ಕೋಡಿಕಲ್‌ನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಪ್ರತಿ ಶುಕ್ರವಾರ ನಡೆಯುತ್ತಿರುವ ಈಡೀಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನ ಕಾರ್ಯಕ್ರಮದಲ್ಲಿ ಆರೋಗ್ಯ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು. 
ಜಿಲ್ಲೆ

ಸೊಳ್ಳೆ ನಿರ್ಮೂಲನೆಯಿಂದ ಡೆಂಗ್ಯೂ ನಿಯಂತ್ರಣ ಸಾಧ್ಯ

Mangaluru - Shravan Kumar Nala

ಮಂಗಳೂರು: ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಅಂಶಗಳ ಬಗ್ಗೆ ಸಾರ್ವಜನಿಕರು ಜಾಗೃತಿ ವಹಿಸಿದರೆ ಡೆಂಗ್ಯೂ ನಿಯಂತ್ರಣ ಸಾಧ್ಯ ಎಂದು ಆರೋಗ್ಯ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ಹೇಳಿದರು.

ಕೋಡಿಕಲ್‌ನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಪ್ರತಿ ಶುಕ್ರವಾರ ನಡೆಯುತ್ತಿರುವ ಈಡೀಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸೊಳ್ಳೆ ಉತ್ಪತ್ತಿಯಾದಷ್ಟು ಡೆಂಗ್ಯೂ ರೋಗದ ಅಪಾಯ ಜಾಸ್ತಿ, ಈ ನಿಟ್ಟಿನಲ್ಲಿ ನೀರು ನಿಲ್ಲುವ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಮನೆಯ ಸುತ್ತಮುತ್ತ ನೀರು ನಿಲ್ಲುವ ಸ್ಥಳಗಳು ಹೆಚ್ಚಾಗಿ ಕಂಡುಬರುತ್ತದೆ. ಡೆಂಗ್ಯೂ ಪ್ರಕರಣಗಳ ಬಗ್ಗೆ ನಿರ್ಲಕ್ಷ್ಯ ಸಲ್ಲದು. ಯಾವುದೇ ಜ್ವರ ಅಥವಾ ಡೆಂಗ್ಯೂ ಪಾಸಿಟಿವ್ ಕಂಡುಬಂದರೆ ಸ್ವಯಂ ಪ್ರೇರಿತವಾಗಿ ಯಾವುದೇ ಮಾತ್ರೆ, ಔಷಧಳನ್ನು ತೆಗೆದುಕೊಳ್ಳದೆ ವೈದ್ಯರನ್ನು ಸಂಪರ್ಕಿಸಬೇಕು. ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡರೆ ಪ್ಲೇಟ್ ಲೆಟ್ ಕಡಿಮೆಯಾಗಿ ಆರೋಗ್ಯ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಮಾಹಿತಿ ನೀಡಿ, ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ ವಾಂತಿ ಇತ್ಯಾದಿ ಡೆಂಗ್ಯೂ ಜ್ವರದ ಲಕ್ಷಣಗಳಾಗಿವೆ. ಇಂತಹ ಸಾಮಾನ್ಯ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸುವುದು ಒಳಿತು. ಸಾರ್ವಜನಿಕರ ಸಹಭಾಗಿತ್ವವಿದ್ದರೆ ಮಾತ್ರ ಸಾಂಕ್ರಾಮಿಕ ರೋಗಗಳನ್ನು ತಡೆಯಲು ಸಾಧ್ಯ ಎಂದರು.

ವಿದಾನ ಪರಿಷತ್ ಸದಸ್ಯ ಐವನ್ ಡಿ ಸೋಜಾ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ. ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಸ್ವಾಗತಿದರು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.