ವಿಜಯವಾಣಿ ಸುದ್ದಿಜಾಲ ಧಾರವಾಡ
ಬೀದರ್ನಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಚಿನ್ ಪಾಂಚಾಳ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ರಾಜಕಾರಣಿಗಳ ಕಿರುಕುಳದಿಂದ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿದ್ದಾರೆ. ಹೀಗಾಗಿ ಕೂಡಲೇ ಅವರ ಸಾವಿಗೆ ಕಾರಣರಾದವರನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗವುದು ಎಂದು ಎಚ್ಚರಿಸಿದರು.
ಸಚಿನ್ ಅವರ ಆತ್ಮಹತ್ಯೆಯಿಂದ ಕುಟುಂಬವು ಸಂಕಷ್ಟಕ್ಕೆ ಒಳಗಾಗಿದ್ದು, ಸಂತ್ರಸ್ತ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ನೀಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ಒದಗಿಸಬೇಕು ಎಂದು ಕೋರಿದರು.
ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಕಾಳಪ್ಪ ಬಡಿಗೇರ, ವಸಂತ ಅರ್ಕಾಚಾರ, ನಾರಾಯಣ ಬಡಿಗೇರ, ಮಹಾರುದ್ರಪ್ಪ ಬಡಿಗೇರ, ಸಂತೋಷ ಬಡಿಗೇರ, ಮಲ್ಲಿಕಾರ್ಜುನ ಬಡಿಗೇರ, ಮಂಜುನಾಥ ಗಿರಿಯಾಲ, ನಿರಂಜನ ಬಡಿಗೇರ, ವಿಠ್ಠಲ ಕಮ್ಮಾರ, ಭೀಮಸೇನ ಬಡಿಗೇರ, ಇತರರು ಇದ್ದರು.