ಮದ್ದೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದ ತಾಲೂಕು ಕಚೇರಿ ಮುಂದೆ ರೈತ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ ಹಿರಿಯ ಮುಖಂಡ ಕೀಳಘಟ್ಟ ನಂಜುಂಡಯ್ಯ ಮಾತನಾಡಿ, ತಾಲೂಕು ಕಚೇರಿಯಲ್ಲಿ ಲಂಚಗುಳಿತನ ಹೆಚ್ಚಾಗಿದ್ದು, ಇದರಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಸಮಸ್ಯೆ ಆಗುತ್ತಿದೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಗಮನ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಕೃತಿ ವಿಕೋಪದಿಂದ ಬೆಳೆ ನಷ್ಟವಾಗಿರುವ ರೈತರಿಗೆ ಸರ್ಕಾರವು ಮೀಸಲಿಟ್ಟಿರುವ ಬೆಳೆ ಪರಿಹಾರದ ಹಣದಲ್ಲಿ ಪರಿಹಾರವನ್ನು ಕೂಡಲೇ ನೀಡಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಅಲ್ಲದೆ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯಡಿ ಬೆಳೆ ನಷ್ಟವಾಗಿರುವ ರೈತರಿಗೆ ವಿಮೆ ಹಣವನ್ನು ನೀಡಬೇಕು. ತಾಲೂಕಿನ ಎಲ್ಲಾ ಕೆರೆ ಕಟ್ಟೆಗಳನ್ನು ಕೂಡಲೇ ತುಂಬಿಸಬೇಕು ಹಾಗೂ ಕೊಪ್ಪದ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯು ಟನ್‌ಗೆ 150 ರ. ನಂತೆ ಬಾಕಿ ಉಳಿಸಿಕೊಂಡಿರುವ ಹಣವನ್ನು ಕಾರ್ಖಾನೆಯ ಆರಂಭಕ್ಕೂ ಮುನ್ನ ನೀಡಬೇಕು. ಹಾಲು ಉತ್ಪಾದಕರಿಗೆ ಸರ್ಕಾರದಿಂದ ಬರಬೇಕಿರುವ 5 ರೂ. ಪ್ರೋತ್ಸಾಹಧನವನ್ನು ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಸರ್ಕಾರವನ್ನು ಆಗ್ರಹಿಸಿದರು.
ನಂತರ ತಹಸೀಲ್ದಾರ್ ಸೋಮಶೇಖರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ರೈತಸಂಘದ ಮುಖಂಡರಾದ ಕೀಳಘಟ್ಟ ನಂಜುಂಡಯ್ಯ, ರಾಮಕೃಷ್ಣಯ್ಯ, ಅಣ್ಣೂರು ಮಹೇಂದ್ರ, ಸೊ.ಸಿ.ಪ್ರಕಾಶ್, ನಾಗರಾಜು, ವೆಂಕಟೇಶ್, ಪ್ರಭುಲಿಂಗು, ವಿ.ಸಿ.ಉಮಾಶಂಕರ್ ಮತ್ತಿತರರಿದ್ದರು.