ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ 10 ರಂದು ನಡೆಯುವ ಮತದಾನ ದಿನದಲ್ಲಿ ಜಿಲ್ಲೆಯ ಗರಿಷ್ಠ ಪ್ರಮಾಣದಲ್ಲಿ ಮತದಾನ ದಾಖಲಾಗುವಂತೆ ಶ್ರಮಿಸಲಾಗುತ್ತಿದ್ದು, ಮತದಾನ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಲು ಸಹಕಾರಿಯಾಗುವಂತೆ ಮೇ 10 ಮತ ಒತ್ತು ಎಂಬ ಧ್ಯೇಯವಾಕ್ಯವನ್ನು ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ತಿಳಿಸಿದರು.
ಭಾನುವಾರ ಅಜ್ಜರಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರಿಗೆ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸಲು ನಡೆದ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಮತದಾರರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಮತದಾನ ಮಾಡಬೇಕಾದ ಮತಗಟ್ಟೆಯ ವಿಳಾಸವನ್ನು ಮೊದಲೇ ತಿಳಿದುಕೊಳ್ಳುವುದರಿಂದ ಮತದಾನ ದಿನದಂದು ಮತಗಟ್ಟೆ ಕುರಿತ ಯಾವುದೇ ಗೊಂದಲಗಳಿಗೆ ಒಳಗಾಗದೇ ಸುಲಭವಾಗಿ ಮತದಾನ ಮಾಡಲು ಸಾಧ್ಯವಿದೆ. ಈ ಮಾಹಿತಿಯನ್ನು ಚುನಾವಣಾ ಆಯೋಗದ ವೋಟರ್ ಹೆಲ್ಪ್‌ಲೈನ್ ಆಪ್ ಮೂಲಕ ಅಥವಾ ಉಚಿತ ಸಹಾಯವಾಣಿ ಸಂಖ್ಯೆ 1950 ಕರೆ ಮಾಡಿ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಡೆದ ಮತದಾನ ಪ್ರಮಾಣಕ್ಕಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯುವಂತೆ ಮಾಡಲು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜಿಲ್ಲೆಯ ಕಾಲೇಜುಗಳಲ್ಲಿನ 18 ವರ್ಷ ಮೇಲ್ಪಟ್ಟ ಎಲ್ಲಾ ಯುವ ಜನತೆಯ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಲಾಗಿದೆ. ಯುವ ಜನತೆ ಸಂವಿಧಾನ ತಮಗೆ ನೀಡಿರುವ ಮತದಾನದ ಹಕ್ಕನ್ನು ಯಾವುದೇ ಆಮಿಷಗಳಿಗೆ ಬಲಿಯಾಗದೇ, ಸೂಕ್ತ ರೀತಿಯಲ್ಲಿ ಚಲಾಯಿಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಡಯಟ್‌ನ ಪ್ರಾಂಶುಪಾಲ ಗೋವಿಂದ ಮಡಿವಾಳ, ಉಪ ಪ್ರಾಂಶುಪಾಲ ಡಾ.ಅಶೋಕ್ ಕಾಮತ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ, ಉಡುಪಿ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ವಿಜಯಾ ಮೊದಲಾದವರು ಉಪಸ್ಥಿತರಿದ್ದರು.