ಜಿಲ್ಲೆ

ಜಿಲ್ಲೆಯಲ್ಲಿ ಮಿತಿ ಮೀರಿದ ಬಿಸಿಲ ತಾಪಮಾನ: ಸಾರ್ವಜನಿಕರಿಗೆ ಸಲಹೆ ಕೊಟ್ಟ ಜಿಲ್ಲಾಧಿಕಾರಿ ಡಾ.ಕುಮಾರ…!

ಕೆ.ಎನ್.ರಾಘವೇಂದ್ರ

ಮಂಡ್ಯ: ಜಿಲ್ಲೆಯಲ್ಲಿ ತೀವ್ರ ಶಾಖದ ಅಲೆ /ಅತಿಯಾದ ಉಷ್ಣಾಂಶದಿಂದಾಗಿ ವಿವಿಧ ರೀತಿಯ ಅನಾರೋಗ್ಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆ ಇದ್ದು, ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಅತಿಯಾದ ಉಷ್ಣಾಂಶದಿಂದ ಸಂಭವಿಸಬಹುದಾದ ಅನಾರೋಗ್ಯ ಪರಿಸ್ಥಿತಿಗಳನ್ನು ತಡೆಗಟ್ಟುವಿಕೆಯ ನಿಟ್ಟಿನಲ್ಲಿ ಆರೋಗ್ಯ ಸಂರಕ್ಷಣಾ ಸಲಹೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ವಿಪತ್ತು ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ಪ್ರಮಾಣದಲ್ಲಿ ಆಗಾಗ್ಗೆ ನೀರನ್ನು ಕುಡಿಯಬೇಕು. ಬಾಯಾರಿಕೆಯು ನಿರ್ಜಲೀಕರಣದ ಪ್ರಮುಖ ಲಕ್ಷಣವಾಗಿದೆ. ಪ್ರಯಾಣ ಮಾಡುವ ಸಂದರ್ಭದಲ್ಲೂ ಕುಡಿಯಲು ನೀರನ್ನು ಜತೆಗೆ ತೆಗೆದುಕೊಂಡು ಹೋಗಬೇಕು. ಪುನರ್ಜಿಲೀಕರಣ ದ್ರಾವಣ ಹಾಗೂ ಮನೆಯಲ್ಲಿಯೇ ಸಿದ್ದಪಡಿಸಿದ ಲಿಂಬು ಶರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್‌ಗಳನ್ನು ಸೇವಿಸಬೇಕು. ಈ ಋತುವಿನಲ್ಲಿ ಸಿಗುವ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಹಣ್ಣು ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಮೂಸಂಬಿ, ದ್ರಾಕ್ಷಿ, ಅನಾನಸ್, ಸೌತೆಕಾಯಿ ಹಾಗೂ ಸ್ಥಳೀಯವಾಗಿ ಸಿಗುವ ಹಣ್ಣು ತರಕಾರಿಗಳನ್ನು ಸೇವಿಸಬೇಕು. ಎಳನೀರನ್ನು ಸೇವಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕ ಸ್ಥಳಗಳಾದ ಬಸ್ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಸಾರ್ವಜನಿಕವಾಗಿ ಕಲ್ಪಿಸಿರುವ ನೀರಿನ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಖಾತ್ರಿ ಪಡಿಸಿಕೊಳ್ಳಿ. ಬಿಸಿಲಿನ ಶಾಖದಿಂದ ಮಕ್ಕಳಲ್ಲೂ ಸಾಕಷ್ಟು ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದ್ದೂ, ಮೂರ್ಛೆ ಹೋಗುವುದು, ಸ್ನಾಯು ಸೆಳೆತ, ರೋಗ ಗ್ರಸ್ತವಾಗುವಿಕೆ, ಸಿಡುಕುತನ, ತಲೆ ನೋವು, ಹೆಚ್ಚಾಗಿ ಬೆವರುವುದು, ಬಲಹೀನತೆ, ತಲೆ ತಿರುಗುವಿಕೆ, ಗೊಂದಲಮಯ ರೀತಿಯಲ್ಲಿ ವರ್ತಿಸುವುದು, ಇನ್ನಿತರ ಲಕ್ಷಣಗಳು ಕಂಡುಬರುವ ಸಾಧ್ಯತೆ ಇರುತ್ತದೆ. ಇಂತಹ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರ ಸಲಹೆ ಪಡೆದು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಎಂದು ಹೇಳಿದರು.

ಅತೀ ಹೆಚ್ಚು ತಾಪಮಾನಕ್ಕೆ ತುತ್ತಾಗುವಂತಹ ಹಳ್ಳಿಗಳನ್ನು ಗುರುತಿಸಿ ಮತ್ತು ಕುಡಿಯುವ ನೀರಿನ ಸೌಲಭ್ಯಗಳ ಲಭ್ಯತೆಯನ್ನು ಖಚಿತ ಪಡಿಸಿಕೊಳ್ಳಿ. ಅತೀ ಹೆಚ್ಚು ತಾಪಮಾನದ ಪ್ರತಿಕೂಲ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅತೀ ಹೆಚ್ಚು ತಾಪಮಾನದ ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿ. ರಾಜ್ಯದಲ್ಲಿ ಅತೀ ಹೆಚ್ಚು ತಾಪಮಾನದ ಪರಿಸ್ಥಿತಿಗಳ ಬಗ್ಗೆ ಪ್ರವಾಸಿಗರಿಗೆ ಸಲಹೆಗಳನ್ನು ಪ್ರಚಾರ ಮಾಡುವುದು. ಧಾರ್ಮಿಕ ಸ್ಥಳಗಳಲ್ಲಿ ಯಾತ್ರಾರ್ಥಿಗಳಿಗೆ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ತಾತ್ಕಾಲಿಕ ನೆರಳಿನ ಪ್ರದೇಶಗಳನ್ನು ನಿರ್ಮಿಸಬೇಕು ಎಂದರು.

ಬಿಸಿಲಿನ ಸಮಯದಲ್ಲಿ ಅದರಲ್ಲೂ ವಿಶೇಷವಾಗಿ ಮಧ್ಯಾಹ್ನ 12 ರಿಂದ 4 ಗಂಟೆವರೆಗೆ ಬಿಸಿಲಿಗೆ ಹೋಗುವುದನ್ನು ತಪ್ಪಿಸಬೇಕು. ಮಧ್ಯಾಹ್ನದ ಸಮಯದಲ್ಲಿ ಹೊರಾಂಗಣದಲ್ಲಿ ಶ್ರಮದಾಯಕ ಚಟುವಟಿಕೆಗಳನ್ನು ಮಾಡಬಾರದು. ಪಾದರಕ್ಷೆಗಳನ್ನು ಧರಿಸದೇ ಹೊರಗಡೆ ಹೋಗಬಾರದು. ಉತ್ತಮ ಗಾಳಿ ಪ್ರಸಾರವಾಗಿ ತಂಪಾಗಿರುವಟತೆ ಕಿಟಕಿ, ಬಾಗಿಲುಗಳನ್ನು ತೆರೆದಿಡಬೇಕು. ಮದ್ಯಪಾನ (ಆಲ್ಕೋಹಾಲ್), ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳನ್ನು ಸೇವಿಸುವುದನ್ನು ತಪ್ಪಿಸಬೇಕು. ಇವು ದೇಹವನ್ನು ನಿರ್ಜಲೀಕರಣ ಹಾಗೂ ಹೊಟ್ಟೆ ನೋವನ್ನು ಉಂಟು ಮಾಡುತ್ತವೆ. ಪ್ರಾಣಿಗಳಲ್ಲಿ ಬಿಸಿಗಾಳಿಗೆ ಸಂಬಂಧಿತ ಕಾಯಿಲೆಯ ಚಿಕಿತ್ಸೆಗೆ ನಿಯಮಾನುಸಾರ ಸಂಬಂಧಿಸಿದ ಪಶು ವೈದ್ಯಕೀಯ ಔಷಧಗಳನ್ನು ಶೇಖರಣೆ ಮಾಡಬೇಕು. ಸಾಧ್ಯವಾದಷ್ಟು ಮಟ್ಟಿಗೆ ಸಭೆ/ಸಮಾರಂಭಗಳನ್ನು ತಂಪಾದ ವಾತಾವರಣವಿರುವ ಅವಧಿಯಲ್ಲಿ (ಬೆಳಗ್ಗೆ ಅಥವಾ ಸಂಜೆ) ನಿಗದಿಪಡಿಸುವುದು ಉತ್ತಮ. ತೀವ್ರ ಬಿಸಿಲಿನ ಹಿನ್ನೆಲೆ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅಪಘಾತ ಸಂಭವವಿಸುವ ಸಾಧ್ಯತೆಗಳಿದ್ದು, ಅವುಗಳ ಬಗ್ಗೆ ಎಚ್ಚರ ವಹಿಸಿ ಎಂದು ಅರಣ್ಯ ಇಲಾಖೆ ಅಧಿಕಾರಿಗೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಮಾರ್ಚ್ ತಿಂಗಳಲ್ಲಿ ವಿಶ್ವ ಜಲ ದಿನದ ಪ್ರಯುಕ್ತ ಕೆರೆಗಳ ಹೂಳೆತ್ತುವ ಹಾಗೂ ಕೆರೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಕೆರೆಗಳು, ಕಲ್ಯಾಣಿ, ಕಾಲುವೆಗಳ ಅಭಿವೃದ್ಧಿ ಕಾಮಗಾರಿಯನ್ನು ವ್ಯವಸ್ಥಿತವಾಗಿ ನಡೆಸಿ. ಪ್ರತಿ ತಾಲೂಕುವಾರು 2 ಕೆರೆಗಳ ಅಭಿವೃದ್ಧಿ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಮಳೆಯಾಗದ ಕಾರಣ ನೀರಿನ ಸಮಸ್ಯೆಯಿದೆ. ಆದ್ದರಿಂದ ಜನ ಮತ್ತು ಜಾನುವಾರುಗಳಿಗೆ ಸಮಸ್ಯೆಯಾಗದಂತೆ ಆಯಾ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಿ. ಹಿಂದಿನ ವರ್ಷಗಳ ಮಾಹಿತಿಯ ಆಧಾರದ ಮೇಲೆ ಕುಡಿಯುವ ನೀರಿನ ಕೊರತೆ ಉಂಟಾಗುವ ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಈ ಗ್ರಾಮಗಳ ವಸ್ತುಸ್ಥಿತಿಯ ಮೇಲೆ ನಿಗಾವಹಿಸಿ. ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ ಮತ್ತು ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಗಳ ಸಭೆಗಳನ್ನು ನಿರಂತರವಾಗಿ ನಡೆಸಿ ತೊಂದರೆಗಳನ್ನು ಪರಿಹರಿಸಿ ಎಂದು ಸೂಚಿಸಿದರು.

ಸಭೆಯಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಕುಟುಂಬ ಮತ್ತು ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಡಿಎಫ್‌ಒ ರಾಜು ಇತರರಿದ್ದರು.