ಜಿಲ್ಲೆ

ವಸತಿ ಸೌಲಭ್ಯ ಕಲ್ಪಿಸಲು ಆಗ್ರಹ: ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿ ಧರಣಿ

ಕೆ.ಎನ್.ರಾಘವೇಂದ್ರ

ಮಂಡ್ಯ: ರಾಜೀವ್‌ಗಾಂಧಿ ವಸತಿ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿ ಹಾಗೂ ನಾವು ದ್ರಾವಿಡ ಕನ್ನಡಿಗರು ಸಂಘಟನೆಯಿಂದ ನಗರದಲ್ಲಿ ಧರಣಿ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆಗಳ ಕಾರ್ಯಕರ್ತರು ಹಾಗೂ ಸಂತ್ರಸ್ತರು ಕೂಡಲೇ ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಕಳೆದ ಫೆಬ್ರವರಿ ಹಾಗೂ ಮಾರ್ಚ್‌ನಲ್ಲಿ ಪ್ರತಿಭಟನೆ ನಡೆಸಿದಾಗ ಶೀಘ್ರ ಕ್ರಮ ವಹಿಸುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಆದರೆ ಈವರೆಗೂ ಯಾವುದೇ ಕ್ರಮವಾಗಿಲ್ಲ. ಕೆಲವರಿಗೆ ಯೋಜನೆಯ ಮಾಹಿತಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ವಾರ್ಡ್‌ಮಟ್ಟದಲ್ಲಿ ಸಮೀಕ್ಷೆ ನಡೆಸಿ ಪಟ್ಟಿ ತಯಾರಿಸುವ ತಂಡ ರಚಿಸಬೇಕು. ಸ್ವಂತ ಮನೆಯಿಲ್ಲದ ಸಂತ್ರಸ್ತರಿಗೆ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು. ರಾಜೀವ್ ಗಾಂಧಿ ವಸತಿ ಯೋಜನೆ ನಿಯಮಗಳಿಗೆ ಕಾಯದೆ ಇದೊಂದು ತುರ್ತು ವಿಚಾರವೆಂದು ಪರಿಗಣಿಸಿ ಕ್ರಮ ವಹಿಸಬೇಕು. ಆದಷ್ಟು ತ್ವರಿತವಾಗಿ ಸ್ವಂತ ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನಾವು ದ್ರಾವಿಡ ಕನ್ನಡಿಗರು ಸಂಘಟನೆಯ ಅಭಿ, ನರಸಿಂಹಮೂರ್ತಿ, ದಸಂಸ ಸಂಚಾಲಕ ಎಂ.ವಿ.ಕೃಷ್ಣ ಇತರರಿದ್ದರು.