ಜಿಲ್ಲೆ

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

Mysuru - Desk - Naveen Kumar H P
  • ಬೇಲೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕೆಂದು ಆಗ್ರಹಿಸಿ ಶಾಸಕ ಎಚ್.ಕೆ.ಸುರೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಸ್ತೆ ಸಂಚಾರ ತಡೆ ಮಾಡುವ ಮೂಲಕ ಶನಿವಾರ ಪ್ರತಿಭಟಿಸಿದರು.

  • ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ ಇಲ್ಲಿಯವರೆಗೂ ಒಂದು ಕಪ್ಪು ಚುಕ್ಕಿಯೂ ಇಲ್ಲ ಎನ್ನುತ್ತಾರೆ. ಆದರೆ ಇವತ್ತು ಮೈತುಂಬ ಕಪ್ಪು ಚುಕ್ಕಿಗಳೇ ತುಂಬಿವೆ. ಮುಡಾ ಹಗರಣದಲ್ಲಿ ನ್ಯಾಯಾಲಯವೇ ಎಫ್‌ಐಆರ್ ದಾಖಲಿಸುವಂತೆ ಸೂಚಿಸಿದೆ. ಆದ್ದರಿಂದ ಸಿದ್ದರಾಮಯ್ಯ ಅವರು ತಪ್ಪೇ ಮಾಡಿಲ್ಲ ಎಂದ ಮೇಲೆ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ ಎಂದರು.

  • ಬಿಜೆಪಿ ತಾಲೂಕು ಅಧ್ಯಕ್ಷ ವಿಕ್ರಂ ಕೌರಿ ಮಾತನಾಡಿ, ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುವ ಮುನ್ನ ನಾನು ಸಿಂಪಲ್ ವ್ಯಕ್ತಿತ್ವ ಹಾಗೂ ಸಮಾಜವಾದಿ ಎಂದು ಹೇಳುತ್ತಿದ್ದರು. ಇಂದು ಅಧಿಕಾರಕ್ಕೆ ಬಂದ ನಂತರ ಎಲ್ಲವನ್ನೂ ಬಿಟ್ಟು ಪತ್ನಿ ಹೆಸರಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಕಿಡಿಕಾರಿದರು.

  • ಮುಖಂಡ ರೇಣುಕುಮಾರ್ ಮಾತನಾಡಿದರು. ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಅಡಗೂರು ಆನಂದ್, ನಗರಾಧ್ಯಕ್ಷ ವಿನಯ್, ಮುಖಂಡರಾದ ಜಿ.ಕೆ.ಕುಮಾರ್, ಬಸವರಾಜು, ರಮೇಶ್ ಸುವರ್ಣ, ರಂಗನಾಥ್, ಸಿ.ಎಸ್.ಪ್ರಕಾಶ್, ವಿಜಯಣ್ಣ, ಶಿವಪ್ಪ, ಮಲ್ಲಿಕಾರ್ಜುನ್ ಸೇರಿದಂತೆ ಇತರರಿದ್ದರು.