ಜಿಲ್ಲೆ

ಡೆಂಘೆ ನಿಯಂತ್ರಣಕ್ಕೆ ಕ್ರಮ: ರಾಜ್ಯದಲ್ಲಿ 2,877 ಪ್ರಕರಣಗಳು ವರದಿ

ಪಂಕಜ ಕೆ.ಎಂ.

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂಗಾರುಪೂರ್ವ ಮಳೆ ಆರಂಭವಾಗಿರುವುದರಿಂದ ಆರೋಗ್ಯ ಇಲಾಖೆಯು ಡೆಂಘೆ ಜ್ವರ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಈವರೆಗೆ (ಜನವರಿಯಿಂದ ಮೇ 14ರವರೆಗೆ) 26,476 ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 2,877 ಡೆಂಘೆ ಪ್ರಕರಣ ವರದಿಯಾಗಿವೆ. ಕಳೆದ ವರ್ಷ ಈ ವೇಳೆಗೆ 1,725 ಡೆಂಘೆ ಪ್ರಕರಣಗಳು ದೃಢಪಟ್ಟಿದ್ದವು. ಶಂಕಿತ ಪ್ರಕರಣಗಳ ತಪಾಸಣೆ ಹಾಗೂ ಪರೀಕ್ಷೆ ಹೆಚ್ಚಳದಿಂದ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಡೆಂಘೆ ಪ್ರಕರಣಗಳು ಸದ್ಯ ನಿಯಂತ್ರಣದಲ್ಲಿದೆ. ಈ ಜ್ವರದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಜಿಲ್ಲಾ ಆರೋಗ್ಯಾಧಿಕಾರಿಗಳ ಜತೆಗೆ ಸಭೆ ನಡೆಸಲಾಗಿದ್ದು, ಡೆಂಘೆಗೆ ಕಾರಣವಾದ ಈಡಿಸ್ ಈಜಿಪ್ತಿ ಸೊಳ್ಳೆ ಉತ್ಪತ್ತಿ ತಾಣಗಳ ನಾಶಕ್ಕೂ ಕ್ರಮವಹಿಸಲಾಗಿದೆ. ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ಅರಿವು ಮೂಡಿಸುತ್ತಿದ್ದಾರೆ ಎಂದು ಹೇಳಿದೆ.

ರೋಗ ಲಕ್ಷಣಗಳು: ಈಡಿಸ್ ಈಜಿಪ್ತಿ ಜಾತಿಯ ಸೊಳ್ಳೆಗಳಿಂದ ಡೆಂಘೆ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆ ಕಚ್ಚಿದ ನಾಲ್ಕರಿಂದ ಹತ್ತು ದಿನಗಳ ಒಳಗೆ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಂತಿ ಈ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು. ಶಂಕಿತ ಡೆಂಘೆ ಜ್ವರ ಪ್ರಕರಣಗಳ ಪರೀಕ್ಷೆ ಹಾಗೂ ಚಿಕಿತ್ಸೆಯು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯಲಿದೆ.

ಈಡಿಸ್ ಲಾರ್ವಾ ಸಮೀಕ್ಷೆಗಾಗಿ ಮನೆಗಳಿಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಅಗತ್ಯ ಸಹಕಾರವನ್ನು ನೀಡಿ, ಅವರು ನೀಡುವ ಸಲಹೆಗಳನ್ನು ಪಾಲಿಸಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಡೆಂಘೆ ತಡೆಗೆ ವಹಿಸಬೇಕಾದ ಎಚ್ಚರಿಕೆ ಕ್ರಮಗಳು

* ಈಡಿಸ್ ಈಜಿಪ್ತಿ ಸೊಳ್ಳೆಗಳ ಉತ್ಪತ್ತಿ ತಡೆಗೆ ಮನೆಯಲ್ಲಿನ ನೀರಿನ ತೊಟ್ಟಿ, ಬ್ಯಾರಲ್, ಡ್ರಮ್‌ಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛಗೊಳಿಸಬೇಕು.

* ಫ್ರಿಜ್ ಹಿಂಭಾಗ, ಹೂಕುಂಡ ಮತ್ತು ಹೂ ಕುಂಡದ ಕೆಳಗಿನ ತಟ್ಟೆಗಳಲ್ಲಿ ಶೇಖರಣೆಯಾಗುವ ನೀರನ್ನು ನಿಯಮಿತವಾಗಿ ಖಾಲಿ ಮಾಡಬೇಕು.

* ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ. ಘನ ತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಬೇಕು. ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು

* ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವವರು, ವಿಶೇಷವಾಗಿ ವೃದ್ಧರು, ಗರ್ಭಿಣಿಯರು ಹಾಗೂ ಮಕ್ಕಳು ಸೊಳ್ಳೆ ಪರದೆ ಬಳಸಬೇಕು.

* ಡೆಂಘೆ ಮತ್ತು ಚಿಕೂನ್‌ಗುನ್ಯ ರೋಗಿಗಳೂ ತಪ್ಪದೆ ಸೊಳ್ಳೆಯ ಪರದೆಯನ್ನು ಉಪಯೋಗಿಸಬೇಕು.

* ಸೊಳ್ಳೆಗಳು ಕಚ್ಚದಂತೆ ಮೈತುಂಬ ಬಟ್ಟೆ ಧರಿಸಿ, ಸೊಳ್ಳೆ ಪರದೆ, ಸೊಳ್ಳೆ ಬತ್ತಿ, ಮುಲಾಮು, ದ್ರಾವಣವನ್ನು ಉಪಯೋಗಿಸಬೇಕು.

* ಎಲ್ಲ ಸರ್ಕಾರಿ ಹಾಗೂ ಖಾಸಗಿ ಕಚೇರಿಯ ಒಳಾಂಗಣ ಮತ್ತು ಹೊರಾಂಗಣಗಳಲ್ಲಿ ಈಡಿಸ್ ಈಜಿಪ್ತಿ ಸೊಳ್ಳೆಯ ಉತ್ಪತ್ತಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕ.