ನಾಗಮಂಗಲ: ಸಾರ್ವಜನಿಕರಲ್ಲಿ ಡೆಂಘೆ ಜ್ವರದ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ ಎಂದು ದೇವಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚೇತನ್ ಹೇಳಿದರು.
ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಡೆಂಘೆ ಜ್ವರ ಹರಡುವ ಈಡೀಸ್ ಸೊಳ್ಳೆ ನಿಂತ ನೀರಲ್ಲಿ ಉತ್ಪತ್ತಿಯಾಗುತ್ತವೆ. ಆದ್ದರಿಂದ ತೊಟ್ಟಿ, ಡ್ರಮ್, ಬ್ಯಾರೆಲ್, ಫ್ರಿಡ್ಜ್, ಹೂಕುಂಡ, ಟ್ಯಾಂಕಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛಗೊಳಿಸಿ ಎಂದರು.
ಸೊಳ್ಳೆ ಪರದೆ, ಸೊಳ್ಳೆ ಬತ್ತಿ ಉಪಯೋಗಿಸಿ. ನೀರಿನ ಶೇಖರಣೆಗಳನ್ನು ಮುಚ್ಚಿಡಿ. ಮನೆ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಿ. ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಸೊಳ್ಳೆ ಉತ್ಪತ್ತಿಗಳನ್ನು ತಡೆಗಟ್ಟಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬ ನಾಗರಿಕರು ಹೆಚ್ಚು ನಿಗಾ ವಹಿಸಬೇಕೆಂದು ಸಲಹೆ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋವಿಂದು, ಆರೋಗ್ಯ ಇಲಾಖೆಯ ಈಶ್ವರ್ ಇತರರಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅರಿವು ಮೂಡಿಸಲಾಯಿತು.