ಮಂಗಳೂರು : ಮಳೆಗಾಲದಲ್ಲಿ ಡೆಂಗ್ಯೂ ರೋಗ ಹೆಚ್ಚಾಗಿ ಹರಡುವ ಸಾಧ್ಯತೆ ಇದ್ದು, ನಮ್ಮ ಪರಿಸರವನ್ನು ಸ್ವಚ್ಚವಾಗಿರಿಸಿ ಸೊಳ್ಳೆ ಉತ್ಪತ್ತಿ ಆಗದಂತೆ ತಡೆಯಲು ಕ್ರಮವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಹೇಳಿದರು.
ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂಗ್ಯೂ ದಿನದ ಅಂಗವಾಗಿ ಜಿಲ್ಲಾ ವೆನ್ಲಾಕ್ ಆಸ್ವತ್ರೆಯ ಆವರಣದಲ್ಲಿ ನಡೆದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸೊಳ್ಳೆಗಳು ಉತ್ಪತ್ತಿ ಆಗದಂತೆ ಮನೆಯಲ್ಲಿ ಸಂಗ್ರಹವಾಗಿರುವ ನೀರಿನ ಮೂಲಗಳನ್ನು ಕಾಲಕಾಲಕ್ಕೆ ಸ್ವಚ್ಚಗೊಳಿಸಿ ಲಾರ್ವ ಬೆಳೆಯದಂತೆ ಎಚ್ಚರ ವಹಿಸಬೇಕು ಎಂದರು.
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ನವೀನ್‌ಚಂದ್ರ ಕುಲಾಲ್ ಮಾತನಾಡಿ ಬಳಿಕೆ ಮಾಡಿ ಎಸೆದ ತ್ಯಾಜ್ಯ, ತೆಂಗಿನ ಚಿಪ್ಪು, ಪ್ಲಾಸ್ಟಿಕ್ ಬಾಟಲಿ, ಟಯರು, ಮನೆಯ ಮೇಲಿನ ಛಾವಣಿಯಲ್ಲಿ ನಿಂತ ನೀರಿನಲ್ಲಿ ಡೆಂೆ ಹರಡಿಸುವ ಈಡೀಸ್ ಸೊಳ್ಳೆ ಉತ್ಪತ್ತಿಯಾಗುತ್ತದೆ. ಇದನ್ನು ಸಾರ್ವಜನಿಕರು ಕೈ ಜೋಡಿಸಿದರೆ ಡೆಂಗ್ಯೂ ಮುಕ್ತ ಸಮಾಜದ ನಿರ್ಮಾಣ ಸಾಧ್ಯ ಎಂದರು.
ಜಾಥಾ ವೆನ್ಲಾಕ್ ಜಿಲ್ಲಾಸ್ಪತ್ರೆಯಿಂದ ಆರಂಭವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯವರೆಗೆ ಸಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ರಾಜ್ಯ ಸಾಂಕ್ರಾಮಿಕ ರೋಗಗಳ ಸಂಶೋಧನಾಧಿಕಾರಿ ಡಾ.ನಾಗರಾಜ್, ವೆನ್ಲಾಕ್ ಆಸ್ಪತ್ರೆಯ ಡಾ. ಜೆಸಿಂತಾ, ಡಾ. ಸುಧಾಕರ್ ಉಪಸ್ಥಿತರಿದ್ದರು.