಳ್ಳುವಂತೆ ಅರಿವು ಮೂಡಿಸಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಪ್ರಮುಖ ಬೆಳೆಗಳಾದ ರಾಗಿ, ಮುಸುಕಿನ ಜೋಳ, ನೆಲಗಡಲೆ ಬೆಳೆಯುವ ರೈತರು ಈ ಯೋಜನೆಯ ಸದುಪಯೋಗ ಪಡೆಯಬಹುದಾಗಿದೆ. ಹಾಗೆಯೇ ಬೆಳೆ ಸಾಲ ಪಡೆದ ರೈತರಿಗೆ ನೋಂದಣಿ ಅವರ ಆಸಕ್ತಿಗೆ ಬಿಟ್ಟದ್ದು. ಅಂತಹ ರೈತರು ಸಂಬಂಧಿಸಿದ ಬ್ಯಾಂಕ್ ಶಾಖೆಗೆ ಲಿಖಿತ ರೂಪದಲ್ಲಿ ದೃಢೀಕರಣ ಸಲ್ಲಿಸಬೇಕು ಎಂದರು.
ನೆಲಗಡಲೆ ಬೆಳೆ ನೋಂದಣಿಗೆ ಜು.31 ಕೊನೆಯ ದಿನವಾಗಿದ್ದು, ರಾಗಿ ಮತ್ತು ಮುಸುಕಿನ ಜೋಳ ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 16 ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ರೈತರು ನೋಂದಣಿ ದಿನಾಂಕದೊಳಗೆ ಯೋಜನೆಗೆ ಸೇರ್ಪಡೆಗೊಳ್ಳಬೇಕು. ಅಧಿಕಾರಿಗಳು ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಸಂಬಂಧಿಸಿದ ರೈತರಿಗೆ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಲಾನುಭವಿಗಳಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಜಾಗೃತಿ ಮೂಡಿಸಬೇಕು:
ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಮಾವು ಮತ್ತು ದ್ರಾಕ್ಷಿ ಬೆಳೆಗಳಿಗೆ ವಿಮೆ ನೋಂದಾಯಿಸಲು ಅವಕಾಶವಿದೆ. ರೈತರು ಜು.31 ರೊಳಗೆ ನೋಂದಾಯಿಸಿಕೊಳ್ಳಬಹುದು ಎಂದು ಡಿಸಿ ತಿಳಿಸಿದರು.
ರೈತರು ಬೆಳೆವಿಮೆಯಲ್ಲಿ ನೋಂದಾಯಿಸಿಕೊಳ್ಳಲು ತಾಲೂಕು, ಹೋಬಳಿ, ಗ್ರಾಮಪಂಚಾಯಿತಿಮಟ್ಟದಲ್ಲಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಭಿತ್ತಿಪತ್ರ ಹಾಗೂ ಕರಪತ್ರ ಹಂಚುವ ಮೂಲಕ ರೈತರಲ್ಲಿ ಅರಿವು ಮೂಡಿಸಬೇಕು ಎಂದರು.