ಜಿಲ್ಲೆ

ಜಯಂತಿ ಆಚರಣೆಗೆ ಅಧಿಕಾರಿಗಳ ಹಾಜರಾತಿ ಕಡ್ಡಾಯ: ಜಿಲ್ಲಾಧಿಕಾರಿ ಡಾ.ಕುಮಾರ ಕಟ್ಟುನಿಟ್ಟಿನ ಸೂಚನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಜಿಲ್ಲೆಯಲ್ಲಿ ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಏ.5ರಂದು ಡಾ.ಬಾಬು ಜಗಜೀವನ್ ರಾಂ ಜಯಂತಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು. ಈ ಎರಡು ಜಯಂತಿಗಳಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು. ಚುನಾವಣಾ ಕೆಲಸಕ್ಕೆ ಮಾತ್ರ ವಿನಾಯಿತಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಬ್ಬರು ಮಹನೀಯರು ಸಮಾಜಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸಬೇಕು. ಮಾತ್ರವಲ್ಲದೆ ಇಬ್ಬರ ತತ್ವ ಹಾಗೂ ಆದರ್ಶಗಳು ಪ್ರತಿಯೊಬ್ಬರಿಗೂ ದಾರಿದೀಪವಾಗಿದ್ದು, ಅವರ ಚಿಂತನೆಗಳನ್ನು ಎಲ್ಲರಿಗೂ ತಿಳಿಸಬೇಕು ಎಂದರು.

5ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿರುವ ಬಾಬೂ ಜಗಜೀವನ್ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ವೇದಿಕೆ ಕಾರ್ಯಕ್ರಮವನ್ನು ಜಿಪಂ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗುವುದು. 14 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಕಾವೇರಿ ಉದ್ಯಾನದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅದೇ ಸ್ಥಳದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು. ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಉಪನ್ಯಾಸ ನೀಡಲಿದ್ದಾರೆ ಎಂದು ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್ ಹಾಗೂ ವಿವಿಧ ಮುಖಂಡರು ಇದ್ದರು.