ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ‘ನಮ್ಮ ಕ್ಲಿನಿಕ್’ ಯೋಜನೆ ಅನುಷ್ಠಾನಕ್ಕೆ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್, ನವೆಂಬರ್‌ನಲ್ಲಿ ನಮ್ಮ ಕ್ಲಿನಿಕ್ ತೆರೆಯಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಯ ಮೈಸೂರು ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ವಿಭಾಗ ಮಟ್ಟದಲ್ಲಿ ನಮ್ಮ ಕ್ಲಿನಿಕ್ ಪ್ರಗತಿ ತೃಪ್ತಿಕರವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೈಸೂರು ವಿಭಾಗದ 8 ಜಿಲ್ಲೆಗಳಲ್ಲಿ 43 ನಮ್ಮ ಕ್ಲಿನಿಕ್ ತೆರೆಯಲು ಚಿಂತನೆ ನಡೆಸಲಾಗಿದೆ. ಆದರೆ, ಈ ಪೈಕಿ ಮೈಸೂರು ಮತ್ತು ಕೊಡಗಿನಲ್ಲಿ ಮಾತ್ರ ತಲಾ ಒಂದು ಕ್ಲಿನಿಕ್ ಉದ್ಘಾಟನೆಗೆ ಸಿದ್ಧವಾಗಿದೆ. ಉಳಿದ ಜಿಲ್ಲೆಗಳು ಪ್ರಗತಿ ಸಾಧಿಸಿಲ್ಲ. ನಮ್ಮ ಕ್ಲಿನಿಕ್ ಉದ್ಘಾಟನೆಯನ್ನು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಹಾಗಾಗಿ ಎಲ್ಲ ಜಿಲ್ಲೆಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭಕ್ಕೆ ಕೂಡಲೇ ಸಿದ್ಧತೆ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಆಯುಕ್ತ ಡಿ.ರಂದೀಪ್, ಎನ್‌ಎಚ್‌ಎಂ ಅಭಿಯಾನ ನಿರ್ದೇಶಕಿ ಡಾ.ಆರುಂಧತಿ ಚಂದ್ರಶೇಖರ್, ನಿರ್ದೇಶಕಿ ಡಾ.ಇಂದುಮತಿ, ವಿಭಾಗೀಯ ಸಹ ನಿರ್ದೇಶಕಿ ಡಾ.ರಾಜೇಶ್ವರಿದೇವಿ, ವಿಭಾಗೀಯ ಜಂಟಿ ನಿರ್ದೇಶಕಿ ಡಾ.ರಾಜೇಶ್ವರಿ ಹಾಗೂ ಇತರರು ಇದ್ದರು.