ಮಂಡ್ಯ: ಬಿರುಗಾಳಿ ಸಹಿತ ಜೋರು ಮಳೆ ಸುರಿದ ಪರಿಣಾಮ ನಗರದಲ್ಲಿ ಕಾರಿನ ಮೇಲೆ ಮರ ಬಿದ್ದು ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಧಿಕಾರಿಗಳೊಂದಿಗೆ ಸಭೆ ಮಾಡಿ ಮಳೆ ಹಾಗೂ ಗಾಳಿಯಿಂದ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸಂಬಂಧಿಸಿದ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಲಾಖೆಗಳು ಮುನ್ನಚ್ಚರಿಕೆ ಕ್ರಮಗಳನ್ನು ವಹಿಸದೇ ಸಣ್ಣಪುಟ್ಟ ಕಾರಣಗಳಿಂದ ಮಳೆ ಅಥವಾ ಬಿರುಗಾಳಿಯಿಂದ ಪ್ರಾಣ ಹಾನಿಯಾದಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದರ ಜತೆಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಈ ಬಾರಿ ಸಾಮಾನ್ಯ ಮಳೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜತೆ ಹೆಚ್ಚಿನ ಗಾಳಿಯು ಸಂಭವಿಸಲಿದ್ದು, ಕೂಡಲೇ ಎಲ್ಲ ಇಲಾಖೆಯವರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ದುರ್ಬಲ ಕೊಂಬೆಗಳನ್ನು ತೆರವುಗೊಳಿಸಿ ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿಗಳು ಅರಣ್ಯ ಇಲಾಖೆಯೊಂದಿಗೆ ಜಂಟಿಯಾಗಿ ಕಾರ್ಯನಿರ್ವಹಿಸಿ ಮರದ ದುರ್ಬಲ ಕೊಂಬೆಗಳನ್ನು ತೆರವುಗೊಳಿಸಿ ಎಂದರು.
ಮಳೆ ಬಂದ ಸಂದರ್ಭದಲ್ಲಿ ಮರ, ವಿದ್ಯುತ್ ಕಂಬಗಳು ಗಾಳಿಯಿಂದ ಬಿದ್ದು ಹೋದಲ್ಲಿ ಅವುಗಳನ್ನು ತಕ್ಷಣ ತೆರವುಗೊಳಿಸಲು ಇಲಾಖೆ ಸಜ್ಜಾಗಿರಬೇಕು. ಮಳೆಯ ಸಂದರ್ಭದಲ್ಲಿ ಕ್ಷಿಪ್ರವಾಗಿ ಕೆಲಸ ನಿರ್ವಹಿಸಲು ತಂಡಗಳನ್ನು ರಚಿಸಿ. ಸಾರ್ವಜನಿಕರಿಂದ ದೂರು ಬಾರದಂತೆ ಕೆಲಸನಿರ್ವಹಿಸಿ. ತಾಲೂಕು ಕಚೇರಿ, ತಾಪಂ ಕಚೇರಿ, ನಗರ ಸ್ಥಳೀಯ ಸಂಸ್ಥೆ, ಚೆಸ್ಕಾಂ, ಅರಣ್ಯ ಇಲಾಖೆಗಳಲ್ಲಿ 2 ದಿನದೊಳಗಾಗಿ ಕಂಟ್ರೋಲ್ ರೂಂ ತೆರೆದು ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳ ವಿವರವನ್ನು ಮಾಹಿತಿಗಾಗಿ ಅನಾವರಣಗೊಳಿಸಬೇಕು ಎಂದರು.
ಒಳಚರಂಡಿಗಳ ಕಸ ಹಾಗೂ ಇನ್ನಿತರೆ ವಸ್ತುಗಳು ಸೇರಿಕೊಂಡು ಮಳೆ ನೀರು ಹರಿಯುವಿಕೆಗೆ ತೊಂದರೆಯಾಗುತ್ತದೆ. ಒಳಚರಂಡಿಯಲ್ಲಿರುವ ಕಸವನ್ನು ತೆರವುಗೊಳಿಸಿ. ಮಳೆ ಹಾಗೂ ಬಿರುಗಾಳಿಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮರಗಳ ಕೆಳಗಡೆ ವಾಹನಗಳ ನಿಲುಗಡೆ ಮಾಡದಂತೆ ಹಾಗೂ ಇನ್ನಿತರೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ. ಈ ಹಿಂದಿನ ವರ್ಷದಲ್ಲಿ ಮಳೆಯಿಂದ ಮುಳುಗಡೆ ಅಥವಾ ತೊಂದರೆಯಾದ ಗ್ರಾಮಗಳನ್ನು ಪಟ್ಟಿ ಮಾಡಿಕೊಂಡು ಸಿದ್ಧತೆಗಳನ್ನು ಮಾಡಿಕೊಳ್ಳಿ. ನುರಿತ ಈಜುಗಾರರು, ಜೆಸಿಬಿ, ಹಿಟ್ಯಾಚಿ ಮಾಲೀಕರ ಸಂಪರ್ಕ ಸಂಖ್ಯೆಗಳನ್ನು ಸಂಗ್ರಹಿಸಿಟ್ಟಿಕೊಳ್ಳಿ ಎಂದು ಹೇಳಿದರು.
ಮಳೆಯಿಂದ ಮನೆ ಅಥವಾ ಬೆಳೆ ಹಾನಿಯಾದಲ್ಲಿ ತಕ್ಷಣ ಪರಿಶೀಲಿಸಿ ತಹಸೀಲ್ದಾರ್ ಜಿಲ್ಲಾಧಿಕಾರಿ ಕಚೇರಿಗೆ ವರದಿ ಸಲ್ಲಿಸಬೇಕು. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮಳೆ ನೀರು ನಿಂತಲ್ಲಿ ತೆರವುಗೊಳಿಸಲು ತಂಡಗಳನ್ನು ರಚಿಸಿ ದಿನದ 24 ಗಂಟೆ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ವಿದ್ಯುತ್ ಕಂಬಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಿ ವರದಿ ನೀಡಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಈ ಹಿಂದೆ ಮಳೆಯಾದ ಸಂದರ್ಭದಲ್ಲಿ ನಾಗಮಂಗಲ ಬಸ್ ನಿಲ್ದಾಣದಲ್ಲಿ ನೀರು ತುಂಬಿಕೊಂಡು ತೊಂದರೆಯಾಗಿತ್ತು. ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಿ. ಕೆರೆಗಳಲ್ಲಿ ಹೂಳು ತೆಗೆಯುವ ಕೆಲಸ ವ್ಯವಸ್ಥಿತವಾಗಿ ನಡೆಯಲಿ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಪಾಂಡವಪುರ ಉಪವಿಭಾಗಾಧಿಕಾರಿ ಮಾರುತಿ, ಚೆಸ್ಕಾಂ ಅಧೀಕ್ಷಕ ಇಂಜಿನಿಯರ್ ಸೋಮಶೇಖರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಕೃಷ್ಣಕುಮಾರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ ಇತರರಿದ್ದರು.