ಜಿಲ್ಲೆ

ಅಂಗನವಾಡಿಗಳಿಗೆ ಸೌಕರ್ಯಕ್ಕೆ ಒತ್ತು ನೀಡಬೇಕು

ಶಿವರಾಜ.ಎಂ

ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚನೆವಿವಿಧ ಸಮಿತಿಗಳ ಸಭೆ


ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲೆಯಲ್ಲಿರುವ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಅಧಿಕಾರಿಗಳು ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಮೇಲ್ವಿಚಾರಣೆ ಸಮಿತಿ, ಪೋಷಣ್ ಅಭಿಯಾನ ಸಮನ್ವಯ ಸಮಿತಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣೆ, ಬಾಲ್ಯ ವಿವಾಹ ನಿಷೇಧ ಸಮಿತಿ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ 1,277 ಅಂಗನವಾಡಿ ಕೇಂದ್ರಗಳಿದ್ದು, 984 ಅಂಗನವಾಡಿ ಸ್ವಂತ ಕಟ್ಟಡಗಳಲ್ಲಿ, 4 ಅಂಗನವಾಡಿಗಳು ಪಂಚಾಯಿತಿ ಕಟ್ಟಡಗಳಲ್ಲಿ, 58 ಅಂಗನವಾಡಿಗಳು ಸಮುದಾಯ ಭವನದಲ್ಲಿ, 85 ಅಂಗನವಾಡಿಗಳು ಶಾಲೆಗಳಲ್ಲಿ ಹಾಗೂ 146 ಅಂಗನವಾಡಿಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಸ್ವಂತ ಕಟ್ಟಡವಿಲ್ಲದ ಕೇಂದ್ರಗಳಿಗೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಬೇಕು ಎಂದರು.
ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಶೌಚಗೃಹ, ವಿದ್ಯುತ್ ಸಂಪರ್ಕ, ನೀರು ಸೇರಿ ಮೂಲ ಸೌಕರ್ಯ ಕಲ್ಪಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅಪೌಷ್ಟಿಕತೆಯಿಂದ ಬಳಲುತ್ತಿರುವ ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಪೋಷಣ್ ಅಭಿಯಾನದಡಿ ಪೌಷ್ಟಿಕ ಆಹಾರ ನೀಡಿ ಅವರನ್ನು ಸದೃಢರನ್ನಾಗಿಸಬೇಕು, ಐಸಿಡಿಎಸ್ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯನ್ನು ಅಪೌಷ್ಟಿಕಮುಕ್ತವಾಗಿಸಬೇಕು ಎಂದರು.

ನ್ಯಾಯ ಒದಗಿಸಬೇಕು: ಕೌಟುಂಬಿಕ ಹಿಂಸೆಗೊಳಗಾದ ಮಹಿಳೆಯರಿಗೆ ಸಕಾಲದಲ್ಲಿ ಆಪ್ತ ಸಮಾಲೋಚನೆ ನಡೆಸಿ ಆತ್ಮಸ್ಥೈರ್ಯ ತುಂಬಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ದೌರ್ಜನ್ಯಗೊಳಗಾದ ಮಹಿಳೆಯರಿಗೆ ಸೂಕ್ತ ಮಾರ್ಗದರ್ಶನ ನೀಡಿ ನ್ಯಾಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ರಡಿ ಜಿಲ್ಲೆಯಲ್ಲಿ 2023ರ ಏಪ್ರಿಲ್ನಿಂದ ಜೂನ್‌ವರೆಗೆ 8 ಪ್ರಕರಣಗಳು ದಾಖಲಾಗಿದೆ. ಈ ಪೈಕಿ ದೇವನಹಳ್ಳಿಯಲ್ಲಿ 1, ದೊಡ್ಡಬಳ್ಳಾಪುರ 4, ಹೊಸಕೋಟೆಯಲ್ಲಿ 3 ಬಾಲ್ಯ ವಿವಾಹ ತಡೆಯಲಾಗಿದ್ದು, ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಬೇಕೆಂದು ಸೂಚಿಸಿದರು.
ಸಮಾಲೋಚನೆಯಿಂದ ಇತ್ಯರ್ಥ: ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ಪ್ರಸಕ್ತ ಸಾಲಿನಲ್ಲಿ ಸಖಿ ಯೋಜನೆಯಡಿ ದಾಖಲಾದ 47 ಪ್ರಕರಣಗಳಲ್ಲಿ 39 ಪ್ರಕರಣಗಳು, ಸಾಂತ್ವನ ಕೇಂದ್ರಗಳಲ್ಲಿ ದಾಖಲಾದ 133 ಪ್ರಕರಣಗಳಲ್ಲಿ 121 ಹಾಗೂ ಸಂರಕ್ಷಣಾಧಿಕಾರಿಗಳ ಹಂತದಲ್ಲಿ ದಾಖಲಾದ 8 ಪ್ರಕರಣಗಳಲ್ಲಿ 1 ಪ್ರಕರಣವು ಸಮಾಲೋಚನೆಯಿಂದ ಇತ್ಯರ್ಥಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜ್ ಮಾಹಿತಿ ನೀಡಿದರು.
ಸಾಂತ್ವನ ಕೇಂದ್ರ ಹಾಗೂ ಸಖಿ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂತ್ರಸ್ತೆಯರಿಗೆ ಉತ್ತಮ ನೆರವು ನೀಡುತ್ತಿದೆ. ಸಮಾಲೋಚನೆಗಳ ಮೂಲಕ ಸಮಸ್ಯೆಗಳ ಇತ್ಯರ್ಥ ಯಶಕಾಣುತ್ತಿದೆ ಎಂದು ಮಾಹಿತಿ ನೀಡಿದರು.