ಜಿಲ್ಲೆ

ಜಿಲ್ಲೆಗೆ ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್

ಹಾವೇರಿ: ನನ್ನ ಅವಧಿಯಲ್ಲಿಯೇ ಜಿಲ್ಲೆಯಲ್ಲಿ ಮೆಗಾ ಡೈರಿ ಸ್ಥಾಪನೆ ಮಾಡಲಾಗುವುದು. ಪ್ರತ್ಯೇಕ ಡಿಸಿಸಿ ಬ್ಯಾಂಕ್, ಹಾಲು ಒಕ್ಕೂಟ ಸ್ಥಾಪನೆಗೂ ಈಗಾಗಲೇ ಹಲವು ಸಭೆಗಳನ್ನು ನಡೆಸಲಾಗಿದ್ದು, ಸಚಿವ ಸಂಪುಟದಲ್ಲಿ ರ್ಚಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ ಭರವಸೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಆಶಾ ಕಾರ್ಯಕರ್ತರಿಗೆ 3 ಸಾವಿರ ರೂ.ಗಳ ಪ್ರೋತ್ಸಾಹಧನದ ಚೆಕ್ ವಿತರಿಸಿ ಅವರು ಮಾತನಾಡಿದರು.

ಕೆಸಿಸಿ ಬ್ಯಾಂಕ್ ಪ್ರತ್ಯೇಕಿಸಿ ಹಾವೇರಿಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಹಾಗೂ ಹಾಲು ಒಕ್ಕೂಟ ಸ್ಥಾಪಿಸುವ ಕುರಿತಂತೆ ಈಗಾಗಲೇ ಎರಡು ಸಭೆಗಳನ್ನು ನಡೆಸಲಾಗಿದೆ. ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಹಣಕಾಸು ವ್ಯವಸ್ಥೆ, ಜಮೀನಿನ ಲಭ್ಯತೆ ಸೇರಿ ಮೂರ್ನಾಲ್ಕು ಸಲಹೆಗಳನ್ನು ಕೇಳಿದ್ದಾರೆ. ಜುಲೈ 2ರಂದು ಮತ್ತೊಂದು ಸಭೆ ನಡೆಸಿ, ಸಚಿವ ಸಂಪುಟದ ಸಭೆಯ ಮುಂದೆ ತಂದು ಬ್ಯಾಂಕ್ ಸ್ಥಾಪನೆಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲಾಗುವುದು. ಮೆಗಾ ಡೈರಿ, ಡಿಸಿಸಿ ಬ್ಯಾಂಕ್, ಹಾಲು ಒಕ್ಕೂಟ ಸ್ಥಾಪನೆ ಪ್ರಸ್ತಾವನೆಯನ್ನು ಸಚಿವ ಬಸವರಾಜ ಬೊಮ್ಮಾಯಿ ಪ್ರಸ್ತಾಪಿಸಿದ್ದಾರೆ. ಈ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಶೂನ್ಯ ಬಡ್ಡಿ ಸಾಲ: ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯವಾಗಿದೆ. ಕರೊನಾ ಸಮಯದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಇವರ ಸೇವೆ ಗುರುತಿಸಿ ಸಹಕಾರಿ ಇಲಾಖೆಯಿಂದ 41,500 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ನಂತೆ 12.75 ಕೋಟಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಈಗಾಗಲೇ 18 ಜಿಲ್ಲೆಯ 14 ಸಾವಿರ ಆಶಾ ಕಾರ್ಯಕರ್ತೆಯರಿಗೆ 4 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ಬಲ ನೀಡುವ ನಿಟ್ಟಿನಲ್ಲಿ ಮುಂದಿನ ದಿನದಲ್ಲಿ ಸ್ತ್ರೀ ಶಕ್ತಿ ಗುಂಪುಗಳ ಮಾದರಿಯಲ್ಲಿ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರದೊಂದಿಗೆ ರ್ಚಚಿಸಿ ನಿರ್ಧರಿಸಲಾಗುವುದು ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಇಲಾಖೆಯು ಕೋವಿಡ್ ನಿಯಂತ್ರಣದಲ್ಲಿ ಸಮರ್ಥವಾಗಿ ಕೆಲಸ ಮಾಡಿದೆ. ಪಾದರಾಯನಪುರ ಘಟನೆ, ಲಾಕ್​ಡೌನ್ ಸಂದರ್ಭ, ಮೈಸೂರಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಸಂದರ್ಭಗಳು, ಎಪಿಎಂಸಿಗಳಲ್ಲಿ ರೈತರ ಉತ್ಪನ್ನಗಳ ಮಾರಾಟಕ್ಕೆ ವ್ಯವಸ್ಥೆ ಮಾಡಿದ್ದಾರೆ. ಕೃಷಿ ಸಚಿವ ಬಿ.ಸಿ. ಪಾಟೀಲರು ನೂರು ದಿನದಲ್ಲಿ 30 ಜಿಲ್ಲೆಗಳ ಪ್ರವಾಸ ಕೈಗೊಂಡು ರೈತರ ಸಮಸ್ಯೆಗಳಿಗೆ ಸಮರ್ಥವಾಗಿ ಸ್ಪಂದಿಸಿದ್ದಾರೆ ಎಂದರು.

ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ, ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ಜಿಪಂ ಅಧ್ಯಕ್ಷ ಬಸನಗೌಡ ದೇಸಾಯಿ, ಶಾಸಕರಾದ ನೆಹರು ಓಲೇಕಾರ, ಅರುಣಕುಮಾರ ಪೂಜಾರ, ಜಿಪಂ ಸದಸ್ಯ ವಿರೂಪಾಕ್ಷಪ್ಪ ಕಡ್ಲಿ, ತಾಪಂ ಅಧ್ಯಕ್ಷೆ ಕಮಲವ್ವ ಹೇಮನಗೌಡ್ರ, ಸದಸ್ಯ ಸತೀಶ ಸಂದಿಮನಿ, ಕೆಸಿಸಿ ಬ್ಯಾಂಕ್ ಅಧ್ಯಕ್ಷ ಬಾಪುಗೌಡ ಪಾಟೀಲ, ಜಿಲ್ಲಾಧಿಕಾರಿ ಕೃಷ್ಣ ಬಾಜಪೈ, ಎಸ್​ಪಿ ಕೆ.ಜಿ. ದೇವರಾಜ್, ಜಿಪಂ ಸಿಇಒ ರಮೇಶ ದೇಸಾಯಿ, ಸಹಕಾರಿ ಸಂಘಗಳ ಸಂಯುಕ್ತ ಉಪನಿಬಂಧಕ ಜಿ.ಎಂ. ಪಾಟೀಲ ಇತರರಿದ್ದರು.