ಜಿಲ್ಲೆ

ಜಿಲ್ಲೆಯಲ್ಲಿ ಡೆಂಘೆ ಜ್ವರದ ಆತಂಕ, ಈವರೆಗೆ 189 ಪ್ರಕರಣ ದಾಖಲು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಹತ್ವದ ಸಭೆ

ಮಂಡ್ಯ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಘೆ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತುರ್ತು ಕ್ರಮಕ್ಕೆ ಮುಂದಾಗಿದೆ. ಅದರಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಆಯೋಜಿಸಲಾಗಿತ್ತು. ಜ್ವರ ಹರಡದಂತೆ ಗಮನಹರಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಈವರೆಗೆ ಜಿಲ್ಲೆಯಲ್ಲಿ ಬರೋಬರಿ 189 ಜನರಲ್ಲಿ ಡೆಂಘೆ ಜ್ವರ ಕಾಣಿಸಿಕೊಂಡಿದೆ. ಮಂಡ್ಯ ತಾಲೂಕಿನಲ್ಲಿ 89, ಕೆ.ಆರ್.ಪೇಟೆಯಲ್ಲಿ 9, ನಾಗಮಂಗಲದಲ್ಲಿ 9, ಶ್ರೀರಂಗಪಟ್ಟಣದಲ್ಲಿ 16, ಮದ್ದೂರಿನಲ್ಲಿ 34, ಮಳವಳ್ಳಿಯಲ್ಲಿ 14 ಮತ್ತು ಪಾಂಡವಪುರ ತಾಲೂಕಿನಲ್ಲಿ 18 ಪ್ರಕರಣ ಪತ್ತೆಯಾಗಿದೆ. ಇನ್ನು ಈಗಾಗಲೇ 1500ಕ್ಕೂ ಹೆಚ್ಚು ಜನರ ರಕ್ತ ಮಾದರಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಆದರೆ ಆತಂಕ ಹೆಚ್ಚಾಗುತ್ತಿರುವ ಮಕ್ಕಳಲ್ಲಿ ಜ್ವರ ಕಾಣಿಸಿಕೊಳ್ಳುತ್ತಿರುವುದು. ಎರಡು ಮೂರು ದಿನಕ್ಕೆ ಮಕ್ಕಳು ತೀವ್ರ ಅಸ್ವಸ್ಥಗೊಳ್ಳುತ್ತಿದ್ದಾರೆ. ಇದರಿಂದಾಗಿ ಡೆಂಘೆ ಜ್ವರ ಬಂದಿದೆಯೇ, ಇಲ್ಲವೋ ಎನ್ನುವ ಆಂತಕ ಮೂಡಿಸಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತರ್ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಡಿಸಿ ಡಾ.ಕುಮಾರ, ಜಿಲ್ಲೆಯಲ್ಲಿ ಡೆಂಘೆ ಜ್ವರ ಪ್ರಕರಣಗಳು ಹೆಚ್ಚುತ್ತಿರುವುದರಿಂದ ನಿಯಂತ್ರಣ ಮಾಡಲು ಅಗತ್ಯ ಕ್ರಮವಹಿಸಿ. ಹಾಸ್ಟೆಲ್ ಗಳಲ್ಲಿರುವ ಮಕ್ಕಳಿಗೆ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸುವಂತೆ ತಿಳಿಸಿ. ವಸತಿ ನಿಲಯದ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದರು.

ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಸಾರ್ವಜನಿಕರು ಮನೆಯ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹಳೆಯ ಟೈಯರ್, ತೆಂಗಿನ ಚಿಪ್ಪುಗಳು ಮುಂತಾದ ವಸ್ತುಗಳನ್ನು ತೆರವುಗೊಳಿಸಿ. ಶುದ್ಧ ಕುಡಿಯುವ ನೀರನ್ನು ಬಳಸಿ. ಮಳೆಗಾಲ ಪ್ರಾರಂಭವಾಗಿದ್ದು, ಸ್ಥಳೀಯ ಸಂಸ್ಥೆಗಳು ನಿಗದಿತವಾಗಿ ತಮ್ಮ ವ್ಯಾಪ್ತಿಯ ರಸ್ತೆ ಹಾಗೂ ಚರಂಡಿಗಳನ್ನು ಪರಿಶೀಲಿಸಿ. ಎಲ್ಲಿಯೋ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗದಂತೆ ನೋಡಿಕೊಳ್ಳಿ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಆರ್.ಸಿ.ಎಚ್ ಅಧಿಕಾರಿ ಡಾ.ಅನಿಲ್ಕುಮಾರ್, ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎನ್.ಆಶಾಲತಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ರಾಜಮೂರ್ತಿ, ಡಿಡಿಪಿಯು ಸಿ.ಚೆಲುವಯ್ಯ ಇತರರಿದ್ದರು.