ಜಿಲ್ಲೆ

ಕಾರ್ಮಿಕರಿಗೆ ಸೂಕ್ತ ಸೌಲಭ್ಯ

ಇಂದಿರಾ ಎನ್ ಕೆ

ಬೈಂದೂರು: ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಪ್ರತಿಯೊಂದು ಕೆಲಸಗಳಿಗೆ ಹೊರಜಿಲ್ಲೆ ಹಾಗೂ ಹೊರರಾಜ್ಯದ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಹೊರರಾಜ್ಯ ಹಾಗೂ ಹೊರಜಿಲ್ಲೆಯಿಂದ ಬರುವ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಉಡುಪಿ ಕಳೆದ ಹಲವು ವರ್ಷಗಳಿಂದ ವಲಸೆ ಕಾರ್ಮಿಕರಿಗೆ ಉದ್ಯೋಗದಾತ ಜಿಲ್ಲೆಯಾಗಿ ಪರಿಣಮಿಸಿದರೂ ಸರ್ಕಾರ ವಲಸೆ ಕಾರ್ಮಿಕರಿಗೆ ಕನಿಷ್ಠ ಮೂಲಸೌಕರ್ಯ ಒದಗಿಸುವಲ್ಲಿ ವಿಫಲವಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ ಕಟ್ಟಡ ನಿರ್ಮಾಣ, ಗಾರೆ ಕೆಲಸ, ರಸ್ತೆ ಕಾಮಗಾರಿ, ಮನೆಗೆಲಸ ಅಷ್ಟೇ ಅಲ್ಲದೆ ಕೃಷಿ ಕೆಲಸಗಳಿಗೂ ವಲಸೆ ಕಾರ್ಮಿಕರನ್ನು ಅವಲಂಬಿಸಲಾಗುತ್ತಿದೆ. ಬಾಗಲಕೋಟೆ, ಬಳ್ಳಾರಿ, ರಾಯಚೂರು, ಹಾವೇರಿ, ವಿಜಯಪುರ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಹಾಗೂ ಹೊರರಾಜ್ಯಗಳ ವಲಸೆ ಕಾರ್ಮಿಕರು ಹೊಟ್ಟೆ ಪಾಡಿಗಾಗಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರೂ ಅವರಿಗೆ ಸಮರ್ಪಕವಾದ ಸೂರಿಲ್ಲ. ಇದ್ದ ಕಡೆ ವ್ಯವಸ್ಥೆ ಅವ್ಯವಸ್ಥೆಯಿಂದ ಕೂಡಿದೆ. ಜಿಲ್ಲೆಯ ಹಲವು ಕಡೆ ವಲಸೆ ಕಾರ್ಮಿಕರಿಗೆ ಮೂಲ ಸೌಕರ್ಯವಿಲ್ಲದೆ ಶಾಲಾ ಮೈದಾನದಲ್ಲಿ ಮಲಗುವ ಪರಿಸ್ಥಿತಿ ಇದೆ. ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತವೇ ವಸತಿ ಸಮುಚ್ಚಯದ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.