ಮಂಡ್ಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಮೇ 20 ಮತ್ತು 21ರಂದು 2023ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್ಸಿ (ನರ್ಸಿಂಗ್) ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಆಯೋಜಿಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧಿಕಾರಿಗಳು ಪರೀಕ್ಷಾ ಸೂಚನೆಗಳನ್ನು ಪಾಲನೆ ಮಾಡಿ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದರು.
20ರಂದು ಬೆಳಗ್ಗೆ 10.30ರಿಂದ 11.50 ರವರೆಗೆ ಜೀವಶಾಸ್ತ ಹಾಗೂ ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ಪರೀಕ್ಷೆ ನಡೆಯಲಿದೆ. 21ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ ಹಾಗೂ ಮಧ್ಯಾಹ್ನ 2.30 ರಿಂದ 3.50ರವರೆಗೆ ರಾಸಾಯನಶಾಸ್ತ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 5,076 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಕೆ.ಆರ್.ಪೇಟೆಯಲ್ಲಿ 2 ಹಾಗೂ ಮಂಡ್ಯದ 10 ಸೇರಿದಂತೆ ಒಟ್ಟು 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಗೃಹ ಹಾಗೂ ಇತರ ಅಗತ್ಯ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಎ/ಬಿ ದರ್ಜೆಯ ಅಧಿಕಾರಿಗಳು ಹಾಗೂ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ವಿಶೇಷ ತಂಡವನ್ನು ನೇಮಕ ಮಾಡಲಾಗಿದೆ. ಜತೆಗೆ 4 ಜನ ಮಾರ್ಗಾಧಿಕಾರಿ, ನಿರೀಕ್ಷಣಾ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಎಲ್ಲ ಪರೀಕ್ಷಾ ಕಾರ್ಯಗಳು ಸುಗಮವಾಗಿ ನಡೆಯಲು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಉಪಮುಖ್ಯ ಅಧೀಕ್ಷಕರು, ಪ್ರಶ್ನೆಪತ್ರಿಕೆ ಪಾಲಕರು ಹಾಗೂ ಇಬ್ಬರು ಜಾಗೃತದಳ ಸದಸ್ಯರನ್ನು ನೇಮಕ ಮಾಡಲಾಗಿದೆ. ಕೊಠಡಿ ಮೇಲ್ವಿಚಾರಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮೊಬೈಲ್ ಫೋನ್, ಕ್ಯಾಲ್ಕೂಲೇಟರ್, ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಕೇಂದ್ರಗಳ ಸುತ್ತಲೂ 200 ಮೀ. ಸುತ್ತಳತೆಯಲ್ಲಿ 144 ನೇ ಕಲಂ ಜಾರಿಗೊಳಿಸಿ ಜೆರಾಕ್ಸ್, ಕಂಪ್ಯೂಟರ್ ಹಾಗೂ ಸೈಬರ್ ಅಂಗಡಿಗಳನ್ನು ಮುಚ್ಚಿಸಲು ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್. ನಾಗರಾಜು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ. ಜವರೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಉಮೇಶ್ ಇತರರಿದ್ದರು.