ಮೂಡಿಗೆರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆ ನಡೆಸಿದಂತೆ ಮಂಡ್ಯ ಜಿಲ್ಲೆಯಲ್ಲೂ ಗಲಭೆ ನಡೆಸಲು ಬಿಜೆಪಿ ಹಾಗೂ ಸಂಘ ಪರಿವಾರದವರು ಹುನ್ನಾರ ನಡೆಸಿದ್ದು, ಅವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ.ಎಸ್.ಅನಂತ್ ಒತ್ತಾಯಿಸಿದರು.
ಬಿಜೆಪಿಯ ಸಿ.ಟಿ.ರವಿ, ಬಸನಗೌಡ ಪಾಟೀಲ್ ಯತ್ನಾಳ್, ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಸಂಘ ಪರಿವಾರದ ಮುಖಂಡರು ಬೇಕಾಬಿಟ್ಟಿ ಹೇಳಿಕೆ ನೀಡಿ ಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಾಟೆಯನ್ನು ಮುಂದಿಟ್ಟುಕೊಂಡು ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಕೋಮುಗಲಭೆ ಸೃಷ್ಟಿಸಲು ಸಂಚು ನಡೆಸಿದ್ದಾರೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದರು.
ಶಾಂತಿ, ಸಾಮರಸ್ಯಕ್ಕೆ ಹೆಸರಾಗಿರುವ ಮಂಡ್ಯ ಜಿಲ್ಲೆಯ ಜನತೆ ಬಿಜೆಪಿ ಮತ್ತು ಸಂಘ-ಪರಿವಾರದ ಕುತಂತ್ರಗಳಿಗೆ ಮನ್ನಣೆ ನೀಡುವುದಿಲ್ಲ. ಮಂಡ್ಯ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಹದಗೆಡಿಸಲು ಮುಂದಾಗಿರುವ ಸಂಘ ಪರಿವಾರ ಮತ್ತು ಬಿಜೆಪಿಯ ಈ ತಂಡದ ಮುಖಂಡರನ್ನು ಪೊಲೀಸರು ಬಂಧಿಸುವ ಮೂಲಕ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋಮುವಾದಿ ಹೇಳಿಕೆಗಳನ್ನು ನೀಡುವ ಮೂಲಕ 4 ಅವಧಿ ಶಾಸಕರಾಗಿದ್ದರು. ಅವರನ್ನು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನತೆ ಸೋಲಿಸಿ ಮನೆಗೆ ಕಳುಹಿಸಿದ್ದಾರೆ. ಸೋತ ಬಳಿಕ ಜಿಲ್ಲೆಯಲ್ಲಿ ಕೋಮುಗಲಭೆ ಸೃಷ್ಟಿಸಲು ಜನತೆ ಅವಕಾಶ ನೀಡದ ಪರಿಣಾಮ ಸಿ.ಟಿ.ರವಿಗೆ ಕೆಲಸ ಇಲ್ಲದಂತಾಗಿದೆ. ಸದ್ಯ ಅವರು ಮಂಡ್ಯದಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳಲು ಹೋಗಿದ್ದರಿಂದ ಅಲ್ಲಿನ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಬಿಜೆಪಿ ಮತ್ತು ಸಂಘ ಪರಿವಾರದ ಕೋಮು ಕ್ರಿಮಿಗಳಿಗೆ ಮಂಡ್ಯದ ಜನತೆ ಪಾಠ ಕಲಿಸಬೇಕು. ಮತ್ತೆ ಯಾವತ್ತೂ ಕೂಡ ಮಂಡ್ಯದತ್ತ ತಲೆ ಹಾಕದಂತೆ ಮಾಡಬೇಕು ಎಂದು ಆಗ್ರಹಿಸಿದರು.