ಜಿಲ್ಲೆ

ಮೇಕೆದಾಟು ಜಲಾಶಯ ನಿರ್ಮಿಸಲು ಕ್ರಮಕ್ಕೆ ಆಗ್ರಹ: ಕೇಂದ್ರ ಸಚಿವ ವಿ.ಸೋಮಣ್ಣಗೆ ರೈತರ ಮನವಿ

ಮೈಸೂರು: ಕಾವೇರಿ ನದಿಯ ಹೆಚ್ಚುವರಿ ನೀರು ಬಳಸಿಕೊಳ್ಳಲು ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಶುಕ್ರವಾರ ನಗರಕ್ಕೆ ಭೇಟಿ ನೀಡಿದ್ದ ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.


ಕರ್ನಾಟಕದ ಜೀವನದಿ ಕಾವೇರಿ ಹೆಚ್ಚುವರಿ ನೀರು ಸಮುದ್ರಕ್ಕೆ ಹರಿದು ಹೋಗುತ್ತಿದೆ. ಈ ನೀರನ್ನು ಬಳಸಿಕೊಳ್ಳಲು ಮೇಕೆದಾಟು ಜಲಾಶಯ ನಿರ್ಮಾಣ ಮಾಡಬೇಕು. ಈ ಹಿನ್ನೆಲೆಯಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ರೈತರು ಆಗ್ರಹಿಸಿದರು.


ಕರ್ನಾಟಕದ ಕಾವೇರಿ ಅಚ್ಚುಕಟ್ಟು ಭಾಗದ ರೈತರ ಹಾಗೂ ಬೆಂಗಳೂರು ನಗರದ ಜನರ ಕುಡಿಯುವ ನೀರಿನ ಹಿತದೃಷ್ಟಿಯಿಂದ ಇದು ಪ್ರಮುಖ ಯೋಜನೆಯಾಗಿದೆ ಎಂದು ತಿಳಿಸಿದರು.


ಬೆಂಗಳೂರು, ಚಾಮರಾಜನಗರ, ಕನಕಪುರ ಮಾರ್ಗವಾಗಿ ರೈಲು ಮಾರ್ಗ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕಬ್ಬಿನ ಎಫ್‌ಆರ್‌ಪಿ ದರವನ್ನು ರೈತರ ಹೊಲದಲ್ಲಿನ ದರ ಎಂದು ನಿಗದಿ ಮಾಡಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಎಲ್ಲ ಬೇಡಿಕೆಗಳ ಕುರಿತು ರಾಜ್ಯದ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋರಿದರು.


ಸಂಘಟನೆಯ ಮುಖಂಡರಾದ ಅತ್ತಹಳ್ಳಿ ದೇವರಾಜ್, ಮಾರ್ಬಳ್ಳಿ ನೀಲಕಂಠಪ್ಪ, ಲಕ್ಷ್ಮೀಪುರ ವೆಂಕಟೇಶ್, ದೇವನೂರು ಮಹಾದೇವಪ್ಪ, ಅಂಬಳೆ ಮಂಜುನಾತ್, ಬನ್ನೂರು ಸೂರಿ ಸೇರಿದಂತೆ ಇನ್ನಿತರರಿದ್ದರು.