ಜಿಲ್ಲೆ

ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಬೇಡಿಕೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ದಾಖಲಾತಿ ಗಣನೀಯ ಏರಿಕೆ

Udupi

ಉಡುಪಿ: ಜಿಲ್ಲೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ)ಗಳಲ್ಲಿ ಶೇ.20ರಷ್ಟು ದಾಖಲಾತಿ ಏರಿಕೆ ಕಂಡಿದೆ.

ಉಡುಪಿ ವಲಯದಲ್ಲಿ 133, ಕುಂದಾಪುರ 167, ಬೈಂದೂರು 57, ಕಾರ್ಕಳ 139, ಬ್ರಹ್ಮಾವರ ವಲಯದಲ್ಲಿ 82 ವಿದ್ಯಾರ್ಥಿಗಳ ಸಹಿತ ಒಟ್ಟು 578 ವಿದ್ಯಾರ್ಥಿಗಳು ಎಲ್‌ಕೆಜಿ ಹಾಗೂ ಒಂದನೇ ತರಗತಿಗೆ ದಾಖಲಾಗಿದ್ದಾರೆ.

ಇನ್ನು ಕೆಲವು ಶಾಲೆಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಖಾಸಗಿ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳನ್ನು ಕೆಪಿಎಸ್‌ಗೆ ಸೇರಿಸಲು ಪಾಲಕರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಪ್ರಸ್ತುತ ವರ್ಷ 1ನೇ ತರಗತಿಗೆ ಹೊಸದಾಗಿ ಶೇ.10ರಷ್ಟು ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈಗಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು, ವಿದ್ಯಾರ್ಥಿಗಳ ಬೋಧನೆಗೆ ಸುಸಜ್ಜಿತ ಕೊಠಡಿ, ವ್ಯವಸ್ಥಿತ ಪ್ರಯೋಗಾಲಯ, ಪ್ರತ್ಯೇಕ ಕಂಪ್ಯೂಟರ್ ಲ್ಯಾಬ್, ಗುಣಮಟ್ಟದ ಗ್ರಂಥಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ, ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಗೃಹ ವ್ಯವಸ್ಥೆ ಹೊಂದಿರುತ್ತದೆ.

‘ಕಳೆದ ವರ್ಷಕ್ಕಿಂತ ಈ ಬಾರಿ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳವಾಗಿದೆ. ಇದು ಸರ್ಕಾರಿ ಶಾಲೆಗಳ ಉಳಿವಿನ ಕಡೆಗೆ ಮೊದಲ ಹೆಜ್ಜೆಯಾಗಿದ್ದು, ಈ ಸಂಖ್ಯೆ ಮುಂದಿನ ದಿನದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಪ್ರಸ್ತುತ ಕೆಪಿಎಸ್ ತರಗತಿಯಲ್ಲಿ 30 ವಿದ್ಯಾರ್ಥಿಗಳಿಗೆ ಅವಕಾಶವಿದೆ. ಪಾಲಕರ ಒತ್ತಡದಿಂದಾಗಿ 40 ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಎಂದು ಜಿಲ್ಲೆಯ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶೇಷಶಯನ ಕಾರಿಂಜ ‘ವಿಜಯವಾಣಿ’ಗೆ ತಿಳಿಸಿದ್ದಾರೆ.

ಇನ್ನೂ 8 ಕೆಪಿಎಸ್ ಪ್ರಸ್ತಾವನೆ: ಜಿಲ್ಲೆಯಲ್ಲಿ ಒಟ್ಟು 599 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿದ್ದು, ಇದರಲ್ಲಿ 8 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಆಯ್ಕೆ ಮಾಡಲಾಗಿತ್ತು. ಇನ್ನೂ 8 ಶಾಲೆಗಳಿಗೆ ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಡಿಡಿಪಿಐ ಶೇಷಶಯನ ಕಾರಿಂಜ ತಿಳಿಸಿದ್ದಾರೆ.