ನಾಗಮಂಗಲ: ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ರಾಮೇನಹಳ್ಳಿ ಗ್ರಾಮಸ್ಥರು ಆಗ್ರಹಿಸಿದರು.
ತಾಲೂಕಿನ ದೇವಲಾಪುರ ಹೋಬಳಿ ರಾಮೇನಹಳ್ಳಿಯಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟದಿಂದಾಗುತ್ತಿರುವ ತೊಂದರೆಗಳ ಕುರಿತು ತಹಸೀಲ್ದಾರ್ ಗಮನಕ್ಕೆ ತರುವ ಮೂಲಕ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಅಂಗಡಿ ಹಾಗೂ ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಈ ಬಗ್ಗೆ ಅಬಕಾರಿ ಇಲಾಖೆ ಯಾವುದೇ ಕ್ರಮವಹಿಸಿಲ್ಲ. ಯುವಕರು ದಾರಿ ತಪ್ಪುತ್ತಿದ್ದು, ಕೌಟುಂಬಿಕ ಕಲಹಗಳಿಂದ ಕುಟುಂಬಗಳು ಬೀದಿಗೆ ಬರುತ್ತಿವೆ. ಕೂಡಲೇ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ದೇವರಮಲ್ಲನಾಯಕನಹಳ್ಳಿ ಗ್ರಾಪಂ ಅಧ್ಯಕ್ಷ ನಿತೀಶ್ ಮಾತನಾಡಿ, ರಾಮೇನಹಳ್ಳಿ ಹಾಗೂ ತೂಬಿನಕೆರೆಯಲ್ಲಿ ಮಾತ್ರವಲ್ಲ. ನಮ್ಮ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಎಲ್ಲ ಗ್ರಾಮಗಳಲ್ಲಿಯೂ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಧ್ವನಿಗೂಡಿಸಿದರು.
ಇದಕ್ಕೆ ಸ್ಪಂದಿಸಿದ ತಹಸೀಲ್ದಾರ್ ನಂದೀಶ್, ಈ ಬಗ್ಗೆ ಕ್ರಮ ವಹಿಸುವಂತೆ ಅಬಕಾರಿ ನಿರೀಕ್ಷಕ ಚಂದ್ರಶೇಖರ್ ಅವರಿಗೆ ಸೂಚಿಸಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು, ಅಬಕಾರಿ ಇಲಾಖೆಯವರ ಸಹಕಾರದಿಂದಲೇ ಮದ್ಯ ಅಕ್ರಮ ಮಾರಾಟ ನಡೆಯುತ್ತಿದ್ದು, ನಮಗೆ ನ್ಯಾಯ ಸಿಗುವುದಿಲ್ಲ ಎಂದು ಹೇಳಿದರು.
ತೂಬಿನಕೆರೆಯಲ್ಲಿ ಗ್ರಾಮಠಾಣಾ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದು, ಕೂಡಲೇ ತೆರವುಗೊಳಿಸಿ ಸರ್ಕಾರಿ ಜಾಗವನ್ನು ಉಳಿಸಿಕೊಡುವಂತೆ ತೂಬಿನಕೆರೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ತಾಪಂ ಇಒ ಚಂದ್ರಮೌಳಿ, ಬಿಇಒ ಸುರೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಸನ್ನ, ಎಡಿಎಲ್‌ಆರ್ ಪ್ರಮೋದ್, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಕುಮಾರ್ ಇತರರಿದ್ದರು.