ಬೆಳಗಾವಿ: ಸರ್ಕಾರ ಒಳ ಮೀಸಲಾತಿ ಹೆಸರಿನಲ್ಲಿ ಕಾಲಹರಣ ಮಾಡದೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಮುಂದಾಗಬೇಕೆಂದು ಒತ್ತಾಯಿಸಿ ಗುರುವಾರ ಜಿಲ್ಲಾ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕೆಲ ಹೊತ್ತು ವಾಹನ ಸಂಚಾರ ತಡೆದು ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನಿರುದ್ಯೋಗಿಗಳಾಗಿ ಕಾಲ ಹರಣ ಮಾಡುವಂತಾಗಿದೆ. ಸರ್ಕಾರ ಒಳ ಮೀಸಲಾತಿ ಹೆಸರಿನಲ್ಲಿ ಕಾಲಹರಣ ಮಾಡದೆ ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗಾಗಿ ತಕ್ಷಣ ಮುಂದಾಗಬೇಕು ಎಂದು ಒತ್ತಾಯಿಸಿದರು.
ಈ ವೇಳೆ ದಲಿತ ವಿದ್ಯಾರ್ಥಿ ಪರಿಷತನ ಜಿಲ್ಲಾಧ್ಯಕ್ಷ ಆದರ್ಶ ಘಸ್ತಿ ಮಾತನಾಡಿ, ಒಳ ಮೀಸಲಾತಿ ನೆಪ ಇಟ್ಟುಕೊಂಡು ಸರ್ಕಾರ ಸ್ಪರ್ಧಾ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗೆ ಕೂಡಲೇ ಗೆಜೆಟ್ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ‌್ಯಾಲಿ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದರು. ಬಾಲಾಜಿ ಕಾಂಬಳೆ, ಅಜಿತ್ ಮಾದರ, ಅಕ್ಷಯಕುಮಾರ ಅಜಮನಿ, ಆದರ್ಶ ಗಸ್ತಿ, ಮಹಾಂತೇಶ ಸನದಿ, ಶಿವಂ ಕಾಂಬಳೆ, ಸುದೀಪ ಐಹೊಳೆ ಇತರರಿದ್ದರು.