ಗದಗ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಕುರಿತು ಶೇಖರಗೌಡ ರಾಮತ್ನಾಳ ನೇತೃತ್ವದಲ್ಲಿ ಸಭೆ ಜರುಗಿತು. ವೈಶಾಲಿ ಎಂ.ಎಲ್​, ಕೆ. ಗುರುಪ್ರಸಾದ, ಪರಶುರಾಮ ಶೆಟ್ಟಪ್ಪನವರ, ರಾಧಾ ಮಣ್ಣೂರು ಇತರರು ಇದ್ದರು. 
ಜಿಲ್ಲೆ

ಮಕ್ಕಳ ರಕ್ಷಣಾ ಸಮಿತಿಗಳು ದಕ್ಷವಾಗಿರಬೇಕು: ಶೇಖರಗೌಡ ರಾಮತ್ನಾಳ

Gadag - Shivanand Hiremath

ವಿಜಯವಾಣಿ ಸುದ್ದಿಜಾಲ ಗದಗ
ಗದಗ: ತಾಲ್ಲೂಕು ಹಾಗೂ ಗ್ರಾಮ  ಮಟ್ಟದ ಮಕ್ಕಳ ರಕ್ಷಣಾ ಸಮಿತಿಗಳು  ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದಲ್ಲಿ ಮತ್ತು ಬಾಲಕಾರ್ಮಿಕ, ಭಿಕ್ಷಾಟನೆ, ಪೊಕ್ಸೋದಂತಹ ಪ್ರಕರಣಗಳಲ್ಲಿ ತಹಶೀಲ್ದಾರರು ತುರ್ತು ಕ್ರಮ ವಹಿಸಬೇಕೆಂದು  ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರದಂದು ಮಕ್ಕಳ ಹಕ್ಕುಗಳ ಗ್ರಾಮಸಭೆ ಕುರಿತು ತಹಶೀಲ್ದಾರರು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಸರ್ಕಾರಿ ಸೌಲಭ್ಯವನ್ನು ಪಡೆಯುತ್ತಿರುವ ಫಲಾನುಭವಿಗಳ ಕುಟುಂಬದವರಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕತೆ, ಪೊಕ್ಸೋ ಮತ್ತು ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳತ್ತೇನೆ ಎಂದು ಫಲಾನುಭವಿಗಳಿಂದ ಬದ್ದತಾ ಪ್ರಮಾಣ ಪತ್ರವನ್ನು  ತೆಗೆದುಕೊಳ್ಳುವಂತೆ  ಅವರು ಸೂಚಿಸಿದರು.

ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ನಿಯಮಿತವಾಗಿ ಭೇಟಿ ನೀಡಬೇಕು. ಶಿಕ್ಷಣ ಇಲಾಖೆಯಿಂದ ಪ್ರತಿ ಶಾಲಾ ಕಟ್ಟಡಗಳ ಹಾಗೂ ಕಂಪೌಂಡ ಮೇಲೆ ಮಕ್ಕಳ ಸಹಾಯವಾಣಿ 1098 ಸಂಖ್ಯೆಯನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ, ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಕ್ಲಬ್ ಹಾಗೂ ಪ್ರಹಾರಿ ಕ್ಲಬ್ ರಚಿಸುವಂತೆ. ಕಡ್ಡಾಯವಾಗಿ ಪ್ರತಿ ಶಾಲೆಯಲ್ಲಿ ಸಲಹಾ ಪೆಟ್ಟಿಗೆ ಇಡುವಂತೆ ಹಾಗೂ ದೂರು ಸಲ್ಲಿಸುವ ಮಕ್ಕಳ ಹೆಸರನ್ನು ಬಹಿರಂಗಪಡಿಸದೇ, ಮಕ್ಕಳಿಗಾಗುವ ಶೋಷಣೆ ಹಾಗೂ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ಸಾಮಾಜಿಕ ಕಳಕಳಿಯಿಂದ ಶಾಲಾ ಶಿಕ್ಷಕರು ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ತಹಶೀಲ್ದಾರರು ಸಲಹಾ ಪೆಟ್ಟಿಗೆಯಲ್ಲಿನ ಪತ್ರಗಳನ್ನು ಪರಿಶೀಲಿಸಬೇಕು. ಬಾಲನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ ಸಂಪೂರ್ಣವಾಗಿ ಸದ್ಬಳಕೆಯಾಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.ಪ್ರತಿ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಹಾಗೂ ಅದಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯನ್ನು ಕಡ್ಡಾಯವಾಗಿ ಆಯೋಜಿಸಬೇಕು. ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಯಶಸ್ವಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಶೇಖರಗೌಡ ರಾಮತ್ನಾಳ ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರಶುರಾಮ ಶೆಟ್ಟಪ್ಪನವರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ರಾಧಾ  ಮಣ್ಣೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಗದಗ ಮತ್ತು ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.