ಮಂಡ್ಯ: ನಗರಸಭೆ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಉಳಿಕೆ ಕಾಮಗಾರಿಗಳ ಕ್ರಿಯಾಯೋಜನೆಗೆ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅನುಮೋದನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಡಿಸಿ, ಸಣ್ಣ ಮತ್ತು ಮಧ್ಯಮ ನಗರಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ 4.97 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. 3.55 ಕೋಟಿ ರೂ. ವೆಚ್ಚದಲ್ಲಿ ಒಳಾಂಗಣ ಅಭಿವೃದ್ಧಿ, ವಿದ್ಯುತ್ ಸಂಪರ್ಕ, ಸಿಸಿ ಚರಂಡಿ, ರಸ್ತೆ ನಿರ್ಮಾಣ, ಸಾರ್ವಜನಿಕ ಶೌಚಗೃಹ ಕಾಮಗಾರಿ ಕೈಗೊಂಡು ಮಾರುಕಟ್ಟೆಯ ನಿರ್ಮಾಣ ಪೂರ್ಣಗೊಳಿಸುವಂತೆ ತಿಳಿಸಿದರು.
ನಿರ್ಮಾಣವಾಗುತ್ತಿರುವ ಮಾರುಕಟ್ಟೆಯಲ್ಲಿ 117 ಅಂಗಡಿ ಮಳಿಗೆಗಳಿವೆ. ಯಾವುದೇ ಗೊಂದಲ ಉಂಟಾಗದಂತೆ ನಿಯಮಾನುಸಾರ ಹಂಚಿಕೆಗೆ ಯೋಜನೆ ಸಿದ್ಧ ಮಾಡಿಕೊಳ್ಳಿ. ಮಾರುಕಟ್ಟೆ ಜಿ+3 ಮಾದರಿಯಲ್ಲಿ ವಿನ್ಯಾಸ ಮಾಡಿಕೊಳ್ಳಲಾಗಿದೆ. ಮೊದಲನೇ ಮಹಡಿಯಲ್ಲಿ ಬ್ಯಾಂಕ್, ಕಚೇರಿ, ಮಾಲ್, ಕಿಡ್ಸ್ ಜೋನ್ ಮುಂತಾದ ವಹಿವಾಟುಗಳಿಗೆ ನೀಡುವ ರೀತಿ ಮುಂದಿನ ದಿನಗಳಲ್ಲಿ ವಿನ್ಯಾಸ ಮಾಡಿಕೊಳ್ಳುವುದು ಉತ್ತಮ ಎಂದು ಸೂಚಿಸಿದರು.
ಸಭೆಯಲ್ಲಿ ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್,ನಾಗರಾಜು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರ ಮಣಿ, ಪೌರಾಯುಕ್ತ ಮಂಜುನಾಥ್, ಕಾರ್ಯಪಾಲಕ ಇಂಜಿನಿಯರ್ ನಾಗರಾಜು ಇತರರಿದ್ದರು.