ಜಿಲ್ಲೆ

ಏಳನೇ ವೇತನ ಆಯೋಗ ಅನುಷ್ಠಾನಕ್ಕೆ ಪಟ್ಟು

ಗಂಗಾಧರ ಬಿ ವಿ

ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಜಿಲ್ಲಾಧಿಕಾರಿಯಶವಂತ್ ವಿ ಗುರುಕರ್‌ಗೆ ಮನವಿ

ರಾಮನಗರ

ಏಳನೇ ವೇತನ ಆಯೋಗದ ಅನುಷ್ಠಾನ ಹಾಗೂ ಸಂಘದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ಮಾತನಾಡಿ, ಕಳೆದ ಹಲವು ವರ್ಷಗಳಿಂದಲೂ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಡಲಾಗುತ್ತಿದೆ. ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು. ಎನ್‌ಪಿಎಸ್ ರದ್ದು ಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸಬೇಕು. ರಾಜ್ಯ ಆರೋಗ್ಯ ಸಂಜೀನಿ ಯೋಜನೆ ಅನುಷ್ಠಾನಗೊಳಿಸಬೇಕು. ಇದರಿಂದ ರಾಜ್ಯ ಸರ್ಕಾರಿ ನೌಕರರು ಮತ್ತುಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ದೊರೆಯುತ್ತದೆ ಎಂದರು.

ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ ಈ ಯೋಜನೆ ಘೋಷಣೆ ಮಾಡಿತ್ತು. ಈಗಾಗಲೇ ಸಚಿವ ಸಂಪುಟದ ಅನು ಮೋದನೆ ಪಡೆಯಲಾಗಿದೆ. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ.

ಯೋಜನೆಯ ಅನುಷ್ಠಾನ ಅಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರ ಕಾರಣ ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರ ಈ ಯೋಜನೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಪ್ರಚಾರ ಸಮಿತಿ ಅಧ್ಯಕ್ಷ ಸತೀಶ್ ಪಾದ್ರಳ್ಳಿ, ಚನ್ನಪಟ್ಟಣ ಕಾರ್ಯದರ್ಶಿ ಎಂ.ಪಿ.ಗುಂಡಪ್ಪ, ಚನ್ನಪಟ್ಟಣ ಖಜಾಂಚಿ ಚಿಕ್ಕಚನ್ನೇಗೌಡ ಸೇರಿ ಇತರರು ಇದ್ದರು.